ಕಟ್ಟುನಿಟ್ಟಾಗಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಿ

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಸೂಚನೆ

99

Get real time updates directly on you device, subscribe now.


ತುಮಕೂರು: ಜಿಲ್ಲೆಯಲ್ಲಿ ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ಬೆಳಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿ, ಎಸ್ಎಸ್ಎಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಬೇಕು. ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪ್ರಶ್ನೆ ಪತ್ರಿಕೆಗಳನ್ನು ಠೇವಣಿಸುವ ಖಜಾನೆಗಳಲ್ಲಿ ಸುಸ್ಥಿತಿಯಲ್ಲಿರುವ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ವ್ಯವಸ್ಥೆ ಕಲ್ಪಿಸಿ ಅವುಗಳ ನಿರ್ವಹಣೆ ಮಾಡಬೇಕು ಎಂದರಲ್ಲದೆ ಖಜಾನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಲಕೋಟೆ ಸಾಗಿಸುವ ಕಾರ್ಯದಲ್ಲಿ ಗೊಂದಲ, ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸಾಕಷ್ಟು ಗಾಳಿ, ಬೆಳಕು ಇರುವ ಕೊಠಡಿಗಳನ್ನು ಉಪಯೋಗಿಸಬೇಕು. ಉತ್ತಮ ರೀತಿಯ ಪೀಠೋಪಕರಣ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ನಿಯೋಜಿತ ಅಧಿಕಾರಿಗಳು ಪರೀಕ್ಷೆ ಪಾವಿತ್ರ್ಯತೆ ಕಾಯ್ದುಕೊಂಡು ಯಾವುದೇ ಅಕ್ರಮ ನಡೆಯದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಿದರು. ಪರೀಕ್ಷಾ ದಿನಗಳಂದು ಕೇಂದ್ರದ ಸುತ್ತಮುತ್ತ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿರಬೇಕು ಹಾಗೂ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗುವುದು. ನಿರ್ಬಂಧಿತ ಪ್ರದೇಶಗಳಿಗೆ ಯಾವುದೇ ಅನಧಿಕೃತ ವ್ಯಕ್ತಿಗಳಿಗೆ ಪ್ರವೇಶ ನೀಡಬಾರದು ಎಂದು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ನಂಜಯ್ಯ ಮಾತನಾಡಿ, ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ 22,259 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ 12,810 ಸೇರಿದಂತೆ ಪ್ರಸಕ್ತ ವರ್ಷ 35,069 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.
ಇದಕ್ಕೂ ಮುನ್ನ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚುನಾವಣೆ ಸಂಬಂಧ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಜಿಲ್ಲಾಧಿಕಾರಿ ವೈ.ಎಸ್.ಪಾಟಿಲ ಅವರು ಮತಗಟ್ಟೆಗಳಿಗೆ ಖುದ್ದಾಗಿ ಭೇಟಿ ನೀಡಿ ಮೂಲಭೂತ ಸೌಕರ್ಯ ಕಲ್ಪಿಸಿರುವ ಬಗ್ಗೆ ಪರಿಶೀಲಿಸಬೇಕು ಎಂದು ತಹಶೀಲ್ದಾರ್, ಇಓ ಹಾಗೂ ಎಲ್ಲಾ ಪಿಡಿಒ ಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಮತಗಟ್ಟೆಗಳಲ್ಲಿ ಶೌಚಾಲಯ ಹಾಗೂ ಮತ್ತಿತರೆ ಕಾಮಗಾರಿ ಬಾಕಿಯಿದ್ದಲ್ಲಿ ಕೂಡಲೇ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು ಎಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮರಿಯಪ್ಪ, ಜಿಲ್ಲಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್, ವಿವಿಧ ತಾಲ್ಲೂಕಿನ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳಿಗೆ ನೇಮಿಸಿರುವ ಮುಖ್ಯ ಅಧೀಕ್ಷಕರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!