ಪೋಷಕರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲಿ

ಎಲ್ಲಾ ಕ್ಷೇತ್ರದಲ್ಲಿ ಭಾರತ ಪ್ರಗತಿ ಹೊಂದಿದೆ: ಪರಮೇಶ್ವರ್

982

Get real time updates directly on you device, subscribe now.


ತುಮಕೂರು: ಭಾರತದ ಒಟ್ಟು ಜನಸಂಖ್ಯೆಯಲ್ಲಿ ಹೆಚ್ಚಿನ ಜನರು ಗ್ರಾಮೀಣ ಭಾಗದಲ್ಲಿ ವಾಸಿಸುತ್ತಾರೆ. ಆದ್ದರಿಂದ ಗ್ರಾಮೀಣ ಭಾಗವು ಅಭಿವೃದ್ದಿ ಹೊಂದುವ ಮೂಲಕ ಅಲ್ಲಿನ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿದಾಗ ಮಾತ್ರ ದೇಶದ ಅಭಿವೃದ್ದಿ ಸಾಧ್ಯ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು.

ಕೊರಟಗೆರೆ ತಾಲ್ಲೂಕು ಕೋಳಾಲ ಗ್ರಾಮದ ಬಸವೇಶ್ವರ ಕೇಂದ್ರೀಯ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಿಸಿ ಮಾತನಾಡಿ, ಪೋಷಕರು ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದಾಗ ಮಾತ್ರ ಅವರು ತಮ್ಮ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಎಂದರು.

ರಾಜ್ಯದಲ್ಲಿರುವ ಎಲ್ಲಾ ಮಠಗಳ ಮಠಾಧೀಶರು ಮಠದೊಂದಿಗೆ ವಿದ್ಯಾ ಸಂಸ್ಥೆಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಹಾಗೂ ಬಡ ಕುಟುಂಬಗಳ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ. ತ್ರಿವಿಧ ದಾಸೋಹಕ್ಕೆ ಹೆಸರಾದ ಸಿದ್ದಗಂಗಾ ಮಠದಲ್ಲಿ ಶ್ರೀಸಿದ್ದಲಿಂಗ ಸ್ವಾಮೀಜಿ ಅವರು ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಶಿಕ್ಷಣ, ವಸತಿ ಹಾಗೂ ಅನ್ನವನ್ನು ನೀಡಿ ಪೋಷಣೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತುಂಬಾ ಬುದ್ದಿವಂತರು ಮತ್ತು ಕ್ರಿಯಾಶೀಲರು ಆಗಿರುತ್ತಾರೆ. ಈ ವಿದ್ಯಾರ್ಥಿಗಳು ಶಿಕ್ಷಣ ಪಡೆದ ನಂತರ ಏನಾದರೂ ಸಾಧನೆ ಮಾಡಬೇಕು ಎಂಬ ಅಚಲವಾದ ವಿಶ್ವಾಸವನ್ನು ಇಟ್ಟುಕೊಂಡಿರುತ್ತಾರೆ. ಕಷ್ಟದಿಂದ ಬೆಳೆದು ಉನ್ನತ ಹುದ್ದೆಗಳನ್ನು ಪಡೆದ ಅಧಿಕಾರಿಗಳಿಗೆ ಮಾತ್ರ ಮತ್ತೊಬ್ಬರ ಕಷ್ಟದ ಬಗ್ಗೆ ತಿಳಿಯುತ್ತದೆ ಎಂದು ಹೇಳಿದರು.

ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಕೆಲಸ ನಿರ್ವಹಿಸುತ್ತಿದ್ದಾರೆ. ಮಹಿಳೆಯರು ಎಲ್ಲ ರಂಗಗಳಲ್ಲೂ ಮುಂಚೂಣಿಯಲ್ಲಿರುವುದು ನಮ್ಮ ದೇಶದ ಪ್ರಗತಿಯ ಧ್ಯೋತಕವಾಗಿದೆ ಎಂದು ತಿಳಿಸಿದರು.
ಕೋಳಾಲ ಬಸವೇಶ್ವರ ಕಾಲೇಜಿನಲ್ಲಿ ಕಲಾ, ವಾಣಿಜ್ಯ ವಿಭಾಗಗಳ ಜತೆಗೆ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಿದರೆ ಈ ವಿಭಾಗದಲ್ಲಿ ಕಲಿತು ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಸಹಾಯವಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಗಿರೀಶ್ ಅವರಿಗೆ ತಿಳಿಸಿದರು.

ಎಲೆರಾಂಪುರ ಮಠದ ಶ್ರೀಹನುಮಂತನಾಥ ಸ್ವಾಮೀಜಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣ ಪಡೆದು ಉದ್ಯೋಗಕ್ಕೆ ಸೇರಿದ ನಂತರ ತಂದೆ ತಾಯಿಗಳನ್ನು ಅವರು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್, ಜಿ.ಪಂ. ಸಿಇಒ ಜಿ. ಪ್ರಭು, ಉಪವಿಭಾಗಾಧಿಕಾರಿ ರಿಷಿ ಆನಂದ್, ತಹಶೀಲ್ದಾರ್ ಮುನಿಸ್ವಾಮಿ ರೆಡ್ಡಿ, ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಗಿರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು, ಡಾ.ಪ್ರಕಾಶ್ ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!