ತುಮಕೂರು: ತುಮಕೂರು ಜಿಲ್ಲೆಯನ್ನು ಗ್ರೇಟರ್ ಬೆಂಗಳೂರನ್ನಾಗಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದ್ದು, ಮುಂದಿನ ದಿನಗಳಲ್ಲಿ ಏಷ್ಯಾ ಖಂಡದ ಅತಿ ದೊಡ್ಡ ಕೈಗಾರಿಕಾ ಹಬ್ ಆಗಿ ತುಮಕೂರು ಜಿಲ್ಲೆ ಹೊರಹೊಮ್ಮಲಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಕಾರ್ಪೋರೇಟ್ ಸೋಷಿಯಲ್ ರೆಸ್ಪಾನ್ಸಿಬಲಿಟಿ ನಿಧಿಯಡಿ ಕೈಗೊಳ್ಳಬಹುದಾದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಕೈಗಾರಿಕೋದ್ಯಮಿಗಳೊಂದಿಗೆ ನಡೆಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಹೂಡಿಕೆ ಮಾಡಲು ದೊಡ್ಡ ದೊಡ್ಡ ಕಂಪನಿಗಳಿಗೆ ಮೂಲ ಸೌಕರ್ಯಗಳೊಂದಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಜಿಲ್ಲೆಯ ವಸಂತ ನರಸಾಪುರ, ಹಿರೇಹಳ್ಳಿ ಮತ್ತು ಅಂತರಸನಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಹೂಡಿಕೆ ಮಾಡಿ ಕಾರ್ಯ ನಿರ್ವಹಿಸುತ್ತಿರುವ ಕಂಪನಿ, ಕೈಗಾರಿಕೆಗಳು ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ (ಸಿಎಸ್ಆರ್) ನಿಧಿಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರ ವಿವೇಚನೆ ಮೇರೆಗೆ ಶಿಕ್ಷಣ, ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಏಳಿಗೆಗಾಗಿ ವ್ಯಯಿಸಲು ಹೆಚ್ಚಿನ ಒತ್ತನ್ನು ನೀಡಬೇಕೆಂದು ಕೈಗಾರಿಕೋದ್ಯಮಿಗಳಿಗೆ ಕರೆ ನೀಡಿದರು.
ಈಗಾಗಲೇ ಜಿಲ್ಲೆಯಲ್ಲಿ ಹೆಚ್ಎಎಲ್ ವತಿಯಿಂದ ಹೆಲಿಕಾಪ್ಟರ್ ಉತ್ಪಾದನಾ ಘಟಕ ಸ್ಥಾಪಿಸುವುದರ ಮೂಲಕ ಇಲ್ಲಿನ ಜನರಿಗೆ ಉದ್ಯೋಗಾವಕಾಶ ಕಲ್ಪಿಸಿ ಕೊಡಲಾಗಿದ್ದು, ಇಡೀ ವಿಶ್ವದಲ್ಲೇ ಅತಿ ದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಘಟಕವಾಗಿ ಹೆಚ್ಎಎಲ್ ಹೊರ ಹೊಮ್ಮಲಿದೆ ಎಂದರು.
ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಕೇಬಲ್ ಕಾಮಗಾರಿಯು ಪ್ರಗತಿಯಲ್ಲಿದ್ದು, ಅಕ್ಟೋಬರ್ ಮಾಹೆಯೊಳಗೆ ಪೂರ್ಣಗೊಳ್ಳಲಿದೆ, ನಂತರ ವಿದ್ಯುತ್ ಸಮಸ್ಯೆ ಇರುವುದಿಲ್ಲ ಎಂದು ತಿಳಿಸಿದ ಸಚಿವರು, ಈ ಕೈಗಾರಿಕಾ ವಲಯದ ಸುತ್ತ-ಮುತ್ತ ಹೋಟೆಲ್ ಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದಿಲ್ಲ, ಆದುದರಿಂದ ತ್ರೀಸ್ಟಾರ್ ಹೋಟೆಲ್ಗಳು ಸೇರಿದಂತೆ ಹೋಟೆಲ್ಗಳ ಸಂಖ್ಯೆ ಹೆಚ್ಚಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಿಎಸ್ಆರ್ ಅನುದಾನವನ್ನು ಗ್ರಾಮೀಣ ಭಾಗದ ಶಾಲೆ, ಆರೋಗ್ಯ ಇನ್ನಿತರೆ ಸೇವೆಗಳಿಗಾಗಿ ಸಮರ್ಪಕವಾಗಿ ಬಳಕೆ ಮಾಡಿದಾಗ ಮಾತ್ರ ಸ್ಥಳೀಯರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ವಸಂತನರಸಾಪುರ ಕೈಗಾರಿಕಾ ಪ್ರದೇಸದಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣ ಮಾಡಲು 3 ಎಕರೆ ಜಾಗವನ್ನು ಗುರುತಿಸಲಾಗಿದೆ. ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳವನ್ನು ಸ್ಥಾಪಿಸಲು ಸಹ ಜಾಗ ಮಂಜೂರು ಮಾಡಲಾಗಿದ್ದು, ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಸಮುಚ್ಛಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ ಎಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೇಳಿದರು.
