ತುಮಕೂರು: ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ವೈಭವಯುತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಅಂದು ಕನ್ನಡ ತಾಯಿ ಶ್ರೀಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿ ರಥದಲ್ಲಿರಿಸಿ ಸಾಂಸ್ಕೃತಿಕ ಕಲಾ ತಂಡಗಳು ಹಾಗೂ ವಿವಿಧ ಇಲಾಖೆ ಸ್ಥಬ್ತ ಚಿತ್ರದೊಂದಿಗೆ ಮೆರವಣಿಗೆ ಕೈಗೊಳ್ಳುವಂತೆ ತುಮಕೂರು ಮಹಾ ನಗರಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮೀನುಗಾರಿಕೆ, ತೋಟಗಾರಿಕೆ, ಹಿಂದುಳಿದ ವರ್ಗ, ಕ.ರಾ.ರ.ಸಾ. ನಿಗಮ, ಶಿಕ್ಷಣ ಇಲಾಖೆ, ಪಶು ವೈದ್ಯಕೀಯ, ರೇಷ್ಮೆ, ಕೃಷಿ ಉತ್ಪನ್ನ ಮಾರುಕಟ್ಟೆ, ಬೆಸ್ಕಾಂ ಇಲಾಖೆಗಳು ಪ್ರಸ್ತುತ ಯೋಜನೆಗಳು ಮತ್ತು ಸಾಧನೆಗಳ ಮಾಹಿತಿಯುಳ್ಳ ಉತ್ತಮ ಸ್ಥಬ್ತಚಿತ್ರಗಳನ್ನು ವಿಶೇಷವಾಗಿ ರೂಪಿಸಿ ಅಂದು ಬೆಳಗ್ಗೆ 7.30 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂಭಾಗದಲ್ಲಿ ಹಾಜರಿರಲು ತಿಳಿಸಲಾಯಿತು.
ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಸಲು ಅಗತ್ಯವಾದ ವೇದಿಕೆ, ವಿಐಪಿ ಕುರ್ಚಿಗಳು, ಶಾಮಿಯಾನ, ಧ್ವನಿ ವರ್ಧಕ ವ್ಯವಸ್ಥೆ, ಅಲಂಕಾರಿಕ ಹೂ ಕುಂಡಗಳ ವ್ಯವಸ್ಥೆ, ಕಾರ್ಯಕ್ರಮ ಆಯೋಜನೆ, ನಿರೂಪಣೆ, ನಾಡಗೀತೆಯ ಗಾಯನದ ವ್ಯವಸ್ಥೆ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಧ್ವಜಾರೋಹಣದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಮಕ್ಕಳ ತಂಡಗಳನ್ನು ಸಿದ್ಧಪಡಿಸಿಕೊಂಡು ತಾಲೀಮು ನಡೆಸಲು ಹಾಗೂ ಕಾರ್ಯಕ್ರಮ ಸಂಘಟಿಸಲು ಡಿಡಿಪಿಐ ಮತ್ತು ಬಿಇಓಗಳಿಗೆ ಸೂಚಿಸಲಾಯಿತು.
ಮಹಾ ನಗರಪಾಲಿಕೆ ಕಚೇರಿ ಮುಂಭಾಗದಲ್ಲಿ ಹೂವಿನಿಂದ ಅಲಂಕರಿಸಿದ ಕಮಾನು ಮತ್ತು ವಿವಿಧ ವೃತ್ತಗಳಲ್ಲಿ ವಿದ್ಯುತ್ ದೀಪ ಅಲಂಕಾರ ವ್ಯವಸ್ಥೆ ಕೈಗೊಳ್ಳುವಂತೆ ಮತ್ತು ನಗರದ ಎಲ್ಲಾ ಸರ್ಕಾರಿ ಕಚೇರಿ ಕಟ್ಟಡಗಳನ್ನು ವಿದ್ಯುತ್ ದೀಪಾಲಂಕಾರದಿಂದ ಅಲಂಕರಿಸುವಂತೆ ಸಂಬಂಧಿಸಿದ ಎಲ್ಲಾ ಇಲಾಖಾ ಅಧಿಕಾರಿಗಳಿಗೆ ತಿಳಿಸಲಾಯಿತು.
ಜಿಲ್ಲೆಯ ಎಲ್ಲಾ ಸಾಹಿತಿ, ಕಲಾವಿದರಿಗೆ, ಜನಪ್ರತಿನಿಧಿಗಳಿಗೆ, ವಿಶೇಷ ಆಹ್ವಾನಿತರಿಗೆ ಮುಂಚಿತವಾಗಿ ಆಹ್ವಾನ ಪತ್ರ ಸಿದ್ಧಪಡಿಸಿ ತಲುಪಿಸುವ ಕೆಲಸ ನಿರ್ವಹಿಸುವಂತೆ ತುಮಕೂರು ತಹಶೀಲ್ದಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಲಾಯಿತು.
ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲು ಸಭೆ ನಿರ್ಧರಿಸಿತು ಮತ್ತು ಅಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರನ್ನೊಳಗೊಂಡ ಸಮಿತಿಯ ಮೂಲಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಮಹನೀಯರನ್ನು ಆಯ್ಕೆ ಮಾಡಿ, ಪಟ್ಟಿ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ತಿಳಿಸಲಾಯಿತು.
ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಾಗೂ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಅಧೀನ ಅಧಿಕಾರಿಗಳು, ಸಿಬ್ಬಂದಿ ತಪ್ಪದೇ ಹಾಜರಾಗಲು ಸೂಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಕಸಾಪ ಅಧ್ಯಕ್ಷ ಸಿದ್ಧಲಿಂಗಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
Comments are closed.