ಯುವನಿಧಿ ಯೋಜನೆಗೆ ಗೃಹ ಸಚಿವರಿಂದ ಚಾಲನೆ

ನೋಂದಾಯಿಸಿಕೊಂಡವರ ಖಾತೆಗೆ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ

78

Get real time updates directly on you device, subscribe now.


ತುಮಕೂರು: ಜಿಲ್ಲೆಯಲ್ಲಿಯುವನಿಧಿ ಯೋಜನೆಗೆ ಚಾಲನೆ ನೀಡಿದ್ದು, ಯೋಜನೆಯಡಿ ನೋಂದಾಯಿಸಿಕೊಂಡ ಪದವಿ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿರುವ ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಜಮೆ ಮಾಡಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಯುವನಿಧಿ ಯೋಜನೆ ಕುರಿತು ಭಿತ್ತಿ ಪತ್ರ ಬಿಡುಗಡೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ 5 ಗ್ಯಾರಂಟಿ ಅನುಷ್ಠಾನಕ್ಕೆ ತರುವ ತೀರ್ಮಾನ ಕೈಗೊಳ್ಳಲಾಗಿತ್ತು, ಅದರಂತೆ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಸೇರಿದಂತೆ 4 ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಠಾನ ಮಾಡುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದು, 5ನೇ ಗ್ಯಾರಂಟಿ ಯೋಜನೆ ಯುವನಿಧಿ ಯೋಜನೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.

ಯುವನಿಧಿ ಯೋಜನೆಯಡಿ ಪದವಿ ಮುಗಿಸಿದ ಅರ್ಹ ಫಲಾನುಭವಿಗಳಿಗೆ ಮಾಹೆಯಾನ 3,000 ರೂ. ಹಾಗೂ ಡಿಪ್ಲೋಮಾ ಹೊಂದಿದವರಿಗೆ 1,500 ರೂ. ಗಳನ್ನು ಅವರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆಜಮೆ ಮಾಡಲಾಗುವುದು, 2023 ರಲ್ಲಿ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ, ಪದವಿ, ಡಿಪ್ಲೋಮಾ ನಂತರ ಕನಿಷ್ಟ 6 ತಿಂಗಳ ಅವಧಿ ವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿಲ್ಲದ ನಿರುದ್ಯೋಗಿಗಳು ಸೇವಾಸಿಂಧು ಪೋರ್ಟಲ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು, ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು, ಅಂಕಿ- ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಸುಮಾರು 10,000 ಪದವೀಧರರು ಹಾಗೂ 2,000 ಡಿಪ್ಲೋಮಾ ಮುಗಿಸಿದ ನಿರುದ್ಯೋಗಿಗಳಿದ್ದಾರೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪದವಿ ಉತ್ತೀರ್ಣರಾದ ಲಕ್ಷಾಂತರ ನಿರುದ್ಯೋಗಿಗಳು ಇರುವುದನ್ನು ಮನಗಂಡ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಚಾಲನೆ ನೀಡಲಾಗಿದೆ, ಪದವಿ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಈ ಭತ್ಯೆ ಬೂಸ್ಟರ್ ಡೋಸ್ ಇದ್ದಂತೆ, ಉದ್ಯೋಗಾಂಕ್ಷಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಈ ಭತ್ಯೆ ಯಾವುದಾದರೂ ರೂಪದಲ್ಲಿ ನೆರವಾಗುತ್ತದೆ, ನೋಂದಾಯಿಸಿಕೊಂಡ ನಿರುದ್ಯೋಗಿ ಫಲಾನುಭವಿಗಳಿಗೆ 2 ವರ್ಷ ನಿರುದ್ಯೋಗ ಭತ್ಯೆ ಸೌಲಭ್ಯ ನೀಡಲಾಗುವುದು, 2 ವರ್ಷಗಳ ನಂತರ ಭತ್ಯೆಯ ಸೌಲಭ್ಯ ದೊರೆಯುವುದಿಲ್ಲ, ಭತ್ಯೆ ಪಡೆಯುತ್ತಿರುವ ಸಂದರ್ಭದಲ್ಲಿ ಖಾಸಗಿ, ಸರ್ಕಾರಿ ಉದ್ಯೋಗ ದೊರೆತ ಫಲಾನುಭವಿಗಳು ಉದ್ಯೋಗ ದೊರೆತಿರುವ ಬಗ್ಗೆ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು, ಸುಳ್ಳು ಮಾಹಿತಿ ನೀಡಿ ಭತ್ಯೆ ಪಡೆದವರಿಗೆ ದಂಡ ವಿಧಿಸಲಾಗುವುದು ಎಂದು ಮಾಹಿತಿ ನೀಡಿದರು.