ಕೈಗಾರಿಕಾ ಪ್ರದೇಶದಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪಿಸಲಾಗುವುದು, ಕೈಗಾರಿಕಾ ವಲಯದ ಕಾರ್ಮಿಕರು ಎರಡನೇ ಪಾಳಿಯಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳುವ ಸಂದರ್ಭದಲ್ಲಿ ಅವರಿಗೆ ಆಗುವ ಸಮಸ್ಯೆಗಳನ್ನು ತಪ್ಪಿಸಲು ರಾತ್ರಿ ಪಾಳಿಯಲ್ಲಿ ಹೆಚ್ಚಾಗಿ ಪೊಲೀಸ್ ಪೇದೆಗಳನ್ನು ಕರ್ತವ್ಯಕ್ಕೆ ನೇಮಿಸಿ ಎಂದು ಪೊಲೀಸ್ ವರಿಷ್ಠಾಧಿಕಾರಿಗೆ ಅವರು ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ ಕ್ಯಾತ್ಸಂದ್ರ ಬಸ್ ನಿಲ್ದಾಣದಿಂದ ನಗರಕ್ಕೆ ಸಾವಿರಾರು ಮಕ್ಕಳು ಪ್ರತಿದಿನ ಶಾಲೆಗೆ ತೆರಳುತ್ತಾರೆ, ಮಳೆ, ಬಿಸಿಲು ಇದ್ದಾಗ ಅವರು ಕುಳಿತುಕೊಳ್ಳುವುದಕ್ಕಾಗಿ ಒಂದು ತಂಗುದಾಣವನ್ನು ತುರ್ತಾಗಿ ನಿರ್ಮಿಸುವಂತೆ ಹಾಗೂ ಜಿಲ್ಲೆಯ ಸಂಸ್ಕೃತಿಗೆ ಹೊಂದುವ ರೀತಿಯಲ್ಲಿ ಸ್ವಾಗತ ಫಲಕಗಳನ್ನು ಅಳವಡಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.
ರಾಯದುರ್ಗ ಮತ್ತು ದಾವಣಗೆರೆ ರೈಲ್ವೆ ಯೋಜನೆಗೆ ಒಳಪಡುವ ಭೂಮಿಯನ್ನು ರೈತರಿಂದ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ತೆರಿಗೆ ವಸೂಲಾತಿಗೆ ಸಂಬಂಧಿಸಿದಂತೆ ಮೊದಲಿಗೆ ಕೈಗಾರಿಕಾ ವಲಯದ ಆಸ್ತಿಯ ಸಂಪೂರ್ಣ ವಿವರಗಳುಳ್ಳ ಪಟ್ಟಿಯ ಸಿದ್ಧಪಡಿಸಬೇಕು ಹಾಗೂ ತೆರಿಗೆ ಲೆಕ್ಕಾಚಾರವನ್ನು ಮಾಡಿ ಸಲ್ಲಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಕೈಗಾರಿಕಾ ಪ್ರದೇಶಗಳಲ್ಲಿ ದುರಸ್ತಿಗೆ ಒಳಪಟ್ಟಿರುವ ರಸ್ತೆಗಳನ್ನು ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳಿಂದ ಅಭಿವೃದ್ಧಿ ಪಡಿಸಲಾಗುವುದು. ಕೈಗಾರಿಕಾ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲೆಯಲ್ಲಿರುವ 4200 ಶಾಲೆಗಳಲ್ಲಿ 2.5ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಗಳಿಗೆ ಪ್ರಮುಖವಾಗಿ ಮೂಲಭೂತ ಸೌಲಭ್ಯಗಳಾದ ಕೊಠಡಿ, ಶೌಚಾಲಯ, ಆಟದ ಮೈದಾನವನ್ನು ಸಿಎಸ್ಆರ್ ಅನುದಾನದಲ್ಲಿ ಅಭಿವೃದ್ಧಿಪಡಿಸಬೇಕು ಹಾಗೂ ಗುಣಮಟ್ಟದ ಶಿಕ್ಷಣವು ಎಲ್ಲರಿಗೂ ದೊರೆಯುವಂತೆ ಆಗಬೇಕು. ಈ ನಿಟ್ಟಿನಲ್ಲಿ ಅನುದಾನವನ್ನು ಬಳಕೆ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪೂರ್ ವಾಡ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಅತೀಕ್ ಪಾಷಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕೈಗಾರಿಕೋದ್ಯಮಿಗಳು ಇದ್ದರು.
Comments are closed.