ಪೊಲೀಸ್ ಠಾಣೆಗೆ ಗೃಹ ಸಚಿವರ ದಿಢೀರ್ ಭೇಟಿ

ಠಾಣೆಯಲ್ಲಿ ಕಡತಗಳ ಪರಿಶೀಲನೆ- ಕಳ್ಳತನ, ಜೂಜಾಟ, ಅಪಘಾತಗಳ ಬಗ್ಗೆ ಮಾಹಿತಿ

28

Get real time updates directly on you device, subscribe now.


ತುಮಕೂರು: ನಗರದ ಬಾರ್ ಲೈನ್ ನಲ್ಲಿರುವ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತಿಯೊಂದು ಕಡತಗಳನ್ನು ಖುದ್ಧು ವೀಕ್ಷಿಸಿದ ಸಚಿವರು, ಕಳ್ಳತನ, ಅಪಘಾತ, ಜೂಜಾಟ ಸೇರಿದಂತೆ ಇನ್ನಿತರೆ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಪರಮೇಶ್ವರ್, ಪೊಲೀಸ್ ಠಾಣೆಗಳ ವಸ್ತುಸ್ಥತಿ ತಿಳಿಯಲು ಗ್ರಾಮಾಂತರ ಠಾಣೆಗೆ ದಿಢೀರ್ ಭೇಟಿ ನೀಡಿದ್ದೇನೆ, ಅಂಕಿ- ಅಂಶಗಳನ್ನು ಪರಿಶೀಲಿಸಿದ್ದು, ಕಳ್ಳತನ, ಟ್ರಾಫಿಕ್, ಅಪರಾಧ, ಜೂಜು ಪ್ರಕರಣ ಈ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಿರುವುದು ಕಂಡು ಬಂದಿದೆ, ಈ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ತಾಕೀತು ಮಾಡಿದ್ದೇನೆ, ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಇ-ಬೀಟ್ ವ್ಯವಸ್ಥೆಯಡಿ ಸಮರ್ಪಕವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದರು.

ಸಿಬ್ಬಂದಿ ಕೊರತೆ
11 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ತುಮಕೂರು ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿ ಕೊರತೆಯಿದೆ ಎಂಬ ಬಗ್ಗೆ ಪೊಲೀಸ್ ಅಧಿಕಾರಿಗಳು ನನ್ನ ಗಮನಕ್ಕೆ ತಂದಿದ್ದು, ಜಿಲ್ಲೆಗೆ 1700 ಸಿಬ್ಬಂದಿಯನ್ನು ಹೆಚ್ಚುವರಿಯಾಗಿ ನೀಡಬೇಕು ಎಂದು ಮನವಿ ಮಾಡಿದ್ದಾರೆ, ಈ ಸಂಬಂಧ ಕೇಂದ್ರ ಕಚೇರಿಯ ಗಮನಕ್ಕೆ ತಂದಿದ್ದೇನೆ ಎಂದರು.
ಔರಾದ್ಕರ್ ವರದಿ
ಪೊಲೀಸರ ವೇತನ ಹೆಚ್ಚಳ ಸಂಬಂಧ ಔರಾದ್ಕರ್ ವರದಿ ಸಂಪೂರ್ಣ ಅನುಷ್ಠಾನವಾಗಿಲ್ಲ, ಈ ಬಗ್ಗೆ ಚರ್ಚೆ ನಡೆಯುತ್ತಿದೆ, ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ವರದಿ ಜಾರಿ ಮಾಡಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ ವಿಚಾರದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರಧಾನ ಮಂತ್ರಿ ಹುದ್ದೆ ಬಗ್ಗೆ ಮಾತನಾಡುವಷ್ಟು ಅರ್ಹತೆ ನನಗಿಲ್ಲ, ಆ ಹುದ್ದೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ, ನನ್ನ ವೈಯಕ್ತಿಕ ಅಭಿಪ್ರಾಯ ಸಹ ನಾನು ವ್ಯಕ್ತಪಡಿಸುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ, ಡಿವೈಎಸ್ಪಿ ಚಂದ್ರಶೇಖರ್ ಮತ್ತಿತರರು ಇದ್ದರು.
ಡಿ ಹೆಚ್ ಓ ಕಚೇರಿಗೂ ಭೇಟಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅಲ್ಲೂ ಪರಿಶೀಲನೆ ನಡೆಸಿ ಕೊರೊನಾ ಸಂಬಂಧ ಸರ್ಕಾರಿ ಆಸ್ಪತ್ರೆಗಳಲ್ಲಿ ಕೈಗೊಳ್ಳಲಾಗಿರುವ ಹಾಸಿಗೆ ವ್ಯವಸ್ಥೆ, ಪರೀಕ್ಷೆಗಳ ಬಗ್ಗೆ ಮಾಹಿತಿ ಪಡೆದರು, ಕೊರೊನಾ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಕೈಗೊಳ್ಳಲಾಗಿರುವ ಆಕ್ಸಿಜನ್, ಚಿಕಿತ್ಸೆ, ಪರೀಕ್ಷೆಗಳ ಬಗ್ಗೆ ಡಿ ಹೆಚ್ ಓ ಡಾ.ಮಂಜುನಾಥ್ ಸಚಿವರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಸಿಇಓ ಜಿ.ಪ್ರಭು, ಇತರ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!