ಇಂದಿನಿಂದ ತುಮಕೂರಿನಲ್ಲಿ ಫಲ ಪುಷ್ಪ ಪ್ರದರ್ಶನ

ಹೂಗಳಲ್ಲಿ ಅರಳಿದ ಮಾರ್ಕೋನಹಳ್ಳಿ ಅಣೆಕಟ್ಟು ಎಲ್ಲರ ಆಕರ್ಷಣೆ

23

Get real time updates directly on you device, subscribe now.


ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಮಾರ್ಕೋನಹಳ್ಳಿ ಅಣೇಕಟ್ಟು ಪರಿಕಲ್ಪನೆಯಡಿ ವಿಶೇಷ ರೀತಿಯಲ್ಲಿ ಜನವರಿ 26 ರಿಂದ 28ರ ವರೆಗೆ 3 ದಿನ ತೋಟಗಾರಿಕೆ ಇಲಾಖೆ ಆವರಣದಲ್ಲಿ ಫಲ ಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.
ಫಲಪುಷ್ಪ ಪ್ರದರ್ಶನ 2023- 24ಕ್ಕೆ ಸಂಬಂಧಿಸಿದಂತೆ ತೋಟಗಾರಿಕೆ ಇಲಾಖೆ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯಿಂದ ಫಲಪುಷ್ಪ ಪ್ರದರ್ಶನವನ್ನು ನಗರದ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಜನವರಿ 26 ರಂದು ಜಿಲ್ಲಾ ಉಸ್ತುವಾರಿ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಮೀನುಗಾರಿಕೆ ಇಲಾಖೆ, ಪಶು ಸಂಗೋಪನೆ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗ್ರಾಮೀಣ ಕೈಗಾರಿಕೆ ಇಲಾಖೆ ಸೇರಿದಂತೆ ಒಟ್ಟು 20ಕ್ಕೂ ಹೆಚ್ಚು ಇಲಾಖೆಗಳು ಈ ಫಲಪುಷ್ಪ ಪ್ರದರ್ಶನದಲ್ಲಿ ಭಾಗವಹಿಸಲಿದ್ದು, ತಮ್ಮ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ತಿಳಿಸುವ ವಿವಿಧ ಮಾಡೆಲ್ಗಳನ್ನು ಪ್ರದರ್ಶನ ಮಾಡಲಿದ್ದಾರೆ, ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಹಲವು ಆಕರ್ಷಣೆಗಳಿಂದ ಕೂಡಿರಲಿದ್ದು, ಪ್ರಮುಖವಾಗಿ ತುಮಕೂರಿನ ಪ್ರಸಿದ್ದ ಮಾರ್ಕೋನಹಳ್ಳಿ ಅಣೆಕಟ್ಟೆಯ ಹೂವಿನ ಕಲಾಕೃತಿ, ಮರಳಿನಲ್ಲಿ ರೈತನ ಕಲಾಕೃತಿ, ತರಕಾರಿ ಕತ್ತನೆ ಹಾಗೂ ಜಾನೂರ್ ಕಲೆಗಳ ಪ್ರದರ್ಶನ, ಬೋನ್ಸಾಯ್ ಗಿಡಗಳ ಪ್ರದರ್ಶನ, ವಿವಿಧ ವಾರ್ಷಿಕ ಹೂವಿನ ಗಿಡಗಳ ಹಾಗೂ ಅಲಂಕಾರಿಕ ಗಿಡಗಳ ಪ್ರದರ್ಶನ, ಕರ್ನಾಟಕ ವಿಜ್ಞಾನ ತಂತ್ರಜ್ಞಾನ ಇಲಾಖೆಯಿಂದ ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದಂತೆ ಪ್ರದರ್ಶನ, ಹನಿ ನೀರಾವರಿ, ಸೋಲಾರ್ ಪಂಪ್ ಸೆಟ್ ಹಾಗೂ ಕೃಷಿಹೊಂಡದ ಪ್ರಾತ್ಯಕ್ಷಿಕೆ ಪ್ರದರ್ಶಿಸಲಾಗುವುದು, ವಿವಿಧ ಇಲಾಖೆಯಿಂದ ರೈತರಿಗೆ ಅನುಕೂಲವಾಗುವಂತಹ ತಾಂತ್ರಿಕ ವಿಷಯಗಳ ವಿವಿಧ ಪ್ರಾತ್ಯಕ್ಷತೆ ಮಳಿಗೆಗಳು ಹಾಗೂ ನಾಗರಿಕರ ಹಿತದೃಷ್ಟಿಯಿಂದ ಖಾಸಗಿ ಕಂಪನಿಗಳ ಮಳಿಗೆಗಳ ಜೊತೆ ಆಹಾರ ಮಳಿಗೆಗಳಿಗೂ ಅವಕಾಶ ಕಲ್ಪಿಸಲಾಗಿದೆ ಎಂದರು.

ಫಲಪುಷ್ಪ ಪ್ರದರ್ಶನ ಅಂಗವಾಗಿ ಉದ್ಯಾನವನ ಮಾಡಲ್ ಮತ್ತು ಶಾಲೆಗಳ ವತಿಯಿಂದ ಬರುವ ವಿದ್ಯಾರ್ಥಿಗಳಿಗೆ ಮಕ್ಕಳ ಚಿತ್ರಕಲಾ ಪ್ರವೇಶ ಸ್ಪರ್ಧೆ ಸಹ ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು, ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಫಲಪುಷ್ಪ ಪ್ರದರ್ಶನ ನೋಡಲು ಬರುವ ಎಲ್ಲರಿಗೂ ಉಚಿತ ಪ್ರವೇಶ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಫಲಪುಷ್ಪ ಪ್ರದರ್ಶನ ಜ್ಞಾನ ದರ್ಶನವನ್ನಾಗಿಸಬೇಕು ಎಂದು ತಿಳಿಸಿದರು.

ಸುದ್ದಿಗೋಷ್ಠಿಯ ನಂತರ ಫಲಪುಷ್ಪ ಪ್ರದರ್ಶನದ ಸಿದ್ಧತೆಯನ್ನು ಸಿಇಒ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.
ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕಿ ಶಾರದಮ್ಮ, ಜಿಲ್ಲಾ ತೋಟಗಾರಿಕೆ ಸಂಘದ ಉಪಾಧ್ಯಕ್ಷ ಕೃಷ್ಣಪ್ಪ, ಜಂಟಿ ಕಾರ್ಯದರ್ಶಿ ಆರ್.ಕಾಮರಾಜು, ಸಂಘದ ನಿರ್ದೇಶಕರಾದ ಪ್ರಸನ್ನ ಕುಮಾರ್, ಅನುಸೂಯ, ನವೀನ್ ಕುಮಾರ್ ಹಾಗೂ ರೂಪ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!