ತುಮಕೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ಫೆವ್ರವರಿ 10 ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಕಾರ್ಮಿಕರ ಬೃಹತ್ ಸಮಾವೇಶದ ಪೂರ್ವಭಾವಿ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ವಿ.ಎಸ್.ಸೈಯದ್ ದಾದಾಪೀರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕಾರ್ಮಿಕ ಘಟಕದ ವಿವಿಧ ಪದಾಧಿಕಾರಿಗಳು ಮತ್ತು ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಕುರಿತು ಮಾತನಾಡಿದ ಡಾ.ವಿ.ಎಸ್.ಸೈಯದ್ ದಾದಾಪೀರ್, ಕೆಪಿಸಿಸಿಯಲ್ಲಿ ಕಾರ್ಮಿಕ ಘಟಕ ಒಂದು ಪ್ರಬಲ ವಿಭಾಗವಾಗಿದ್ದು, ಕಾರ್ಮಿಕರ ಕಷ್ಟ, ಸುಖಗಳಿಗೆ ಸ್ಪಂದಿಸುತ್ತಾ ಕೆಲಸ ಮಾಡುತ್ತಿದೆ, ಅಸಂಘಟಿತ ವಲಯದ ಕಾರ್ಮಿಕರ ಕಾರ್ಮಿಕರ ಇ ಶ್ರಮ ಕಾರ್ಡ್, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರಕಾರದ ವತಿಯಿಂದ ದೊರೆಯಬಹುದಾದ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಸರಕಾರ ಮತ್ತು ಕಾರ್ಮಿಕರ ನಡುವೆ ಕೊಂಡಿಯಾಗಿ ಕೆಪಿಸಿಸಿ ಕಾರ್ಮಿಕ ಘಟಕ ಕೆಲಸ ಮಾಡುತ್ತಿದೆ ಎಂದರು.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರದ ಬಿಜೆಪಿ ಸರಕಾರದ ಕಾರ್ಮಿಕ ವಿರೋಧಿ ನೀತಿಗಳು, ರಾಜ್ಯ ಸರಕಾರದ ಕಾರ್ಮಿಕ ಸ್ನೇಹಿ ನೀತಿಗಳನ್ನು ಮತದಾರರಿಗೆ ತಿಳಿಸಿ, ಕಾರ್ಮಿಕರಿಗೆ ಆಗಿರುವ ಅನ್ಯಾಯದ ಬಗ್ಗೆ ಜಾಗೃತಿ ಮೂಡಿಸುವುದು, ಸರಕಾರದ ವಿವಿಧ ಯೋಜನೆಗಳ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತುಮಕೂರು ಜಿಲ್ಲಾ ಘಟಕ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲೆಯಿಂದ ಹೆಚ್ಚು ಜನ ಪಾಲ್ಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಸಲಹೆ ಪಡೆಯಲಾಗುವುದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಫೆ.10 ರ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಸೈಯದ್ ದಾದಾಪೀರ್ ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಅಬ್ದುಲ್ ರಹೀಂ ಮಾತನಾಡಿ, ತುಮಕೂರು ಜಿಲ್ಲೆಯಲ್ಲಿ ಕಾರ್ಮಿಕರ ಘಟಕ ಪ್ರಬಲವಾಗಿದ್ದು, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರೊಂದಿಗೆ ನಿರಂತರ ಸಂಪರ್ಕ ಹೊಂದಿದೆ, ಫೆ.10 ರಂದು ಬೆಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ತುಮಕೂರು ಜಿಲ್ಲೆಯಿಂದ 500 ಕ್ಕೂ ಹೆಚ್ಚು ಕಾರ್ಮಿಕ ಘಟಕದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಸಭೆಯಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಬಿ.ಲೋಕೇಶ್, ರಾಜಣ್ಣ, ಜಿಲ್ಲೆಯ ಎಲ್ಲಾ ಪದಾಧಿಕಾರಿಳು ಪಾಲ್ಗೊಂಡು ಸಲಹೆ ಸೂಚನೆ ನೀಡಿದರು.
Comments are closed.