ಪಾವಗಡ: ಹೊಸ ಸರ್ಕಾರದ ಮೇಲೆ ಜನರ ನಿರೀಕ್ಷೆ ಹೆಚ್ಚಿದ್ದು, ಸರ್ಕಾರಿ ನೌಕರರು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಸಂಪೂರ್ಣವಾಗಿ ಜಾರಿಗೊಳಿಸುವಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಡಿಯುವ ನೀರು ಸರಬರಾಜು, ಮುಂಗಾರು ಸಿದ್ಧತೆ ಹಾಗೂ ಇತರೆ ಪ್ರಮುಖ ವಿಚಾರಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಜನರ ಸಮಗ್ರ ಕಲ್ಯಾಣಕ್ಕಾಗಿಯೇ ಸರ್ಕಾರವು ಜನಪರ ಯೋಜನೆ ಜಾರಿಗೊಳಿಸುತ್ತದೆ. ಸರ್ಕಾರಿ ನೌಕರರು ಯೋಜನೆಗಳ ಫಲಾನುಭವಿಗಳಿಂದ ಯಾವುದೇ ಫಲಾಪೇಕ್ಷೆ ಬಯಸದೇ ನಿಸ್ವಾರ್ಥವಾಗಿ ಕರ್ತವ್ಯ ನಿರ್ವಹಿಸಬೇಕು. ಈ ಬಗ್ಗೆ ದೂರು ಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಪಾವಗಡ ತಾಲ್ಲೂಕಿನ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಸಮಗ್ರ ಮಾಹಿತಿ ಪಡೆದ ಸಚಿವರು, ತಾಲೂಕಿನ ಎರಡು ಸಾವಿರ ರೈತರಿಗೆ ಹನಿ ನೀರಾವರಿ ಉಪಕರಣ ವಿತರಿಸುವಂತೆ ಸೂಚಿಸಿದರು.
ರೈತರಿಗೆ ಅನುಕೂಲವಾಗುವಂತೆ ಕೃಷಿ ಹೊಂಡಗಳ ನಿರ್ಮಾಣ ಮಾಡಿ, ಈಗಾಗಲೇ ನಿರ್ಮಾಣಗೊಂಡಿರುವ ಕೃಷಿ ಹೊಂಡಗಳ ಸಮರ್ಪಕ ಬಳಕೆಯಾಗುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳುವಂತೆ ಸೂಚಿಸಿದರು.
ತಾಲೂಕಿನ ಕೊಳವೆ ಬಾವಿಗಳಿಂದ ಫ್ಲೋರೈಡ್ ರಹಿತ ಶುದ್ಧ ಕುಡಿಯುವ ನೀರನ್ನು ವ್ಯತ್ಯಯವಾಗದಂತೆ ಪೂರೈಸಬೇಕು. ಜಲ ಜೀವನ್ ಅಭಿಯಾನದಡಿ ಜಿಲ್ಲೆಯಲ್ಲಿ ಅಳವಡಿಸಿರುವ ಪ್ಲಾಸ್ಟಿಕ್ ಪೈಪ್ ಗಳು ಕಿತ್ತು ಬರುವಂತಿದ್ದು, ಇವುಗಳನ್ನು ಬದಲಿಸಿ ಸಧೃಡ ಕಬ್ಬಿಣ ಪೈಪ್ ಗಳನ್ನು ಅಳವಡಿಸುವಂತೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯಡಿ ತಾಲೂಕುನಲ್ಲಿ ಕಾರ್ಯ ನಿರ್ವಹಿಸುತ್ತಿರುವ 15 ವಸತಿ ನಿಲಯದಲ್ಲಿ 1700 ಸಂಖ್ಯೆಯ ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಟ್ಟು, ವಸತಿ ನಿಲಯದಲ್ಲಿ ಶುಚಿತ್ವ, ಆಹಾರ ಗುಣಮಟ್ಟ, ರಕ್ಷಣೆ ಬಗ್ಗೆ ನಿಗಾ ವಹಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಜೂನ್ 11 ರಿಂದ 21ರ ವರೆಗೆ ಶಕ್ತಿ ಯೋಜನೆಯಡಿ ತಾಲೂಕಿನ 59,375 ಸಂಖ್ಯೆಯ ಮಹಿಳೆಯರು ಸದುಪಯೋಗ ಪಡಿಸಿಕೊಂಡಿರುವ ಮಾಹಿತಿ ಪಡೆದ ಸಚಿವರು, ತಾಲೂಕಿನಲ್ಲಿರುವ ಕರ್ನಾಟಕ ಸಾರಿಗೆಯ 42 ಬಸ್ಗಳ ಜೊತೆ ಅಗತ್ಯ ಇರುವ ಕಡೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದರು.
ಗೃಹಲಕ್ಷ್ಮೀ ಯೋಜನೆಯಡಿ ಸರ್ಕಾರದ ನಿಯಾಮಾನುಸಾರ ತಾಲೂಕಿನ 62203 ಮಹಿಳಾ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸಿ ಕೊಡುವಲ್ಲಿ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್ ಗೆ ಸೂಚಿಸಿದರು.
ರಸಗೊಬ್ಬರ ವಿತರಣೆ ಕೇಂದ್ರದಲ್ಲಿ ದರಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಕಡ್ಡಾಯವಾಗಿ ಪ್ರಕಟಿಸಿರುವ ಬಗ್ಗೆ ಖಚಿತ ಪಡಿಸಿಕೊಂಡು ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹೆಚ್.ವಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಸರ್ಕಾರಿ ಆಸ್ಪತ್ರೆಗಳು, ಅರಣ್ಯೀಕರಣ, ಲೋಕೋಪಯೋಗಿ ಇಲಾಖೆಯ ಕಾಮಗಾರಿ ಮೊದಲಾದ ವಿಷಯಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು. ಸಭೆಯ ನಂತರ ಸಚಿವರು ಸೋಲಾರ್ ಪಾರ್ಕ್ಗೆ ಭೇಟಿ ನೀಡಿ ಪರಿಶೀಲಿಸಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್, ಉಪ ವಿಭಾಗಾಧಿಕಾರಿ ರಿಷಿ ಆನಂದ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರವಿ.ಕೆ.ಹೆಚ್, ಎತ್ತಿನಹೊಳೆ ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ, ಕೃಷಿ ಇಲಾಖೆಯ ಮಧುಗಿರಿ ವಿಭಾಗದ ಜಂಟಿ ನಿರ್ದೇಶಕಿ ದೀಪಶ್ರೀ, ರೇಷ್ಮೆ ಇಲಾಖೆ ಜಂಟಿ ನಿರ್ದೇಶಕ ರಾಮಕೃಷ್ಣ, ಜಿಲ್ಲಾ ಯೋಜನಾ ನಿರ್ದೇಶಕ ಆಂಜಿನಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಾಧಿಕಾರಿ ದಿನೇಶ್, ತಾಲೂಕು ಆರೋಗ್ಯಾಧಿಕಾರಿ ತಿರುಪತ್ತಯ್ಯ, ತಹಶೀಲ್ದಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಹಾಜರಿದ್ದರು.
Comments are closed.