ಮಧುಗಿರಿ: ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 6 ರಂದು ಕಾರ್ಯಕ್ರಮ ಉದ್ಘಾಟಿಸಲು ಮಧುಗಿರಿ ಪಟ್ಟಣಕ್ಕೆ ಆಗಮಿಸಲಿದ್ದು, ಈ ಹಿನ್ನಲೆಯಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಂದು ಪೂರ್ವ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮಧುಗಿರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ಷೀರಭಾಗ್ಯ ಯೋಜನೆಯು ಹತ್ತು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಲು ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮವು ಐತಿಹಾಸಿಕವಾಗಿ ಹಾಗೂ ಜಿಲ್ಲಾ ಉತ್ಸವ ರೀತಿಯಲ್ಲಿ ನಡೆಯಬೇಕು, ಆದ್ದರಿಂದ ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಕೆಲಸ ಮಾಡುವುದರ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಪಟ್ಟಣದಲ್ಲಿ ಗುಂಡಿಗಳನ್ನು ಮುಚ್ಚಲು ಪಿಡಬ್ಲ್ಯೂಡಿ ಇಂಜಿನಿಯರ್ ಗಳು ಕೂಡಲೇ ಒಂದು ಸಭೆ ನಡೆಸಿ, ಖುದ್ದಾಗಿ ಅಧಿಕಾರಿಗಳೇ ಪಟ್ಟಣದ ಎಲ್ಲಾ ರಸ್ತೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಹಾಗೂ ಗುಂಡಿ ಬಿದ್ದಿರುವ ಕಡೆ ಡಾಂಬರೀಕರಣ ಮಾಡುವಂತೆ ಪಿಡಬ್ಲ್ಯೂಡಿ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.
ಪಟ್ಟಣದಲ್ಲಿ ಸ್ವಚ್ಛತೆಯನ್ನು ಪೌರ ಕಾರ್ಮಿಕರಿಂದ ಮಾಡಿಸಬೇಕು ಹಾಗೂ ರಸ್ತೆ ಬದಿಗಳಲ್ಲಿರುವ ಗಿಡ ಗಂಟೆ ತೆಗೆಸಿ ಸ್ವಚ್ಛ ಪಟ್ಟಣವನ್ನಾಗಿ ಮಾಡುವ ಜವಾಬ್ದಾರಿಯನ್ನು ಖುದ್ದಾಗಿ ಅವರೇ ತೆಗೆದುಕೊಂಡು ಕೆಲಸ ಮಾಡಿಸುವಂತೆ ಸೂಚನೆ ನೀಡಿ ಜಿಲ್ಲೆಯ ವಿವಿಧ ಭಾಗಗಳಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳಿಂದ ಪಟ್ಟಣದಲ್ಲಿ ಯಾವುದೇ ರೀತಿಯ ಸಂಚಾರ ದಟ್ಟಣೆ ಯಾಗದ ರೀತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದರು.
ಜಿಲ್ಲೆ ವಿವಿಧ ಭಾಗಗಳಿಂದ ಬರುವ ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತು ಮಜ್ಜಿಗೆಯನ್ನು ಸಮರ್ಪಕವಾಗಿ ಹಂಚಿಕೆ ಮಾಡಬೇಕು, ಪ್ರತಿ ಗ್ರಾಮಗಳಿಂದ ಮತ್ತು ಹೋಬಳಿಗಳಿಂದ ಕರೆತರುವ ಜವಾಬ್ದಾರಿಯನ್ನು ವಿಎಸ್ಎಸ್ಎನ್ ನವರು ವಹಿಸಿಕೊಳ್ಳಬೇಕು, ಕಾರ್ಯಕ್ರಮದಲ್ಲಿ ಶಿಸ್ತಿನಿಂದ ಕೂರುವಂತೆ ತಿಳಿಸಬೇಕು ಹಾಗೂ ಕಾರ್ಯಕ್ರಮ ಮುಗಿದ ನಂತರ ಸುರಕ್ಷಿತವಾಗಿ ವಾಪಸ್ ಕರೆದುಕೊಂಡು ಹೋಗುವಂತೆ ಕ್ರಮ ವಹಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸ್ಟಾಲ್ ಗಳನ್ನು ಹಾಕಲಾಗುವುದೆಂದು ತಿಳಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಖಾಲಿ ಇರುವ ನಾಮಫಲಕಗಳಿಗೆ ಸರ್ಕಾರದ ಐದು ಯೋಜನೆಗಳ ಪೈಕಿ ಯಾವುದಾದರೂ ಒಂದು ಯೋಜನೆಯ ಬ್ಯಾನರ್ ಅಳವಡಿಸುವಂತೆ ತಹಶೀಲ್ದಾರ್ಗೆ ತಿಳಿಸಿದರಲ್ಲದೆ, ಕಚೇರಿ ಮುಂಭಾಗದಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸುವಂತೆ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ತಾಲೂಕಿನ 110 ಹಳ್ಳಿಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರನ್ನು ನೀಡುವ ಯೋಜನೆಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ಮಾಡಿಸಲಾಗುವುದು ಹಾಗೂ ತಾಲೂಕಿನ ವಿವಿಧ ಸ್ವಸಹಾಯ ಸಂಘಗಳಿಗೆ ಎನ್ಎಲ್ಆರ್ಎಂ ಹಣವನ್ನು ಫಲಾನುಭವಿಗಳಿಗೆ ಮುಖ್ಯಮಂತ್ರಿಗಳಿಂದ ಕೊಡಿಸಲಾಗುವುದು ಎಂದು ತಿಳಿಸಿದರು.
