ತುಮಕೂರು: ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಅನುಷ್ಠಾನಗೊಳಿಸಿರುವ ಯೋಜನೆಗಳಿಂದ ಫಲಾನುಭವಿಗಳ ಜೀವನ ಸುಧಾರಣೆಯಾಗಿರುವ ಕುರಿತು ವಿವಿಧ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಿ, ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡದ ಉಪ ಯೋಜನೆ ಕಾಯ್ದೆ- 2013 ಮತ್ತು 2017ರ ಅನುಷ್ಠಾನ ಅಧಿನಿಯಮಗಳಡಿ ಮಾರ್ಚ್- 2023ರ ಮಾಹೆಯ ಅಂತ್ಯದ ವರೆಗೆ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸಿರುವ ಕಾರ್ಯಕ್ರಮಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ವರದಿಯ ಮಾಹಿತಿ ಪಡೆದ ಅವರು, ಪ.ಜಾತಿ ಮತ್ತು ಪ.ಪಂಗಡಗಳ ಜನರ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆ ಹಾಗೂ ಕಾರ್ಯಕ್ರಮ ಜಾರಿಗೆ ತಂದಿದೆ. ವಿವಿಧ ಇಲಾಖೆಗಳು ವಿಳಂಬ ಮಾಡದೇ ಜಾಗ್ರತೆ ವಹಿಸಿ, ಫಲಾನುಭವಿಗಳನ್ನು ಆಯ್ಕೆ ಮಾಡಿ ಮಂಜೂರಾದ ಅನುದಾನ ಶೇ.100 ರಷ್ಟನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿವೆ. ಇದರಿಂದ ಜನರ ಜೀವನ ಸುಧಾರಣೆಯಾಗಿದ್ದು, ಈ ಕುರಿತು ಫಲಾನುಭವಿಗಳನ್ನು ಸಂದರ್ಶಿಸಿ ಅವರ ಅಭಿಪ್ರಾಯ ಸಂಗ್ರಹಿಸಿ ಯೋಜನೆಗಳು ಅನುಷ್ಠಾನವಾಗಿರುವ ಕುರಿತು ಸಮಗ್ರ ವರದಿ ಸಲ್ಲಿಸಬೇಕು. ಇದರಿಂದ ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಗಳು ಜನಪರವಾಗಿ ಅನುಷ್ಠಾನಗೊಂಡ ರೀತಿ ಅರಿತು ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಸರ್ಕಾರದ ಯೋಜನೆಗಳ ಜಾರಿಗೊಳಿಸಲು ಅನುಕೂಲವಾಗಲಿದೆ ಎಂದರು.
ರೇಷ್ಮೆ ಇಲಾಖೆ, ಪಶು ಸಂಗೋಪನ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ, ಯೋಜನೆಗಳಲ್ಲಿ ಪ.ಜಾತಿ ಹಾಗೂ ಪ.ಪಂಗಡದ ಅರ್ಹರಿಗೆ ಸೌಲಭ್ಯ ತಲುಪಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಈ ಯೋಜನೆಗಳ ಅನುಷ್ಠಾನಕ್ಕೆ ಇಲಾಖೆಗಳು ಎಲ್ಲಾ ಇಲಾಖೆಗಳ ಯೋಜನಾ ಕಾರ್ಯಕ್ರಮಗಳ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು. ಯೋಜನೆಗಳು ಸಮರ್ಪಕವಾಗಿ ಜಾರಿಯಾಗದೆ ಇರುವುದು ಕಂಡು ಬಂದರೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ತುಮಕೂರು ಉಪ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ನಗರದ ಭಾರತಿ ನಗರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಮಳೆಯಿಂದ ಆಗಬಹುದಾದ ಹಾನಿಗಳ ತಡೆ ಗಟ್ಟುವ ಬಗ್ಗೆ ವಿಸ್ತೃತ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡದ ಉಪ ಯೋಜನೆಯಡಿ ಮಾರ್ಚ್- 2023ರ ಮಾಹೆಯ ಅಂತ್ಯದವರೆಗೆ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸಿರುವ ಕಾರ್ಯಕ್ರಮಗಳ ಕುರಿತ ಪ್ರಗತಿ ಪರಿಶೀಲನಾ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಅನುಷ್ಠಾನಗೊಳಿಸಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸುವಂತೆ ಪಿಆರ್ಇ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುನಾಥ್.ಡಿ.ಎನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀಧರ್, ಜಿಲ್ಲಾ ಕಾರ್ಮಿಕಾಧಿಕಾರಿ ರಮೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಡಾ.ಶ್ರೀಧರ್, ಜಿಲ್ಲಾ ಪಶು ಸಂಗೋಪನ ಇಲಾಖೆಯ ಉಪ ನಿರ್ದೇಶಕ ಡಾ.ಜಯಣ್ಣ, ಡಿಡಿಪಿಐ ನಂಜಯ್ಯ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರಘು, ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಇಮ್ರಾನ್ವುಲ್ಲಾ ಖಾನ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
Comments are closed.