ಸಾಂತ್ವನ ಕೇಂದ್ರಗಳಲ್ಲಿ 24 ಗಂಟೆ ಕಾರ್ಯ ನಿರ್ವಹಿಸಿ

124

Get real time updates directly on you device, subscribe now.


ತುಮಕೂರು: ಸಾಂತ್ವನ ಕೇಂದ್ರಗಳಲ್ಲಿ ಸಿಬ್ಬಂದಿ ಕಡ್ಡಾಯವಾಗಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವಂತೆ ಹಾಗೂ ಸಾಂತ್ವನ ಕೇಂದ್ರಗಳ ದೂರವಾಣಿ ಸಂಖ್ಯೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ ವ್ಯಾಪಕ ಪ್ರಚಾರ ಮಾಡಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾ ಪಂಚಾಯತ್ ಸಿ ಇ ಒ ಜಿ.ಪ್ರಭು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.

ನಗರದ ಬಾಲ ಭವನದದಲ್ಲಿ ನಡೆದ ಜಿಲ್ಲಾ ಬಾಲಭವನ ಸಮಿತಿ ಸಭೆ ಹಾಗೂ 2ನೇ ತ್ರೈಮಾಸಿಕದ ಸಾಂತ್ವನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಬಾಲಭವನದ ಅಭಿವೃದ್ಧಿಗೆ ಪೂರಕ ಹಲವು ಕಾಮಗಾರಿ ಕೈಗೊಳ್ಳುವಂತೆ ತಿಳಿಸಿದರಲ್ಲದೆ, ಜಿಲ್ಲಾ ಬಾಲಭವನದಿಂದ ಜಿಲ್ಲೆಯ ತಾಲ್ಲೂಕುಗಳ ನಗರ ಮತ್ತು ಗ್ರಾಮೀಣ ಮಕ್ಕಳಿಗೆ ಪ್ರತ್ಯೇಕವಾಗಿ ಕಾರ್ಯಕ್ರಮ, ಚಟುವಟಿಕೆ ಆಯೋಜಿಸುವ ಸಂಬಂಧ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚಿಸಿದರು.

ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಕಾಯ್ದೆಯಡಿ ಮಕ್ಕಳ ಗ್ರಾಮ ಸಭೆಗಳಲ್ಲಿ ಕಡ್ಡಾಯವಾಗಿ ಮಕ್ಕಳು ಹಾಜರಿರಲು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು.

ಈ ಸಂದರ್ಭಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಟದ ಬಗ್ಗೆ ಅರಿವು ಮೂಡಿಸುವಂತೆ ಹಾಗೂ ಇಂತಹ ಸಭೆಗಳಲ್ಲಿ ಮಕ್ಕಳ ಸಮಸ್ಯೆ ಆಲಿಸಿ ಅವರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು.
ಜಿಲ್ಲಾ ಹಾಗೂ ತಾಲ್ಲೂಕು ಶಿಶು ಪಾಲನಾ ಕೇಂದ್ರಗಳ ಬಗ್ಗೆ ಚರ್ಚಿಸಿದ ಅವರು ಜಿಲ್ಲೆಯಲ್ಲಿ ಒಟ್ಟು 4 ಶಿಶುಪಾಲನಾ ಕೇಂದ್ರ ಕಾರ್ಯ ನಿರ್ವಹಿಸುತ್ತಿರುವ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲಿಸಿದ ಅವರು ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸಮರ್ಪಕವಾಗಿ ಪೂರಕ ಪೌಷ್ಠಿಕ ಆಹಾರ ವಿತರಣೆಗೆ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಅಗತ್ಯ ಕ್ರಮ ವಹಿಸಲು ಸೂಚಿಸಿದರು.

ಅಂಗನವಾಡಿ ಕೇಂದ್ರಗಳ ಮೂಲಭೂತ ಸೌಕರ್ಯ ಕುರಿತು ಚರ್ಚಿಸಿದ ಅವರು, ಜಿಲ್ಲೆಯಲ್ಲಿ ಅತೀ ಶೀಘ್ರವಾಗಿ ಬಾಡಿಗೆ ಕಟ್ಟಡದಲ್ಲಿ ನಡೆಯುವ ಕೇಂದ್ರಗಳನ್ನು ಎಲ್ಲಾ ಮೂಲಭೂತ ಸೌಲಭ್ಯಗಳನ್ನೊಳಗೊಂಡ ಸುಸಜ್ಜಿತ ಸ್ವಂತ ಅಂಗನವಾಡಿ ಕಟ್ಟಡಗಳಲ್ಲಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಈ ಸಂದರ್ಭ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!