ಜನರ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಿ

ಜನಸಂಪರ್ಕ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ರಾಜಣ್ಣ ಸೂಚನೆ

555

Get real time updates directly on you device, subscribe now.


ಮಧುಗಿರಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸ್ಥಳದಲ್ಲೇ ಅಹವಾಲು ಇತ್ಯರ್ಥ ಪಡಿಸುವ ಉದ್ದೇಶದಿಂದ ಪ್ರಪ್ರಥಮ ಬಾರಿಗೆ ಐ.ಡಿ.ಹಳ್ಳಿ ಹೋಬಳಿಯಲ್ಲಿ ಮೊದಲ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ಜಿಲ್ಲೆಯ ಮಧುಗಿರಿ ತಾಲ್ಲೂಕು ಐ.ಡಿ.ಹಳ್ಳಿ ಹೋಬಳಿಯ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಂದಾಯ ಇಲಾಖೆ, ಆರ್ಡಿಪಿಆರ್ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗುತ್ತಿವೆ, ಎಲ್ಲಾ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನಿವೇಶನ ಇರುವರಿಗೆ ಗೃಹ ನಿರ್ಮಾಣ ಸೌಲಭ್ಯ ಹಾಗೂ ನಿವೇಶನ ಇಲ್ಲದವರಿಗೆ ನಿವೇಶನಗಳನ್ನು ಮಂಜೂರು ಮಾಡಬೇಕು. ಆಗಸ್ಟ್ 30 ರಂದು ಎಲ್ಲಾ ಅರ್ಹ ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗಲಿದೆ, ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ಸೌಲಭ್ಯ ತಲುಪಿಸುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಿ ಪಂಚಾಯತ್ ಮಟ್ಟದ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುತ್ತದೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗಿದೆ, ಅಗತ್ಯ ಇರುವ ಕಡೆ ಗೋಶಾಲೆಗಳನ್ನು ಸ್ಥಾಪಿಸಲಾಗುತ್ತಿದೆ. ಎತ್ತಿನಹೊಳೆ ಯೋಜನೆಯಡಿ ಹಲವು ಕೆರೆಗಳು ತುಂಬಿಸಲಾಗುತ್ತದೆ, ಅಗತ್ಯ ಇರುವವರಿಗೆ ಹಸು, ಕುರಿ, ಮೇಕೆ ಸಾಕಾಣಿಕೆಗೆ ಬಡ್ಡಿ ರಹಿತ ಸಾಲ ನೀಡಲು ಕ್ರಮ ವಹಿಸಲಾಗಿದೆ, ಸಾರ್ವಜನಿಕ ಆಸ್ತಿಗಳ ಸಂರಕ್ಷಿಸಿ, ಅವುಗಳ ಉಪಯೋಗ ಮುಂದಿನ ಪೀಳಿಗೆಗೆ ತಲುಪಿಸಲಾಗುವ ಹೊಣೆಗಾರಿಕೆ ನಮ್ಮೆಲ್ಲರದಾಗಿದೆ. ಸಾರ್ವಜನಿಕರ ಸಮಸ್ಯೆಗಳು ಏನೇ ಇದ್ದರೂ ನನ್ನ ಗಮನಕ್ಕೆ ತರಬೇಕು, ಕಳೆದ ಬಾರಿ ಶಾಸಕರಾಗಿದ್ದ ಸಂದರ್ಭದಲ್ಲಿ ಸುಮಾರು 16400 ಮನೆಗಳನ್ನು ತಾಲೂಕಿನಲ್ಲಿ ನಿರ್ಮಾಣ ಮಾಡಿಸಿ, ಗುಡಿಸಲು ಮುಕ್ತ ತಾಲೂಕನ್ನಾಗಿ ಮಾಡಲಾಯಿತು ಎಂದರು.

ರೈತರು ಸಣ್ಣ ಪುಟ್ಟ ಸಮಸ್ಯೆ, ವ್ಯಾಜ್ಯಗಳಿಗೆ ಪರಸ್ಪರ ದ್ವೇಷ ಸಾಧಿಸಬಾರದು, ಪರಸ್ಪರ ಸಹಕಾರ, ನಂಬಿಕೆಯಿಂದ ಅಭಿವೃದ್ಧಿ ಸಾಧ್ಯ ಎಂದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ ಮಾತನಾಡಿ, ಹೋಬಳಿ ಮಟ್ಟದ ಜನ ಸಂಪರ್ಕ ಹಾಗೂ ಸಾರ್ವಜನಿಕರ ಕುಂದು ಕೊರತೆಗಳ ನಿವಾರಣೆ ಸಭೆಯ ಮೂಲಕ ಸಾರ್ವಜನಿಕರ ಸಮಸ್ಯೆ ಸಮರ್ಪಕವಾಗಿ ಬಗೆಹರಿಸಬಹುದಾಗಿದ್ದು, ಇಂದೊಂದು ಉತ್ತಮ ಜನೋಪಕಾರಿ ಸಭೆಯಾಗಿದೆ. ವಿವಿಧ ಇಲಾಖೆಗಳು, ನಿಗಮಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ, ಸಾರ್ವಜನಿಕರು ಅರ್ಜಿ ಸಲ್ಲಿಸಿದ ಕೂಡಲೇ ಸ್ಥಳದಲ್ಲೇ ಅಹವಾಲು ಇತ್ಯರ್ಥಪಡಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಕಾರ್ಯಕ್ರಮ ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕಿ ದೀಪಶ್ರೀ, ಡಿಹೆಚ್ಒ ಡಾ.ಮಂಜುನಾಥ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀಧರ್, ತಹಶೀಲ್ದಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!