ತುಮಕೂರು: ದೆಹಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು ವಾಸ್ತವ್ಯ ಹೂಡಲು ಅನುಕೂಲವಾಗುವಂತೆ ಹಾಸ್ಟೆಲ್ ನಿರ್ಮಾಣ ಮಾಡಬೇಕು ಎಂದು ಸಂಸದ ಜಿ.ಎಸ್.ಬಸವರಾಜು ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ದೆಹಲಿಗೆ ವಿವಿಧ ಸ್ಪರ್ಧಾತ್ಮ ಪರೀಕ್ಷೆ ಬರೆಯಲು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಅವರು ಉಳಿದುಕೊಳ್ಳಲು ಸಮರ್ಪಕ ವ್ಯವಸ್ಥೆ ಇಲ್ಲದ ಕಾರಣ ಸಮಸ್ಯೆ ಅನುಭವಿಸುವಂತಾಗಿದೆ. ಆದ್ದರಿಂದ ಈ ವಿದ್ಯಾರ್ಥಿಗಳಿಗೆ ಸೂಕ್ತ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಈಗಾಗಲೇ ಈ ಸಂಬಂಧ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರೊಂದಿಗೆ ಚರ್ಚಿಸಿದ್ದೇನೆ, ದೆಹಲಿಯಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಕರ್ನಾಟಕದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸುವ ಮೂಲಕ ನಾವು ಅವರ ಉಜ್ವಲ ವೃತ್ತಿ ಜೀವನ ನಿರ್ಮಿಸಲು ಮತ್ತು ನಮ್ಮ ರಾಜ್ಯಕ್ಕೆ ಆಸ್ತಿಯಾಗಲು ಅನುವು ಮಾಡಿಕೊಡಬೇಕಾಗಿದೆ ಎಂದು ತಿಳಿಸಿದ್ದಾರೆ.
ಹಾಸ್ಟೆಲ್ ನ್ನು ಕೇಂದ್ರ ಸರ್ಕಾರದಿಂದ ಗುತ್ತಿಗೆ ಅಥವಾ ಬಾಡಿಗೆ ಆಧಾರದ ಮೇಲೆ ಕರ್ನಾಟಕದ ಭೂಮಿ ಅಥವಾ ಪಾರ್ಸೆಲ್ ಭೂಮಿ ಪಡೆಯುವ ಮೂಲಕ ನಿರ್ಮಿಸಬಹುದಾಗಿದೆ. ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಲೋಕೋಪಯೋಗಿ ಸಚಿವರಿಗೆ ಸಲ್ಲಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕುಂದರನಹಳ್ಳಿ ರಮೇಶ್ ಹಾಜರಿದ್ದರು.
Comments are closed.