ತುಮಕೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದರ ವಿರುದ್ಧ ತುಮಕೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ಈಗಾಗಲೇ ಕರ್ನಾಟಕ ರಾಜ್ಯ ಮಳೆ ಇಲ್ಲದೆ ಬರಗಾಲ ಸಂಭವಿಸಿದ್ದು, ರೈತರು ತಾವು ಬೆಳೆದ ಬೆಳೆಗಳಿಗಾಗಿ ಮಳೆ ಇಲ್ಲದೆ ಪರದಾಡುತ್ತಿರುವ ಪರಿಸ್ಥಿತಿ ನೋಡುತ್ತಿದ್ದೇವೆ, ಇಂತಹ ಸಂದಿಗ್ಧ ಸ್ಥಿತಿಯಲ್ಲಿಯೂ ನಮ್ಮ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ, ಇದನ್ನು ನಾವು ಖಂಡಿಸುತ್ತೇವೆ ಎಂದರು.
ಬೆಂಗಳೂರು ಸೇರಿದಂತೆ ಕಾವೇರಿ ನದಿ ಭಾಗದ ಸುತ್ತಮುತ್ತಲಿನ ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆತೀವ್ರ ಇದ್ದು, ಇಂತಹ ಪರಿಸ್ಥಿತಿಯಲ್ಲಿ ನಮ್ಮ ಕರ್ನಾಟಕ ಸರ್ಕಾರ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ಇನ್ಮುಂದೆ ಬಿಡಬಾರದು, ನಮಗೆ ಇಲ್ಲಿ ವ್ಯವಸಾಯ ಮಾಡಲು, ಕುಡಿಯಲು ನೀರು ಇಲ್ಲ, ಆದರೂ ತಮಿಳುನಾಡಿಗೆ ನೀರು ಬಿಡುತ್ತಿದ್ದು ಇದು ಖಂಡನೀಯ, ಎಸ್.ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ರಾಜ್ಯದಲ್ಲಿದ್ದ ಬರ ಪರಿಸ್ಥಿತಿ ಅವಲೋಕಿಸಿ ನ್ಯಾಯಾಲಯದ ತೀರ್ಪಿಗೆ ಎದೆ ಗುಂದದೆ ಒಂದು ಹನಿ ನೀರನ್ನೂ ತಮಿಳುನಾಡಿಗೆ ಬಿಡದೆ ರಾಜ್ಯದ ಜನರ ಹಿತ ಕಾಪಾಡುವಲ್ಲಿ ಯಶಸ್ವಿಯಾದಂತಹ ಧೀಮಂತ ನಾಯಕರು ಎಂದರು.
ನಮ್ಮಲ್ಲಿ ನೀರು ಯಥೇಚ್ಛವಾಗಿ ಇದ್ದರೆ ತಮಿಳುನಾಡಿಗೆ ನೀರು ಹರಿಸಿ, ಅದರಲ್ಲಿ ನಮ್ಮದು ಯಾವುದೇ ರೀತಿಯ ತಕರಾರು ಇಲ್ಲ, ಆದರೆ ನಮಗೆ ಇಲ್ಲಿ ಕುಡಿಯಲು ನೀರೇ ಇಲ್ಲ, ಆದರೂ ನೀವು ತಮಿಳುನಾಡಿಗೆ ನೀರು ಹರಿಸುತ್ತಿರುವುದು ಎಷ್ಟು ಮಾತ್ರ ಸರಿ ಎಂದು ಪ್ರಶ್ನಿಸಿದರು.
ಈ ಕುರಿತು ನಮ್ಮ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಮನವರಿಕೆ ಮಾಡಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ತಕ್ಷಣವೇ ನಿಲ್ಲಿಸಬೇಕೆಂದು ಒತ್ತಾಯಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭನೆಯಲ್ಲಿ ರಾಜ್ಯ ರೈತ ಘಟಕದ ಸಂಚಾಲಕ ಕೆ.ಶಿವಕುಮಾರ್, ವಿಜಯ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಎಸ್.ಪಿ.ಮಹೇಶ್ ಕುಮಾರ್, ಜಿಲ್ಲಾಧ್ಯಕ್ಷ ಎಲ್.ಮಂಜುನಾಥ್ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.
Comments are closed.