ತುಮಕೂರು: ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯನ್ನು ಎಲ್ಲರೂ ಒಗ್ಗೂಡಿ ಉತ್ಸುಕತೆಯಿಂದ ಆಚರಿಸುವ ಸಂಬಂಧ ಸಕಲ ಸಿದ್ಧತೆ ಕೈಗೊಳ್ಳುವಂತೆ ಮತ್ತು ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದ ವರೆಗೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ, ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅಂದಿನ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯಂದು ನಾವೆಲ್ಲರೂ ಸಂತಸದಿಂದ ಭಾಗವಹಿಸಿ ಅರ್ಥಪೂರ್ಣವಾಗಿ ಹಬ್ಬದ ರೀತಿ ಅಂದಿನ ದಿನವನ್ನು ಆಚರಿಸಬೇಕು ಎಂದು ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕೈಗಾರಿಕಾ ಇಲಾಖೆ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಸುಮಾರು ಎರಡು ಸಾವಿರ ಯುವಕರಿಗೆ ಉದ್ಯೋಗ ಒದಗಿಸುವ ಪ್ರಮಾಣ ಪತ್ರ ವಿತರಿಸಬೇಕು. ಈ ನಿಟ್ಟಿನಲ್ಲಿ ವಿವಿಧ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿ ಉದ್ಯೋಗ ದೊರಕಿಸಿ ಕೊಡುವ ಸಂಬಂಧ ಪೂರಕ ಕ್ರಮ ಕೈಗೊಳ್ಳುವಂತೆ ಕೌಶಲ್ಯಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಹಾಗೂ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಆರೋಗ್ಯ ಇಲಾಖೆಯ ವತಿಯಿಂದ ಎಲ್ಲಾ ತಾಲ್ಲೂಕುಗಳಲ್ಲಿ ಆರೋಗ್ಯ ಶಿಬಿರ ಏರ್ಪಡಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಅಗ್ನಿಶಾಮಕ ಇಲಾಖೆಯ ವತಿಯಿಂದ ಒಂದು ವಾರ ಮುಂಚಿತವಾಗಿ ಶಾಲಾ ಕಾಲೇಜುಗಳಲ್ಲಿ ಅನಿಲ ಸೋರಿಕೆ, ಅಗ್ನಿ ದುರಂತ ಮುಂತಾದವುಗಳ ಕುರಿತು ಅಣುಕು ಪ್ರದರ್ಶನ ಏರ್ಪಡಿಸುವಂತೆ ತಾಕೀತು ಮಾಡಿದರು.
ಕಾರ್ಮಿಕ ಇಲಾಖೆಯ ವತಿಯಿಂದ ಆಗಸ್ಟ್ 1 ರಿಂದ 15ರ ವರೆಗೆ ಅಂದಾಜು ಹತ್ತು ಸಾವಿರ ಕೂಲಿ ಮತ್ತು ಕಟ್ಟಡ ಕಾರ್ಮಿಕರನ್ನು ನೋಂದಣಿ ಮಾಡಿಸುವಂತೆ ಸೂಚಿಸಿದರಲ್ಲದೆ ಪಾಲಿಕೆ ವತಿಯಿಂದ ಅಂದಾಜು 275 ಪೌರ ಕಾರ್ಮಿಕರಿಗೆ ಖಾಯಂ ಉದ್ಯೋಗ ಆದೇಶ ಹಾಗೂ ಆರೋಗ್ಯ ಭಾಗ್ಯ ಮತ್ತು ವಿಮೆ ಸೌಲಭ್ಯ ಪ್ರಮಾಣ ಪತ್ರ ಒದಗಿಸುವಂತೆ ಸೂಚಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಮಾನಿಕೆರೆಯಲ್ಲಿ ಆಗಸ್ಟ್ 13, 14 ಮತ್ತು 15ರಂದು ಮಕ್ಕಳಿಗೆ ಮತ್ತು ಮಹಿಳೆಯರಿಗೆ ಉಚಿತ ಬೋಟಿಂಗ್, ಕಯಾಕಿ ರೈಡ್ ಏರ್ಪಡಿಸುವಂತೆ ಪಾಲಿಕೆ ಉಪ ಆಯುಕ್ತೆ ಸುಮತಿ ಅವರಿಗೆ ಸೂಚಿಸಿದರು.
ಜಿಲ್ಲೆಯ ಕಾರಾಗೃಹಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವಂತೆ ಕರಾಗೃಹ ಅಧಿಕಾರಿಗೆ ಸೂಚಿಸಿದ ಅವರು ಜಿಲ್ಲಾ ಗ್ರಂಥಾಲಯಕ್ಕೆ ನಿಯಮಿತವಾಗಿ ಭೇಟಿ ನೀಡುವ ಅತ್ಯುತ್ತಮ ಓದುಗನನ್ನು ಗುರುತಿಸಿ ಬೆಸ್ಟ್ ರೀಡರ್ ಪ್ರಶಸ್ತಿ ನೀಡುವಂತೆ ಗ್ರಂಥಾಲಯ ಉಪ ನಿರ್ದೇಶಕಿಗೆ ಸೂಚಿಸಿದರು.
ಪಾಲಿಕೆ ವತಿಯಿಂದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣಗಳೊಂದಿಗೆ ವಿದ್ಯುತ್ ದೀಪಾಲಂಕಾರ, ಶಾಮಿಯಾನ, ಆಸನದ ವ್ಯವಸ್ಥೆ, ಲೋಕೋಪಯೋಗಿ ಇಲಾಖೆಯ ವತಿಯಿಂದ ಧ್ವಜ ಸ್ಥಂಭ ನಿರ್ಮಾಣ, ತೋಟಾಗಾರಿಕೆ ಇಲಾಖೆಯಿಂದ ಹೂಕುಂಡ ವ್ಯವಸ್ಥೆ ಸೇರಿದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಅವರ ಇಲಾಖೆಗಳಿಗೆ ಸಂಬಂಧಿಸಿಂತೆ ವಿವಿಧ ಕೆಲಸ ಕಾರ್ಯಗಳನ್ನು ಹಂಚಿಕೆ ಮಾಡಲಾಯಿತು.
ಅಲ್ಲದೆ ಸ್ವಾಗತ ಸಮಿತಿ, ಪರೇಡ್ ಸಮಿತಿ, ಸನ್ಮಾನ ಸಮಿತಿ, ಸಿಹಿ ವಿತರಣೆ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿಗಳನ್ನು ರಚಿಸಿ ವಿವಿಧ ಕೆಲಸ ಕಾರ್ಯಗಳನ್ನು ನಿರ್ವಹಿಸುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಜಿಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮರಿಯಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
Comments are closed.