ಬಂಧಿಸಿರುವ ಕರ ಸೇವಕರ ಬಿಡುಗಡೆ ಮಾಡಿ

ತುಮಕೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ

74

Get real time updates directly on you device, subscribe now.


ತುಮಕೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಮೂರು ದಶಕದ ಹಿಂದಿನ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರ್ಕಾರ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಟೀಕಿಸಿ ಜಿಲ್ಲಾ ಬಿಜೆಪಿ ಮುಖಂಡರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ವೇಳೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಭಾರತದ ಧಾರ್ಮಿಕ ತಳಹದಿಯ ರಾಮಾಯಣದ ಮೂಲ ಪುರುಷ ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಿ ರಾಮ ಮೂರ್ತಿ ಪ್ರತಿಷ್ಠಾನ ಮಾಡುತ್ತಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಳೆಯ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿ, ಹಿಂದುಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಟೀಕಿಸಿದರು.
ವೋಟ್ ಬ್ಯಾಂಕಿಗಾಗಿ ಅಲ್ಪಸಂಖ್ಯಾತರನ್ನಯ ಓಲೈಕೆ ಮಾಡುವ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ ಸೇವಕರನ್ನು ಬಂಧಿಸುವ ಪ್ರಯತ್ನ ಮಾಡುತ್ತದೆ, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಈ ತಿಂಗಳ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಮಾಡುತ್ತಿರುವಾಗ ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕರು ಹಿಂದುಗಳನ್ನು ಬಂಧಿಸುವ ಮೂಲಕ ಅವರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ, ಇದು ಕಾಂಗ್ರೆಸ್ ನ ಸರ್ವನಾಶಕ್ಕೆ ನಾಂದಿಯಾಗುತ್ತದೆ ಎಂದರು.

ವಿದ್ರೋಹ ಚಟುವಟಿಕೆ ಮಾಡುವ ಎಸ್ ಡಿ ಪಿ ಐ, ಪಿ ಎಫ್ ಐ ಸಂಘಟನೆಗಳ ಕೇಸ್ ಗಳನ್ನು ಹಿಂದೆ ಪಡೆಯುವ ಕಾಂಗ್ರೆಸ್ ಸರ್ಕಾರ ರಾಮ ಮಂದಿರ ನಿರ್ಮಾಣಕ್ಕೆ ಮುಂದಾದ ಕರಸೇವಕರ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಕಾಂಗ್ರೆಸ್ ಸರ್ಕಾರದ ನಾಯಕರು ತಮ್ಮ ಅವನತಿಗೆ ಕಾರಣವಾಗುತ್ತಿದ್ದಾರೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಕಾಳೆ ಅವರ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ರಾಮ ವಿರೋಧಿ, ಹಿಂದೂ ವಿರೋಧಿ ಖಂಡಿಸಿ, ಬಂಧಿಸಿರುವ ರಾಮಭಕ್ತರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

500 ವರ್ಷಗಳ ಪ್ರಯತ್ನದಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ, ಇದೇ 22ರಂದು ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವಿದೆ, ಇಂತಹ ಐತಿಹಾಸಿಕ ಸನ್ನಿವೇಶದಲ್ಲಿ ಕಾಂಗ್ರೆಸ್ ಸರ್ಕಾರ ಬಹುಸಂಖ್ಯಾತ ಹಿಂದುಗಳ ಭಾವನೆ ಕೆರಳಿಸುವ ಪ್ರಯತ್ನ ಮಾಡುತ್ತಿದೆ, ಬಂಧಿಸಿರುವ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ಅಲ್ಪ ಸಂಖ್ಯಾತರ ಓಲೈಕೆಗಾಗಿ ಹಿಂದೂಗಳಿಗೆ ನೋವು ಕೊಡುತ್ತಿದೆ, ಹಿಂದೂ ವಿರೋಧಿತನ ಕಾಂಗ್ರೆಸ್ ನವರ ರಕ್ತದ ಕಣಕಣಗಳಲ್ಲಿದೆ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದೂಗಳ ಸಂಭ್ರಮದ ಸಂದರ್ಭವನ್ನು ಸಹಿಸಲಾಗದ ಕಾಂಗ್ರೆಸ್ ನವರು ಹೊಟ್ಟೆ ಕಿಚ್ಚಿನಿಂದ ಹಿಂದುಗಳಿಗೆ ಹಿಂಸೆ ಕೊಡುತ್ತಿದ್ದಾರೆ, ಹಿಂದುಗಳನ್ನು ಗುರಿಯಾಗಿಸಿಕೊಂಡು ಹೊರಟಿರುವ ಸಿದ್ದರಾಮಯ್ಯ ಸರ್ಕಾರ ಕಾಂಗ್ರೆಸ್ ಮುಕ್ತ ದೇಶಕ್ಕೆ ಶ್ರೀಕಾರವಾಗುತ್ತಿದ್ದಾರೆ ಎಂದರು.

ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸಾವಿರ ಕೋಟಿ ಬಿಡುಗಡೆ ಮಾಡುವ ಸಿಎಂ ಸಿದ್ದರಾಮಯ್ಯ ಅವರಿಗೆ ರೈತರ ಸಂಕಷ್ಟ ಕಾಣಲಿಲ್ಲವೆ? 500 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಮಳೆ, ಬೆಳೆ ಇಲ್ಲದೆ ರೈತ ಕುಟುಂಬಗಳ ಬದುಕು ಅತಂತ್ರವಾಗಿದೆ, ಇಂತಹ ಸಂದರ್ಭದಲ್ಲಿ ರೈತರನ್ನು ಮರೆತ ಸಿದ್ದರಾಮಯ್ಯ ಮುಸ್ಲಿಮರ ಓಲೈಕೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಮುಖಂಡ ಎಂ.ಬಿ.ನಂದೀಶ್ ಮಾತನಾಡಿ, ದೇಶವೇ ಸಂಭ್ರಮಿಸುತ್ತಿರುವ ಅಯೋಧ್ಯೆ ರಾಮಮಂದಿರ ಉದ್ಘಾಟನೆ ದಿನವಾದ ಈ ತಿಂಗಳ 22ರಂದು ರಾಜ್ಯ ಸರ್ಕಾರ ರಜೆ ಘೋಷಿಸಬೇಕು, ಅಂದು ಉತ್ಸವ ರೀತಿಯ ಕಾರ್ಯಕ್ರಮ ಮಾಡಬೇಕು ಎಂದು ಒತ್ತಾಯಿಸಿದರು.
ಮುಖಂಡ ಎಸ್.ಪಿ ಚಿದಾನಂದ್ ಮಾತನಾಡಿ, ಕಾಂಗ್ರೆಸ್ ನಾಯಕರಿಗೆ ಹಿಂದೂಗಳೇ ಗುರಿಯಾಗಿದ್ದಾರೆ, ಹಿಂದೂಗಳಿಗೆ ತೊಂದರೆ ನೀಡುವುದು ಅವರ ಅಜೆಂಡವಾಗಿದೆ, ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಹಿಂದೂಗಳಿಗೆ ತೊಂದರೆ ಕೊಡುವ ಧೋರಣೆಯನ್ನು ಕಾಂಗ್ರೆಸ್ ನಾಯಕರು ಕೈಬಿಡಬೇಕು ಎಂದರು.

ಜಿಲ್ಲಾ ಬಿಜೆಪಿ ಕೋಶಾಧ್ಯಕ್ಷ ಡಾ.ಪರಮೇಶ್, ಮುಖಂಡರಾದ ಹೆಚ್.ಟಿ.ಭೈರಪ್ಪ, ವಿನಯ್ ಬಿದರೆ, ಹೆಚ್.ಟಿ.ಚಂದ್ರಶೇಖರ್, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಯಶಸ್, ನಗರ ಅಧ್ಯಕ್ಷ ಹನುಮಂತರಾಜು, ಮುಖಂಡರಾದಬಿ.ಎಸ್.ನಾಗೇಶ್, ಟಿ.ಆರ್.ಸದಾಶಿವಯ್ಯ, ಬ್ಯಾಟರಂಗೇಗೌಡ, ಜಿಲ್ಲಾ ವಕ್ತಾರ ಜಗದೀಶ್, ಕೆ.ವೇದಮೂರ್ತಿ, ಕಾವ್ಯ ರವಿಶಂಕರ್, ಜ್ಯೋತಿ ಇತರರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!