ತುಮಕೂರು: ನಗರದ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ತಡರಾತ್ರಿ ತುರ್ತು ಚಿಕಿತ್ಸಾ ವಿಭಾದಲ್ಲಿ ಪೊಲೀಸ್ ಅಧಿಕಾರಿ ರಾಮಕೃಷ್ಣ ರಾತ್ರಿ ಪಾಳಿ ವೈದ್ಯರು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ಮುಂದಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಕ್ರಮ ಖಂಡಿಸಿ ಶುಕ್ರವಾರ ವೈದ್ಯರು ಪ್ರತಿಭಟನೆ ನಡೆಸಿ ಎಸ್ ಪಿಗೆ ದೂರು ಸಲ್ಲಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ವೈದ್ಯರು ಮತ್ತು ಜಿಲ್ಲಾಸ್ಪತ್ರೆ ಸಿಬ್ಬಂದಿ ಪೊಲೀಸ್ ಅಧಿಕಾರಿ ದುರ್ವರ್ತನೆ ಖಂಡಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಗುರುವಾರ ಮಧ್ಯರಾತ್ರಿ 01.15 ರ ಸಮಯದಲ್ಲಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾದಲ್ಲಿ ಹಾಜರಿದ್ದ ವೈದ್ಯರು ಮತ್ತು ಸಿಬ್ಬಂದಿ ಅಪಘಾತದಲ್ಲಿ ಗಾಯಾಳುವಾಗಿದ್ದ ಸುರೇಶ್ ಎಂಬ ವ್ಯಕ್ತಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾಗ ನೀಡಬೇಕಾದ ಸೂಕ್ತ ಚಿಕಿತ್ಸೆಯನ್ನು ಯಾವುದೇ ವಿಳಂಬವಿಲ್ಲದೆ ನೀಡಿದರೂ ಸಹ ರೋಗಿಯ ಸಹಚರರು ಮತ್ತು ಪೊಲೀಸ್ ಅಧಿಕಾರಿ ರಾಮಕೃಷ್ಣ ಮದ್ಯಪಾನ ಮಾಡಿ ಬಂದು ಆಸ್ಪತ್ರೆಯ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಗ್ರೂಪ್ ಡಿ ಸಿಬ್ಬಂದಿ ಮೇಲೆ ಕುಡಿದ ಅಮಲಿನಲ್ಲಿ ಹಲ್ಲೆ ಮಾಡಿದ್ದಾರೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡ ಬೇಕಾದ ಪೊಲೀಸ್ ಅಧಿಕಾರಿಯೇ ಸುಮಾರು 2 ಗಂಟೆ ಕಾಲ ಆಸ್ಪತ್ರೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿಸಿ ರೋಗಿಗಳಿಗೆ ಚಿಕಿತ್ಸೆ ನೀಡುವ ಸಿಬ್ಬಂದಿಗೆ ತೊಂದರೆ ಉಂಟು ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ವೈದ್ಯರು ಆರೋಪಿಸಿದರು.
ಆಸ್ಪತ್ರೆಯ ಸಿಬ್ಬಂದಿ ಮೇಲೆ ಅನುಚಿತ ವರ್ತನೆ ತೋರಿ ಅವಾಚ್ಯ ಶಬ್ದಗಳಿಂದ ನಿಂದಿಸದ ಪೊಲೀಸ್ ಅಧಿಕಾರಿ ರಾಮಕೃಷ್ಣ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಮತ್ತು ಆಸ್ಪತ್ರೆ ಸಿಬ್ಬಂದಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕಿ, ಡಾ.ವೀಣಾ, ಡಾ.ಚೇತನ್, ಡಾ.ಚಂದನ್, ಡಾ.ದ್ವಾರಕ್, ರಾಜ್ಯ ಸರ್ಕಾರಿ ವೈದ್ಯಾಧಿಕಾರಿ ಸಂಘದ ಸದಸ್ಯರು, ಜಿಲ್ಲಾಸ್ಪತ್ರೆ ಸಿಬ್ಬಂದಿ, ನರ್ಸ್ಗಳು ಹಾಜರಿದ್ದರು.
Comments are closed.