ದಾಖಲೆ ಇಲ್ಲದೆ ಹಣ ಸಾಗಿಸಿದ್ರೆ ಕ್ರಮ: ಡೀಸಿ

157

Get real time updates directly on you device, subscribe now.


ತುಮಕೂರು: ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಸಮಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗುವ ಸಂಭವವಿದ್ದು, ನೀತಿ ಸಂಹಿತೆ ಜಾರಿ ಅವಧಿಯಲ್ಲಿ ದಾಖಲೆ ರಹಿತ 10,000 ರೂ. ಗಳಿಗಿಂತ ಹೆಚ್ಚಿನ ಮೌಲ್ಯದ ವಸ್ತು ಹಾಗೂ 50,000 ರೂ. ಗಳಿಗಿಂತ ಹೆಚ್ಚಿನ ಮೊತ್ತದ ಹಣ ಸಾಗಾಣಿಕೆ ಮಾಡುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಾದರಿ ನೀತಿ ಸಂಹಿತೆಯ ಸಮರ್ಪಕ ಅನುಷ್ಠಾನಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದಾಖಲಾತಿ ಇಲ್ಲದೆ 50,000 ರೂ. ಗಳಿಗಿಂತ ಹೆಚ್ಚಿನ ಮೊತ್ತದ ಹಣ ಸಾಗಾಣಿಕೆ ಮಾಡಿದಲ್ಲಿ ಸಂಬಂಧಿಸಿದ ಚೆಕ್ಪೋಸ್ಟ್ ಅಧಿಕಾರಿಗಳು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ತಂಡ ಆ ಹಣವನ್ನು ಜಪ್ತಿ ಮಾಡಬೇಕೆಂದು ನಿರ್ದೇಶನ ನೀಡಿದರು.
ನೀತಿ ಸಂಹಿತೆ ಜಾರಿಯಾದ ಕೂಡಲೇ ಸಾರ್ವಜನಿಕರು ಅನಧಿಕೃತವಾಗಿ ಹೆಚ್ಚಿನ ಮೊತ್ತದ ಹಣ ಸಾಗಾಣಿಕೆ ಮಾಡುವಂತಿಲ್ಲ. ದಾಖಲೆ ಸಹಿತ 10 ಲಕ್ಷ ರೂ. ಗಳಿಗಿಂತ ಮೇಲ್ಪಟ್ಟ ಹಣ ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಲ್ಲಿ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ರಾಜು, ಪಾಲಿಕೆ ಆಯುಕ್ತ ದರ್ಶನ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜನಪ್ಪ, ಅಬಕಾರಿ ಉಪ ಆಯುಕ್ತೆ ಶೈಲಜ, ವಾಣಿಜ್ಯ ತೆರಿಗೆ ಇಲಾಖೆಯ ನಾಗರಾಜು ಇನ್ನಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!