ಈಗಾಗಲೇ ಜಾರಿಯಲ್ಲಿರುವ ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳಿಗೆ ಹೋಗಿ ಬರಲು ಸಾರಿಗೆ ವ್ಯವಸ್ಥೆಯಲ್ಲಿ ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಸಚಿವರ ಗಮನಕ್ಕೆ ಮಾಧ್ಯಮ ಪ್ರತಿನಿಧಿಗಳು ತಂದಾಗ, ಯೋಜನೆ ಜಾರಿಗೊಳಿಸಿದ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಅಂದಾಜು ಮಾಡಿರಲಿಲ್ಲ, ಆದ ಕಾರಣ ಸಮಸ್ಯೆಯುಂಟಾಗಿದೆ, ಈ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ಬಸ್ ಸೇರಿದಂತೆ ಹೊಸದಾಗಿ ಸುಮಾರು 5,000 ಬಸ್ ಗಳನ್ನು ಖರೀದಿಸಲಾಗುತ್ತಿದೆ, ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಆದ್ಯತೆ ಮೇಲೆ ಹೆಚ್ಚುವರಿ ಬಸ್ ಗಳನ್ನು ಸಂಚಾರಕ್ಕೆ ಬಿಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆಂಪಯ್ಯ
ಮತ್ತಿತರರು ಹಾಜರಿದ್ದರು.

ಸ್ಮಶಾನ ಭೂಮಿ ಮೀಸಲಿಡಲು ಕ್ರಮ ವಹಿಸಿ

ತುಮಕೂರು ತಾಲ್ಲೂಕು ದುರ್ಗದಹಳ್ಳಿಯಲ್ಲಿ ಸ್ಮಶಾನವಿಲ್ಲದೆ ರಸ್ತೆ ಪಕ್ಕದಲ್ಲಿ ಶವ ಸಂಸ್ಕಾರ ಮಾಡಿರುವ ಬಗ್ಗೆ ಮಾತನಾಡಿದ ಪರಮೇಶ್ವರ್, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದು, ಪ್ರಕರಣ ಬಗೆಹರಿಸದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮೇಲೆ ಕ್ರಮ ವಹಿಸಲಾಗುವುದು, ದಲಿತ ಸಮುದಾಯಗಳಿಗೆ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದೆ ತೊಂದರೆ ಅನುಭವಿಸುತ್ತಿರುವುದನ್ನು ತಡೆಯಲು 2013 ರಲ್ಲಿಯೇ ನಮ್ಮ ಸರ್ಕಾರ ರಾಜ್ಯದ ಪ್ರತಿ ಗ್ರಾಮದಲ್ಲಿಯೂ ಸಾರ್ವಜನಿಕ ಸ್ಮಶಾನಕ್ಕಾಗಿ ಭೂಮಿ ಮೀಸಲಿಡಬೇಕೆಂಬ ನಿಯಮ ಜಾರಿಗೆ ತಂದಿತ್ತು, ಈಗಲೂ ಈ ನಿಯಮ ಮುಂದುವರೆದುಕೊಂಡು ಹೋಗುತ್ತಿದ್ದು, ಪ್ರತಿ ಗ್ರಾಮದಲ್ಲಿಯೂ ಸ್ಮಶಾನ ಭೂಮಿ ಮೀಸಲಿಡುವ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು, ಅಗತ್ಯವಿರುವೆಡೆ ವಿದ್ಯುತ್ ಚಿತಾಗಾರ ನಿರ್ಮಿಸುವ ಬಗ್ಗೆಯೂ ಚಿಂತಸಲಾಗುತ್ತಿದೆ ಎಂದು ತಿಳಿಸಿದರು.

Get real time updates directly on you device, subscribe now.

Comments are closed.

error: Content is protected !!