ದಡಾರ- ರುಬೆಲ್ಲಾ ಲಸಿಕೆ ತಪ್ಪದೆ ಹಾಕಿಸಿ: ಡೀಸಿ

174

Get real time updates directly on you device, subscribe now.


ತುಮಕೂರು: ಜಿಲ್ಲೆಯಲ್ಲಿ ಅಕ್ಟೋಬರ್ 9 ರಿಂದ 14ರವರೆಗೆ ಹಮ್ಮಿಕೊಂಡಿರುವ ತೀವ್ರತರವಾದ ಮಿಷನ್ ಇಂದ್ರಧನುಷ್ 5.0 ಅಭಿಯಾನದಲ್ಲಿ ಲಸಿಕೆ ನಿರಾಕರಿಸುವ ಕುಟುಂಬಗಳ ಮನವೊಲಿಸಲು ಸೂಕ್ತ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ತೀವ್ರತರವಾದ ಮಿಷನ್ ಇಂದ್ರಧನುಷ್ 5.0-ದಡಾರ-ರುಬೆಲ್ಲಾ ಲಸಿಕಾಕರಣದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ಆಗಸ್ಟ್ ಹಾಗೂ ಸೆಪ್ಟೆಂಬರ್ ಮಾಹೆಯಲ್ಲಿ ಮೊದಲ ಹಾಗೂ 2ನೇ ಸುತ್ತಿನ ಲಸಿಕಾ ಕರಣದಲ್ಲಿ ಶೇ.100ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿರುವಂತೆ 3ನೇ ಸುತ್ತಿನಲ್ಲೂ ಗುರಿ ಮೀರಿ ಸಾಧಿಸಬೇಕೆಂದು ನಿರ್ದೇಶನ ನೀಡಿದರು.

ಈ ಲಸಿಕಾಕರಣದಲ್ಲಿ ಜಿಲ್ಲೆಯ 5 ವರ್ಷದೊಳಗಿನ ಎಲ್ಲಾ ಮಕ್ಕಳು ಹಾಗೂ ಗರ್ಭಿಣಿ ಸ್ತ್ರೀಯರು ಲಸಿಕೆಯಿಂದ ವಂಚಿತರಾಗದಂತೆ ನಿಗಾವಹಿಸಬೇಕು, ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರ, ಉಪಕೇಂದ್ರ ಹಾಗೂ ಅಂಗನವಾಡಿಗಳಲ್ಲಿ ಉಚಿತವಾಗಿ ಲಸಿಕೆ ನೀಡುವ ಬಗ್ಗೆ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಟಾಂಟಾಂ ಮಾಡಲು ಕ್ರಮ ವಹಿಸಬೇಕು, ಕಟ್ಟಡ ನಿರ್ಮಾಣ ಸ್ಥಳ, ತೋಟದ ಮನೆ, ವಲಸಿಗರ ಮನೆ ಸೇರಿ ಅಪಾಯದಂಚಿನ ಪ್ರದೇಶಗಳಿಗೆ ಭೇಟಿ ನೀಡಿ ಗರ್ಭಿಣಿ ಮತ್ತು ಮಕ್ಕಳಿಗೆ ಲಸಿಕೆ ನೀಡಬೇಕು ಎಂದು ಸೂಚಿಸಿದರು.

ಹೊಸದಾಗಿ ಮಕ್ಕಳು ಶಾಲೆಗೆ ನೋಂದಣಿಯಾಗುವ ಸಮಯದಲ್ಲಿ ಈ ಹಿಂದೆ ಪಡೆದಿರುವ ಲಸಿಕೆಗಳ ಬಗ್ಗೆ ಪರಿಶೀಲಿಸಿ ಲಸಿಕೆ ಪಡೆಯದ ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರನ್ನು ಪ್ರೇರೇಪಿಸಬೇಕು, ರೈಲ್ವೆ ಹಳಿಗಳ ಪಕ್ಕದಲ್ಲಿ ವಾಸವಿರುವ ವಲಸೆ ಗರ್ಭಿಣಿ ಮತ್ತು 5 ವರ್ಷದೊಳಗಿನ ಮಕ್ಕಳಿಗೂ ತಪ್ಪದೆ ಲಸಿಕೆ ನೀಡಬೇಕು ಎಂದು ಸೂಚಿಸಿದರು.

ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಸಿ.ಆರ್.ಮೋಹನ್ ಮಾತನಾಡಿ, ಅಕ್ಟೋಬರ್ 9ರಿಂದ 14ರ ವರೆಗೆ ಜಿಲ್ಲಾದ್ಯಂತ ಹಮ್ಮಿಕೊಂಡಿರುವ 3ನೇ ಸುತ್ತಿನ ಇಂದ್ರಧನುಷ್ ಲಸಿಕಾಕರಣದಲ್ಲಿ 0-2 ವರ್ಷದೊಳಗಿನ 3309, 2-5 ವರ್ಷದೊಳಗಿನ 56 ಹಾಗೂ 719 ಗರ್ಭಿಣಿಯರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ, ಇದಕ್ಕಾಗಿ 642 ಲಸಿಕಾ ಸತ್ರಗಳನ್ನು ತೆರೆಯಲು ಕ್ರಮ ವಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಇಂದ್ರಧನುಷ್ ಅಭಿಯಾನ ಕುರಿತು ಆರೋಗ್ಯ ಇಲಾಖೆ ಹೊರತಂದಿರುವ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರಭಾರ) ಡಾ.ಚಂದ್ರಶೇಖರ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಮೇಗೌಡ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಖಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್, ತಾಲ್ಲೂಕು ಆರೋಗ್ಯಾಧಿಕಾರಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!