ತುಮಕೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 2024 ಜನವರಿ 29ರ ಸೋಮವಾರ ಜಿಲ್ಲೆಗೆ ಭೇಟಿ ನೀಡಿ ಸುಮಾರು 1000 ಕೋಟಿ ರೂ. ಅಂದಾಜು ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಶಿಲಾನ್ಯಾಸ, ಗುದ್ದಲಿಪೂಜೆ ನೆರವೇರಿಸಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಮ್ಮ ಕಚೇರಿಯಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿ, ಜನವರಿ 29ರಂದು ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಿದ್ದು, ಹೊಸದಾಗಿ ಪ್ರಾರಂಭಿಸಬೇಕಾಗಿರುವ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಶಿಲಾನ್ಯಾಸ ನೆರವೇರಿಸಿ ವಿವಿಧ ಯೋಜನೆಗಳಡಿ 30 ಸಾವಿರ ಫಲಾನುಭವಿಗಳಿಗೆ ಸವಲತ್ತು ವಿತರಿಸಲಿದ್ದಾರೆ, ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆ ಸೇರಿದಂತೆ ತಮ್ಮ ಇಲಾಖೆಯ ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಬೇಕು, ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಡಿಸೆಂಬರ್ 29 ರಂದು ಮುಖ್ಯಮಂತ್ರಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಲಿದ್ದು, ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಗತಿ ವಿವರವನ್ನು ತಪ್ಪದೇ ಈ ಸಭೆಗೆ ತರಬೇಕೆಂದು ಸೂಚಿಸಿದರು.
ಗ್ರಾಮೀಣ ನೀರು ಮತ್ತು ನೈರ್ಮಲ್ಯ, ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆ, ಸ್ಮಾರ್ಟ್ ಸಿಟಿ, ಪಾಲಿಕೆ ಸೇರಿದಂತೆ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಆರ್ಥಿಕ ಹಾಗೂ ಭೌತಿಕ ಪ್ರಗತಿ ವಿವರಗಳುಳ್ಳ ಪಿಪಿಟಿ ಸಿದ್ಧಪಡಿಸಬೇಕು ಹಾಗೂ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಗ್ರಾಮೀಣ ಕೈಗಾರಿಕೆ, ಕಂದಾಯ, ಆರೋಗ್ಯ, ಕಾರ್ಮಿಕ ಮತ್ತು ಪಶು ಸಂಗೋಪನಾ ಇಲಾಖೆ ಸೇರಿದಂತೆ ವಿವಿಧ ನಿಗಮ ಮಂಡಳಿಗಳ ಅಧಿಕಾರಿಗಳು ತಮ್ಮ ಇಲಾಖೆಯಿಂದ ಫಲಾನುಭವಿಗಳಿಗೆ ವಿತರಿಸಲಾಗುವ ಸವಲತ್ತುಗಳ ವಿವರವನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಒದಗಿಸಬೇಕೆಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಸ್ಥಿತಿ ಗತಿ ಬಗ್ಗೆ ಮಾಹಿತಿ ಒದಗಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್ ಅವರಿಗೆ ಸೂಚಿಸಿದಾಗ ಉತ್ತರಿಸಿದ ಅವರು ಜಿಲ್ಲೆಯ ಕುಣಿಗಲ್, ತುಮಕೂರು, ತುರುವೇಕೆರೆ ತಾಲೂಕು ಸೇರಿದಂತೆ ತಲಾ 1 ರಂತೆ ಒಟ್ಟು 3 ಕೋವಿಡ್ ಪ್ರಕರಣಗಳು ವರದಿಯಾಗಿವೆ, ಸರ್ಕಾರದಿಂದ ಪ್ರತಿ ದಿನ ಜಿಲ್ಲೆಯಲ್ಲಿ 150 ಕೋವಿಡ್ ಪರೀಕ್ಷೆ ನಡೆಸಲು ಗುರಿ ನೀಡಲಾಗಿದ್ದು, ಅದರಂತೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಮುಂದುವರೆದು ಮಾತನಾಡಿದ ಜಿಲ್ಲಾಧಿಕಾರಿ, ಕೋವಿಡ್ ಪರೀಕ್ಷೆಯನ್ನು 150 ರಿಂದ 200ಕ್ಕೆ ಹೆಚ್ಚಿಸಬೇಕು, ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು, ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಎಎಂಓಗಳೊಂದಿಗೆ ಪ್ರತಿ ದಿನ ಸಂಜೆ ಸಭೆ ನಡೆಸಿ ತಮಗೆ ಮಾಹಿತಿ ನೀಡಬೇಕೆಂದು ನಿರ್ದೇಶನ ನೀಡಿದರಲ್ಲದೆ, ಆರ್ ಟಿ ಪಿ ಸಿ ಆರ್ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು, ಕೋವಿಡ್ ನಿಯಂತ್ರಿಸಲು ಶುಶ್ರೂಷಕಿಯರಿಗೆ ಮತ್ತೊಂದು ಸುತ್ತಿನ ತರಬೇತಿ ನೀಡಬೇಕು, ಜಿಲ್ಲೆಯಲ್ಲಿರುವ ಆಕ್ಸಿಜನ್ ಪ್ಲಾಂಟ್ ಗಳು ಸುಸ್ಥಿತಿಯಲ್ಲಿರುವಂತೆ ಎಚ್ಚರಿಕೆ ವಹಿಸಬೇಕು, ತುರ್ತು ಸಂದರ್ಭಗಳಲ್ಲಿ ಆಕ್ಸಿಜನ್ ಪ್ಲಾಂಟ್ ದುರಸ್ತಿಯಲ್ಲಿದೆ ಎಂದು ನೆಪ ಹೇಳಿದರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯತ್ ಸಿಇಓ ಜಿ.ಪ್ರಭು ಮಾತನಾಡಿ, ಕೋವಿಡ್ ಪರಿಸ್ಥಿತಿಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಪ್ರತಿದಿನ ಕೋವಿಡ್ ಕಾರ್ಯ ಪಡೆ ಸಮಿತಿ ಸಭೆ ನಡೆಸಿ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಮುಂದಿನ ಬೇಸಿಗೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ನಿರ್ವಹಣೆ ಮಾಡಬೇಕು, ಜಾನುವಾರು ಮೇವು ದಾಸ್ತಾನು ಪ್ರಮಾಣ, ಮೇವಿನ ಕೊರತೆ, ರೈತರಿಗೆ ವಿತರಿಸಲಾದ ಮೇವಿನ ಬೀಜದ ಕಿರುಪೊಟ್ಟಣ, ಕಿರು ಪೊಟ್ಟಣಗಳ ಬೇಡಿಕೆ ಪ್ರಮಾಣದ ವಿವರಗಳನ್ನು ಅಧಿಕಾರಿಗಳಿಂದ ಪಡೆದ ಅವರು ಮೇವಿನ ಬೀಜ ಪಡೆದು ಮೇವು ಉತ್ಪಾದನೆ ಮಾಡುತ್ತಿರುವ ರೈತರ ವಿವರವನ್ನು ಛಾಯಾಚಿತ್ರ ಸಹಿತ ಸ್ಪ್ರೆಡ್ ಶೀಟ್ ಗೆ ಅಪ್ ಲೋಡ್ ಮಾಡಬೇಕೆಂದು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಮಹಾ ನಗರ ಪಾಲಿಕೆ ಆಯುಕ್ತೆ ಅಶ್ವಿಜ ಬಿ.ವಿ. ಸೇರಿದಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
Comments are closed.