ನುಡಿದಂತೆ ಐದು ಗ್ಯಾರಂಟಿಯೂ ಮಾಡೇ ಮಾಡ್ತೇವೆ

ಮುಂದಿನ ಸಂಪುಟ ಸಭೆ ಬಳಿಕ ಅಧಿಕೃತ ಘೋಷಣೆ: ಸಿಎಂ ಸಿದ್ದರಾಮಯ್ಯ

120

Get real time updates directly on you device, subscribe now.


ಬೆಂಗಳೂರು: ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಐದು ಗ್ಯಾರಂಟಿ ಯೋಚನೆಗಳ ಅನುಷ್ಠಾನ ಕುರಿತಂತೆ ಹೆಚ್ಚಿನ ವಿವರಗಳು ಹಾಗೂ ಗ್ಯಾರಂಟಿಗಳಿಗೆ ಇರುವ ಷರತ್ತು ಮತ್ತು ನಿಯಮಗಳನ್ನು ಮುಂದಿನ ಸಭೆಗಳಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆಯಡಿ ಗೃಹಿಣಿಯರಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡಲಾಗುವುದು. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳಿಗೆ 3000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1500 ರೂ. ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.
ಕಟ್ಟುನಿಟ್ಟಾದ ತೆರಿಗೆ ಸಂಗ್ರಹ ಮೂಲಕ ನಾವು ಆರ್ಥಿಕ ಹೊರೆ ಕಡಿಮೆ ಮಾಡಿಕೊಳ್ಳುತ್ತೇವೆ. ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂ. ಬರಬೇಕಿದೆ, ಕರ್ನಾಟಕದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ. ನಮ್ಮ ರಾಜ್ಯದ ಬಜೆಟ್ ಗಾತ್ರ 3.10 ಲಕ್ಷ ಕೋಟಿ ರೂ. ಇದೆ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ಸಿದ್ದರಾಮಯ್ಯ ದೂರಿದರು.

ಆರ್ಥಿಕ ದಿವಾಳಿ ಮಾಡಲ್ಲ..
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ನ ಗ್ಯಾರಂಟಿಗಳ ವಿರುದ್ಧ ಕಿಡಿಕಾರಿದ್ದರು. ಈ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇ ಆದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ ಯಾವುದೇ ಆರ್ಥಿಕ ದಿವಾಳಿ ಆಗದಂತೆ ಯೋಜನೆಗಳನ್ನು ಜಾರಿಗೆ ತರುತ್ತೇವೆ. ಐದು ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ಆಗಬಹುದು ಎಂದರು.

ಕೇಂದ್ರದಿಂದ ಅನ್ಯಾಯ..
ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರ ನಮಗೆ 5,495 ಕೋಟಿ ರೂ. ಕೊಡಬೇಕಿತ್ತು. ಆದರೆ ಹಿಂದಿನ ರಾಜ್ಯ ಸರ್ಕಾರ ಅದನ್ನು ಪಡೆಯಲಿಲ್ಲ. ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಅವರು ಹಾಗೂ ಪ್ರಧಾನಿ ನರೇಂದ್ರ ಮೋದಿಯ ಕಾರಣದಿಂದಾಗಿ ಕರ್ನಾಟಕಕ್ಕೆ ನಷ್ಟವಾಯಿತು. ಜಿಎಸ್ಟಿ ಮೂಲಕ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಹೋಗುತ್ತಿದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ. ಬಸವರಾಜ ಬೊಮ್ಮಾಯಿ ಜಿಎಸ್ ಟಿ ಕೌನ್ಸಿಲ್ ಸದಸ್ಯರಾಗಿದ್ದರೂ ನಮ್ಮ ತೆರಿಗೆ ಪಾಲನ್ನು ಸರಿಯಾಗಿ ಪಡೆಯಲಿಲ್ಲ. ಇದರಿಂದ ರಾಜ್ಯಕ್ಕೆ ಅನ್ಯಾವಾಗಿದೆ.
ಸಿದ್ಧರಾಮಯ್ಯ, ಮುಖ್ಯಮಂತ್ರಿ

Get real time updates directly on you device, subscribe now.

Comments are closed.

error: Content is protected !!