ತಾಲೂಕಿನ ಗ್ರಾಮೀಣ ಭಾಗದ 20 ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬರಬೇಕು ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು, ಆ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಮುಖ್ಯಮಂತ್ರಿಗಳಿಂದ ಕ್ಷೀರ ಹಾಗೂ ಪೌಷ್ಠಿಕ ಆಹಾರವಾದ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡಲಾಗುವುದೆಂದು ತಿಳಿಸಿದರು.
ತಾಲೂಕಿನ ವಿವಿಧ ಇಲಾಖೆಗಳಲ್ಲಿ ನಡೆಯಬೇಕಾಗಿರುವ ಕಾಮಗಾರಿಗಳ ಶಂಕುಸ್ಥಾಪನೆ, ವಿವಿಧ ಸವಲತ್ತುಗಳ ವಿತರಣೆ ಕುರಿತು ಇನ್ನೂ ಎರಡು ದಿನಗಳಲ್ಲಿ ಮಾಹಿತಿ ನೀಡುವಂತೆ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ ನೀಡಿದರು.
ಕೆಎಂಎಫ್ ರಾಜ್ಯಾಧ್ಯಕ್ಷ ಭೀಮ ನಾಯಕ್ ಮಾತನಾಡಿ ಸಿದ್ದರಾಮಯ್ಯ ಅವರು ಕ್ಷೀರಭಾಗ್ಯ ಯೋಜನೆಗೆ ಆಗ್ಟ್ 1, 2023 ಚಾಲನೆ ನೀಡಿದ್ದರು, ಆ ಸಂದರ್ಭದಲ್ಲಿ ರಾಜ್ಯದ ಹಲವು ಒಕ್ಕೂಟಗಳು ತುಂಬಾ ಸಂಕಷ್ಟದಲ್ಲಿದ್ದವು, ಈ ಯೋಜನೆ ಜಾರಿ ಮಾಡುವ ಮೂಲಕ ಒಕ್ಕೂಟಗಳಿಗೆ ಶಕ್ತಿ ತುಂಬಿದ್ದರು ಎಂದು ತಿಳಿಸಿದರು.
ರೈತರಿಗೆ ಈಗ ಕೊಡುತ್ತಿರುವ ಹಾಲಿನ ದರ ಹೆಚ್ಚು ಮಾಡುವಂತೆ ಸಹಕಾರ ಸಚಿವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು, ಅದರಂತೆ ಆಗಸ್ಟ್ ಒಂದರಿಂದ ಹಾಲಿನ ದರವನ್ನು 3 ರೂ. ಹೆಚ್ಚಳ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ರಾಜೇಂದ್ರ ರಾಜಣ್ಣ, ಕೆಎಂಎಫ್ ಎಂಡಿ ಜಗದೀಶ್, ಸಹಕಾರ ಇಲಾಖೆ ರಿಜಿಸ್ಟರ್ ಕ್ಯಾಪ್ಟನ್ ರಾಜೇಂದ್ರ, ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್, ತುಮಕೂರು ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ಸಿಬ್ಗತ್ ವುಲ್ಲ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
Comments are closed.