ಕೋವಿಡ್ ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ: ಡೀಸಿ

180

Get real time updates directly on you device, subscribe now.

ತುಮಕೂರು: ಕೋವಿಡ್-19 ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಕೋವಿಡ್ ನಿಯಂತ್ರಣಕ್ಕಾಗಿ ಲಸಿಕೆ ಪ್ರಮಾಣ ಹೆಚ್ಚಿಸಬೇಕು, ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸಿ ಕೋವಿಡ್ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಿ ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು ಎಂದು ನಿರ್ದೇಶಿಸಿದರು.
ಜಿಲ್ಲೆಯಲ್ಲಿ ದಿನವೊಂದಕ್ಕೆ 20,000 ಕ್ಕಿಂತಲೂ ಹೆಚ್ಚು ಮಂದಿಗೆ ಲಸಿಕೆ ಹಾಕಬೇಕು, ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಅಗತ್ಯ ಸಿದ್ಧತೆ ಕೈಗೊಳ್ಳಬೇಕು, ಈಗಾಗಲೇ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಮನೆಮನೆ ಸರ್ವೆ ಕಾರ್ಯ ಕೈಗೊಂಡಿದ್ದು, ರೋಗ ಲಕ್ಷಣವಿರುವವರನ್ನು ಹತ್ತಿರದ ಆಸ್ಪತ್ರೆಗೆ ಕರೆ ತಂದು ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಅವರಿಗೆ ತಿಳಿಸಿದರು.
ಜಿಲ್ಲೆಯ ಆರೋಗ್ಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕೊರೊನಾ ನಿಯಂತ್ರಣಕ್ಕೆ ಶ್ರಮಿಸಬೇಕು, ಕಟ್ಟುನಿಟ್ಟಾಗಿ ಸರ್ಕಾರದ ಕೊರೊನಾ ಮಾರ್ಗಸೂಚಿ ಪಾಲಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಉಸಿರಾಟ ತೊಂದರೆ, ಜ್ವರ, ನೆಗಡಿ ಸೇರಿದಂತೆ ಕೋವಿಡ್ ಲಕ್ಷಣವಿರುವವರಿಗೆ ಔಷಧಿ ಅಂಗಡಿಯವರು ವೈದ್ಯರ ಚೀಟಿ ಇಲ್ಲದೆ ಔಷಧಿಗಳನ್ನು ಮಾರಾಟ ಮಾಡುವಂತಿಲ್ಲ, ಈ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿದ್ಯಾಕುಮಾರಿ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸುರೇಶ್ ಬಾಬು, ನಗರ ಯೋಜನಾ ನಿರ್ದೇಶಕಿ ಶುಭಾ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಡಾ.ಕೇಶವರಾಜ್, ಡಾ.ಮೋಹನ್ದಾಸ್, ಡಾ.ಚೇತನ್, ಡಾ.ಸನತ್ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!