ಅರ್ಹ ಫಲಾನುಭವಿಗಳಿಗೆ ಸೌಲಭ್ಯ ನೀಡಿ

ಪರಿಣಾಮಕಾರಿಯಾಗಿ ಉಪಯೋಜನೆ ಅನುಷ್ಠಾನ ಮಾಡಿ: ಎಡಿಸಿ

130

Get real time updates directly on you device, subscribe now.


ತುಮಕೂರು: ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಸೌಲಭ್ಯವನ್ನು ಸಮಪರ್ಕವಾಗಿ ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಿ ಫೆಬ್ರವರಿ ಮಾಸಾಂತ್ಯಕ್ಕೆ ವರದಿ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡದ ಉಪ ಯೋಜನೆ ಕಾಯ್ದೆ- 2013 ಮತ್ತು 2017ರ ಅನುಷ್ಠಾನ ಅಧಿನಿಯಮಗಳಡಿ ಜನವರಿ- 2023ರ ಮಾಹೆಯ ಅಂತ್ಯದ ವರೆಗೆ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸಿರುವ ಕಾರ್ಯಕ್ರಮ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆಗಳಲ್ಲಿ ವಿವಿಧ ಇಲಾಖೆಗಳ ಪ್ರಗತಿ ವಿವರದ ಮಾಹಿತಿ ಪಡೆದ ಅವರು ಪ.ಜಾತಿ ಮತ್ತು ಪ. ಪಂಗಡಗಳ ಜನರ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆ ಹಾಗೂ ಕಾರ್ಯಕ್ರಮ ಜಾರಿಗೆ ತಂದಿದೆ. ಬಾಕಿ ಇರುವ ಫಲಾನುಭವಿಗಳನ್ನು ಶೀಘ್ರ ಆಯ್ಕೆ ಮಾಡಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸುವುದರೊಂದಿಗೆ ಮಂಜೂರಾಗಿರುವ ಅನುದಾನ ಶೇ.100 ರಷ್ಟು ಬಳಕೆ ಆಗಬೇಕು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಗಳ ಯೋಜನೆಗಳಲ್ಲಿ ಪ.ಜಾತಿ ಹಾಗೂ ಪ.ಪಂಗಡದ ಅರ್ಹರಿರುವ ಪ್ರತಿಯೊಬ್ಬರಿಗೂ ಯೋಜನೆ ಸೌಲಭ್ಯ ತಲುಪಿಸುವ ಕಾರ್ಯ ಮಾಡಬೇಕು.

ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ ಮಂಜೂರಾಗಿರುವ ಅನುದಾನಕ್ಕೆ ಸಂಬಂಧಿಸಿದಂತೆ ಆಯಾ ಸ್ಥಾಯಿ ಸಮಿತಿ ಮತ್ತು ಸಾಮಾನ್ಯ ಸಭೆಗಳಲ್ಲಿ ಕ್ರಿಯಾ ಯೋಜನೆಗಳಿಗೆ ಮಂಜೂರಾತಿ ಪಡೆದು, ನಿಗದಿತ ಅವಧಿಯೊಳಗೆ ಯೋಜನೆಗಳ ಅನುಷ್ಠಾನ ಮಾಡಿ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಬೇಕು. ವಿವಿಧ ಅಭಿವೃದ್ಧಿ ನಿಗಮಗಳಿಂದ ವಿತರಿಸಲಾಗುವ ಜಮೀನು, ಕೊಳವೆ ಬಾವಿ ಸೌಲಭ್ಯ, ಮೂಲ ಸೌಕರ್ಯ, ಉದ್ಯಮಶೀಲತಾ ತರಬೇತಿ, ಸ್ವಯಂ ಉದ್ಯೋಗ ಕಾರ್ಯಕ್ರಮ, ವಿವಿಧ ಪರಿಕರಗಳ ವಿತರಣೆ ಸೇರಿದಂತೆ ವಿವಿಧ ಸೌಲಭ್ಯವನ್ನು ತ್ವರಿತವಾಗಿ ಕಲ್ಪಿಸುವಂತೆ ತಿಳಿಸಿದರು.

ಫೆಬ್ರವರಿ ಮಾಸಾಂತ್ಯಕ್ಕೆ ಸಭೆ: ಸಂಬಂಧಿಸಿದ ಎಲ್ಲಾ ಇಲಾಖೆಗಳೂ ವಿಳಂಬ ಮಾಡದೆ ಜಾಗ್ರತೆ ವಹಿಸಿ, ಕಾರ್ಯಕ್ರಮ ಜಾರಿ ಮಾಡಿ ಜನರಿಗೆ ಸವಲತ್ತು ಕಲ್ಪಿಸಬೇಕು. ಈ ಸಂಬಂಧ ಫೆಬ್ರವರಿ 2023ರ ಮಾಸಾಂತ್ಯಕ್ಕೆ ಶೇಕಡವಾರು 50 ಕ್ಕಿಂತ ಕಡಿಮೆ ಪ್ರಗತಿ ಸಾಧಿಸುವ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಕರೆಯಲಾಗುವುದು. ಎಲ್ಲಾ ಇಲಾಖೆಗಳ ಯೋಜನಾ ಕಾರ್ಯಕ್ರಮಗಳ ಸೌಲಭ್ಯ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು. ಯಾವುದೇ ರೀತಿಯ ಸಮಸ್ಯೆ ಉದ್ಭವಿಸಿದಾಗ ಅವುಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಶೀಘ್ರದಲ್ಲಿಯೇ ಬಗೆಹರಿಸಿ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು. ಮಂಜೂರಾಗಿರುವ ಮೀಸಲು ಅನುದಾನವನ್ನು ಸಮರ್ಪಕವಾಗಿ ಬಳಸದೇ ವಾಪಸ್ ಹೋದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್.ಕೃಷ್ಣಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುನಾಥ್.ಡಿ.ಎನ್, ರೇಷ್ಮೆ ಇಲಾಖೆಯ ಉಪ ನಿರ್ದೇಶಕ ರಾಮಕೃಷ್ಣ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಡಾ.ಶ್ರೀಧರ್, ಜಿಲ್ಲಾ ಪಶು ಸಂಗೋಪನ ಇಲಾಖೆಯ ಉಪ ನಿರ್ದೇಶಕ ಡಾ.ಜಯಣ್ಣ, ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ನಂಜಯ್ಯ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರಘು, ಜಿಲ್ಲಾ ಪ್ರವಾಸೋದ್ಯಮ ಅಧಿಕಾರಿ ಮಂಗಳಗೌರಿ ವಿ ಭಟ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!