ಸೆ.15ಕ್ಕೆ ಸಂವಿಧಾನ ಓದು ಕಾರ್ಯಕ್ರಮ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಪ್ರಯುಕ್ತ ಪ್ರೋಗ್ರಾಂ: ಡೀಸಿ

478

Get real time updates directly on you device, subscribe now.


ತುಮಕೂರು: ಎಲ್ಲರೂ ಭಾರತದ ಸಂವಿಧಾನದ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಪೀಠಿಕೆಗೆ ಬದ್ಧರಾಗುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 15ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾದ್ಯಂತ ಸಂವಿಧಾನ ಪೀಠಿಕೆಯನ್ನು ಒಟ್ಟಾಗಿ ಓದುವ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂದು ರಾಜ್ಯ ಮಟ್ಟದಲ್ಲಿ ಬೆಂಗಳೂರಿನ ವಿಧಾನ ಸೌಧದ ಮುಂಭಾಗದಲ್ಲಿ ಭಾರತ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಮಟ್ಟದ ಕಾರ್ಯಕ್ರಮ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿರುವ ಕಚೇರಿಗಳು ಹಾಗೂ ವಿದ್ಯಾಸಂಸ್ಥೆಗಳು ತಮ್ಮ ಕಚೇರಿ, ವಿದ್ಯಾ ಸಂಸ್ಥೆಗಳಲ್ಲಿ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದಬೇಕು, ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯತ್ ಅಧಿಕಾರಿಗಳು ಸೇರಿ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ, ಕಾಲೇಜು ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂವಿಧಾನ ಪೀಠಿಕೆ ಓದಲು ನೋಂದಣಿ ಮಾಡಿಸುವ ಗುರಿ ನಿಗದಿಪಡಿಸಿದ್ದು, ಸಕಾಲದಲ್ಲಿ ನೋಂದಣಿ ಕಾರ್ಯ ಸಂಪೂರ್ಣಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾಸಂಸ್ಥೆಗಳು ಹಾಗೂ ಇಲಾಖೆಗಳು ಸೇರದಂತೆ ವಿವಿಧ ಸಂಸ್ಥೆ ಹಾಗೂ ಸಾರ್ವಜನಿಕರು ಆನ್ಲೈನ್ ಮೂಲಕ ಪಾಲ್ಗೊಳ್ಳಲಿದ್ದು, ಅಂದು ಎಲ್ಲಾ ಸರ್ಕಾರಿ ಕಚೇರಿ, ಶಾಲಾ- ಕಾಲೇಜು, ವಿದ್ಯಾರ್ಥಿ ನಿಲಯಗಳಲ್ಲಿ ಸಂವಿಧಾನ ಪೀಠಿಕೆ ಓದಬೇಕು, ಈ ಮೂಲಕ ಸಂವಿಧಾನ ಪೀಠಿಕೆಯ ಮಹತ್ವ ಹಾಗೂ ಸಂವಿಧಾನದ ಮೌಲ್ಯ ಮತ್ತು ತತ್ವಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ಮೂಲಕ ನೋಂದಾಯಿಸಿಕೊಂಡು ಪ್ರಜಾಪ್ರಭುತ್ವದ ಅಧಿಕೃತ ಆಚರಣೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರನ್ನು ಪ್ರೇರೇಪಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಕೂಡಿರುವ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರು ಸೇರಿದಂತೆ ಒಟ್ಟು 6000 ಫಲಾನುಭವಿಗಳಿಗೆ ಕೆಎಂಎಫ್ ವತಿಯಿಂದ 3 ತಿಂಗಳು ಬಳಕೆ ಮಾಡುವಷ್ಟು ಪೌಷ್ಟಿಕ ಆಹಾರದ ಕಿಟ್ ನೀಡಲಾಗುವುದು, ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಿಲ್ಲೆಯಲ್ಲಿ ಅನುಷ್ಠಾನ ಮಾಡಲಾಗುವುದು, ಯಶಸ್ವಿಯಾದ ನಂತರ ರಾಜ್ಯಕ್ಕೆ ಅನ್ವಯವಾಗುವಂತೆ ಅನುಷ್ಠಾನ ಮಾಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್ ಇದ್ದರು.

Get real time updates directly on you device, subscribe now.

Comments are closed.

error: Content is protected !!