ತುಮಕೂರು: ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 5.80 ಲಕ್ಷ ಫಲಾನುಭವಿಗಳು ನೋಂದಣಿಯಾಗಿದ್ದು, ಕುಟುಂಬದ ಯಜಮಾನಿ ಮಹಿಳೆಗೆ ಮಾಸಿಕ 2,000 ರೂ. ಗಳಂತೆ ಜಿಲ್ಲೆಯ ಅರ್ಹ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿಸಿದ್ದ ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿ, ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ್ದಾರೆ, ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಂದರ್ಭದಲ್ಲಿ ಜಿಲ್ಲೆಯ 1.35 ಲಕ್ಷ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಜಮೆ ಮಾಡಲಾಗಿದ್ದು, ಉಳಿದ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಅವರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟಾರೆ ಶೇ.87 ರಷ್ಟು ಕುಟುಂಬದ ಯಜಮಾನಿ ಮಹಿಳೆಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಇನ್ನುಳಿದ ಶೇ.13 ರಷ್ಟು ಮಹಿಳೆಯರನ್ನು ಯೋಜನೆಯಡಿ ನೋಂದಾಯಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಗೆ ಅರ್ಹರಿರುವ ಫಲಾನುಭವಿಗಳು ನೋಂದಣಿಯಾಗದಿದ್ದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳುವಂತೆ ಅವರಿಗೆ ಅರಿವು ಮೂಡಿಸಬೇಕೆಂದು ಸೂಚಿಸಲಾಗಿದೆ, ಯಾವ ಫಲಾನುಭವಿ ಖಾತೆ ಹೊಂದಿರುವುದಿಲ್ಲವೋ ಅವರಿಗೆ ಹತ್ತಿರದ ಬ್ಯಾಂಕ್ಗಳಲ್ಲಿ ಖಾತೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು.
ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಪ್ರತಿ ಮಹಿಳೆಯರು ಈ ಯೋಜನೆಯಡಿ ಅರ್ಹ ಫಲಾನುಭವಿಗಳಾಗಿರುತ್ತಾರೆ, ಗೃಹಲಕ್ಷ್ಮಿ ಯೋಜನೆಯು ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ದೊರಕುವಂತೆ ಮಾಡಿ ಬಡತನ ತೊಲಗಿಸಲು ಹಾಗೂ ಅವಶ್ಯಕತೆ ಪೂರೈಸಿಕೊಳ್ಳಲು ಒಂದು ಉತ್ತಮ ಯೋಜನೆಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನೋಂದಣಿ ಕೇಂದ್ರಗಳಲ್ಲಿ ಯಾವುದೇ ಲೋಪ ಬಾರದಿರುವ ರೀತಿ ನೋಡಿಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ ಎಂದು ತಿಳಿಸಿದರು.
ಒಂದು ವೇಳೆ ಅರ್ಹ ಫಲಾನುಭವಿಗಳು ಸದರಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಲು ಆಗದೇ ಇರುವಂತಹ ಸಂದರ್ಭದಲ್ಲಿ ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗಿದ್ದು, ಇವರ ಮೂಲಕ ಅರ್ಜಿಗಳನ್ನು ಫಲಾನುಭವಿಗಳ ಮನೆಯ ಬಾಗಿಲಿನಲ್ಲಿಯೇ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದರು.
ಸರ್ಕಾರ ಜಾರಿಗೆ ತಂದಿರುವ ಉಳಿದ ಮೂರು ಯೋಜನೆಗಳಾದ ಅನ್ನಭಾಗ್ಯ, ಶಕ್ತಿ ಹಾಗೂ ಗೃಹಜ್ಯೋತಿ ಯೋಜನೆಗಳನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಅಂಗನವಾಡಿ ಹಾಗೂ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಸಿಇಓ ಅವರು ನೀಲನಕ್ಷೆ ತಯಾರಿಸಿದ್ದು, ಆದ್ಯತೆ ಮೇರೆಗೆ ಸಿಎಸ್ಆರ್ ಅನುದಾನದಡಿ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಾಲಿಕೆ ಮೇಯರ್ ಪ್ರಭಾವತಿ, ಉಪಮೇಯರ್ ನರಸಿಂಹಮೂರ್ತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ಮಹಾ ನಗರಪಾಲಿಕೆ ಆಯುಕ್ತೆ ಅಶ್ವಿಜ, ಉಪ ವಿಭಾಗಾಧಿಕಾರಿ ಗೌರವ್ಕುಮಾರ್ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್, ಮಹಿಳಾ ಮತ್ತು ಮಕ್ಕಳ ಅಧಿಕಾರಿ ಪವಿತ್ರ ಹಾಗೂ ಸಾವಿರಾರು ಮಹಿಳೆಯರು ಭಾಗವಹಿಸಿದ್ದರು.
Comments are closed.