ಕೊರಟಗೆರೆ: ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ ಸೇರಿದಂತೆ ವಿವಿಧ ಸೌಲಭ್ಯ ಒದಗಿಸುತ್ತಿದ್ದು, ಇದರ ಪ್ರಯೋಜನ ಪಡೆದುಕೊಂಡು ವಿದ್ಯಾರ್ಥಿಗಳು ವಿದ್ಯಾವಂತರಾಗಬೇಕು ಹಾಗೂ ಮುಂದಿನ ದಿನಗಳಲ್ಲಿ ಉನ್ನತ ಹುದ್ದೆಗಳನ್ನು ಪಡೆದುಕೊಳ್ಳ ಬೇಕೆಂಬುದು ನಮ್ಮ ಸರ್ಕಾರದ ಆಶಯವಾಗಿದೆ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಕರೆ ನೀಡಿದರು.
ತಾಲ್ಲೂಕಿನ ತೋವಿನಕೆರೆ ಗ್ರಾಮದಲ್ಲಿ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, 70 ಲಕ್ಷ ರೂ. ವೆಚ್ಚದಲ್ಲಿ ನಾಲ್ಕು ಕೊಠಡಿಗಳನ್ನು ನಿರ್ಮಿಸಿರುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತುಂಬಾ ಅನುಕೂಲವಾಗಿದೆ, OSAAT ಸಂಸ್ಥೆಯವರು ಇಲ್ಲಿಯವರೆಗೆ ವಿವಿಧ ಜಿಲ್ಲೆಗಳ 82 ಶಾಲೆಗಳಿಗೆ ಕಟ್ಟಡಗಳನ್ನು ನಿರ್ಮಿಸಿ ಕೊಡುವುದರ ಮೂಲಕ ಶಿಕ್ಷಣ ಕ್ಷೇತ್ರವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಉತ್ತಮ ಸೇವೆ ಮಾಡುತ್ತಿದ್ದಾರೆ ಎಂದು ಅಭಿನಂದಿಸಿದರು.
ವಿಶ್ವಮಟ್ಟದಲ್ಲಿ ಭಾರತ ದೇಶವನ್ನು ಶಿಕ್ಷಣ ಕ್ಷೇತ್ರದಿಂದ ಗುರುತಿಸಲಾಗಿದೆ, ದೇಶದಲ್ಲಿ ಹಲವಾರು ಬದಲಾವಣೆಗಳು ಆಗಿರುವುದು ಶಿಕ್ಷಣದಿಂದ ಮಾತ್ರ, ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ಬಲಿಷ್ಠಪಡಿಸಲು ಹಲವಾರು ಕಾರ್ಯಕ್ರಮ ಜಾರಿಗೆ ತಂದಿದೆ, ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ.ಕೃಷ್ಣ ಅವರು ಮೊಟ್ಟ ಮೊದಲ ಬಾರಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಪ್ರಾರಂಭಿಸಿದ್ದರು, ತದ ನಂತರ ಈ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನ ಮಾಡಲಾಯಿತು, ಇಂದು ಈ ಯೋಜನೆ ತುಂಬಾ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಿ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವ ದೃಷ್ಟಿಯಿಂದ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಮಗ್ರವಾದ ಪಟ್ಟಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ತಯಾರಿಸಿದ್ದಾರೆ, ಮುಂದಿನ ದಿನಗಳಲ್ಲಿ ನರೇಗಾ ಯೋಜನೆಯಡಿ ಹಾಗೂ ಇತರೆ ಅನುದಾನ ಬಳಸಿಕೊಂಡು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.
ತೋವಿನಕೆರೆ ಗ್ರಾಮದಲ್ಲಿ 32ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಆಸ್ಪತ್ರೆ ಕಾಮಗಾರಿಯು ಮೇಲ್ಛಾವಣಿ ಹಂತದಲ್ಲಿದ್ದು, ಇನ್ನೂ ಆರು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕೆಂದು ಟಿ ಹೆಚ್ ಓ ಅವರಿಗೆ ಹೇಳಿದರು.
ಕೊರಟಗೆರೆ ತಾಲೂಕಿನಲ್ಲಿ ಜೆಜೆಎಂ ಯೋಜನೆಯಡಿಯಲ್ಲಿ ಮನೆ ಮನೆಗೆ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರನ್ನು ಕೊಡುವ ಕಾಮಗಾರಿ ಪ್ರಗತಿ ಹಂತದಲ್ಲಿದೆ ಎಂದು ಹೇಳಿದರು.
ಎತ್ತಿನಹೊಳೆ ಯೋಜನೆಯ ಕಾಮಗಾರಿ ಇನ್ನೊಂದು ವರ್ಷದೊಳಗೆ ಪೂರ್ಣಗೊಳ್ಳಲಿದ್ದು, ಈ ಯೋಜನೆಯಿಂದ ಕೊರಟಗೆರೆ ತಾಲ್ಲೂಕಿನ 39 ಕೆರೆಗಳಿಗೆ ನೀರನ್ನು ತುಂಬಿಸಲಾಗುವುದು ಎಂದು ಹೇಳಿದರು.
ತೋವಿನಕೆರೆ ಮತ್ತು ಹಳೆ ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯಾಗಿದ್ದ ಆಂಗ್ಲ ಮಾಧ್ಯಮದಲ್ಲಿ 9 ಮತ್ತು 10ನೇ ತರಗತಿಗಳನ್ನು ಜೂನ್ 2024ರಿಂದ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದ ಸಾನಿಧ್ಯವನ್ನು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ, ಮಧುಗಿರಿ ಉಪ ವಿಭಾಗಾಧಿಕಾರಿ ಷಿ ಆನಂದ್, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್, ತಹಶೀಲ್ದಾರ್ ರಂಜಿತ್, ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಡಿ.ದೊಡ್ಡಸಿದ್ದಯ್ಯ ಮತ್ತಿತರರು ಹಾಜರಿದ್ದರು.
Comments are closed.