ತುಮಕೂರು: ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 22ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಾವುದೇ ಅಕ್ರಮ ನಡೆಯದಂತೆ ಪಾರದರ್ಶಕವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿ, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಬೇಕು ಎಂದು ತಿಳಿಸಿದರು.
ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ 13, ಕೊರಟಗೆರೆ ತಾಲ್ಲೂಕಿನಲ್ಲಿ 1, ಗುಬ್ಬಿ, ಚಿಕ್ಕನಾಯಕನ ಹಳ್ಳಿ, ತುರುವೇಕೆರೆ, ಮಧುಗಿರಿ ತಾಲ್ಲೂಕಿನಲ್ಲಿ ತಲಾ 2, ಕುಣಿಗಲ್, ತಿಪಟೂರು, ಪಾವಗಡ ತಾಲ್ಲೂಕಿನಲ್ಲಿ ತಲಾ 3, ಶಿರಾ ತಾಲ್ಲೂಕಿನಲ್ಲಿ 4 ಸೇರಿ ಒಟ್ಟು 35 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು, ಈಗಾಗಲೇ ಸಿಸಿ ಕ್ಯಾಮೆರಾ ಅಳವಡಿಸಿದಲ್ಲಿ ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಶ್ನೆಪತ್ರಿಕೆಗಳನ್ನು ಠೇವಣಿಸುವ ತುಮಕೂರು ಜಿಲ್ಲಾ ಖಜಾನೆ ಮತ್ತು ಮಧುಗಿರಿ ಉಪ ಖಜಾನೆಗಳಲ್ಲಿ ಸುಸ್ಥಿತಿಯಲ್ಲಿರುವ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸಿ ಅವುಗಳ ನಿರ್ವಹಣೆ ಮಾಡಬೇಕು ಎಂದರಲ್ಲದೆ, ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ವಸ್ತುಗಳ ಸಾಗಾಣಿಕೆ ಮಾಡುವ ವಾಹನಗಳಿಗೆ ಜಿಪಿಎಸ್ ಉಪಕರಣ ಅಳವಡಿಸಬೇಕು, ಖಜಾನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಲಕೋಟೆ ಸಾಗಿಸುವ ಕಾರ್ಯದಲ್ಲಿ ಗೊಂದಲ, ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸಾಕಷ್ಟು ಗಾಳಿ, ಬೆಳಕು ಇರುವ ಕೊಠಡಿಗಳನ್ನು ಉಪಯೋಗಿಸಬೇಕು, ಉತ್ತಮ ರೀತಿಯ ಪೀಠೋಪಕರಣ ವ್ಯವಸ್ಥೆ ಮಾಡಬೇಕು, ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಇರುವ ಬಗ್ಗೆ ಪರಿಶೀಲಿಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕಾರ್ಯಕ್ಕೆ ನೇಮಕ ಮಾಡಿರುವ ಮಾರ್ಗಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕರ ಕಚೇರಿಯಲ್ಲಿ ವರದಿ ಮಾಡಿಕೊಳ್ಳಬೇಕು, ವರದಿ ಮಾಡಿಕೊಳ್ಳದ ಮಾರ್ಗಾಧಿಕಾರಿಗಳಿಗೆ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಿಯೋಜಿಸಿರುವ ಮಾರ್ಗಾಧಿಕಾರಿಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಿದರು, ಪರೀಕ್ಷಾ ಅಕ್ರಮ ತಡೆಯಲು ಮುಖ್ಯ ಅಧೀಕ್ಷಕರನ್ನು ಹಾಗೂ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಸಹಾಯಕರನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ನೇಮಿಸಲು ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕ ಗಂಗಾಧರ್ ಅವರಿಗೆ ನಿರ್ದೇಶನ ನೀಡಿದರು.
ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕ ಗಂಗಾಧರ್ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 24444 ಹೊಸ ವಿದ್ಯಾರ್ಥಿಗಳು, 1348 ಪುನರಾವರ್ತಿತ ಹಾಗೂ 443 ಖಾಸಗಿ ವಿದ್ಯಾರ್ಥಿಗಳು ಸೇರಿ ಒಟ್ಟು 26235 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ, ಹೊಸ ವಿದ್ಯಾರ್ಥಿಗಳ ಪೈಕಿ 10345 ವಿಜ್ಞಾನ ವಿಭಾಗ, 8780 ವಾಣಿಜ್ಯ ವಿಭಾಗ, 5319 ಕಲಾ ವಿಭಾಗ ಸೇರಿದಂತೆ ಒಟ್ಟು 24444 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಖಜಾನೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಠೇವಣಿಸಲು ಹಾಗೂ ವಿತರಿಸಲು ಅಪರ ಜಿಲ್ಲಾಧಿಕಾರಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮತ್ತು ಜಿಲ್ಲಾ ಖಜಾನೆ ಉಪ ನಿರ್ದೇಶಕರನ್ನೊಳಗೊಂಡ ತ್ರಿಸದಸ್ಯ ತಂಡ ಹಾಗೂ ಮಧುಗಿರಿ ತಾಲ್ಲೂಕು ಖಜಾನೆಯಲ್ಲಿ ಮಧುಗಿರಿ ಉಪ ವಿಭಾಗಾಧಿಕಾರಿ, ಉಪ ಖಜಾನಾಧಿಕಾರಿ ಮತ್ತು ದಬ್ಬೆಘಟ್ಟ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರನ್ನೊಳಗೊಂಡ ತ್ರಿಸದಸ್ಯ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಜಿಲ್ಲಾ ಖಜಾನಾಧಿಕಾರಿ ಉಮಾ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗಧಾಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಲಾ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಪರೀಕ್ಷಾ ಕೇಂದ್ರಗಳಿಗೆ ನೇಮಿಸಿರುವ ಮುಖ್ಯಸ್ಥರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪಿಯು ಪರೀಕ್ಷಾ ವೇಳಾಪಟ್ಟಿ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ವೇಳಾಪಟ್ಟಿಯನ್ವಯ ಮಾರ್ಚ್ 1 ರಂದು ಕನ್ನಡ ಮತ್ತು ಅರೇಬಿಕ್, ಮಾ.4 ರಂದು ಗಣಿತ, ಶಿಕ್ಷಣ ಶಾಸ್ತ್ರ, ಮಾ.5ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾ.6 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್, ಮಾ.7ರಂದು ಇತಿಹಾಸ, ಭೌತಶಾಸ್ತ್ರ, ಮಾ.9 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹವಿಜ್ಞಾನ, ಮಾ.11ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮಾ.13ರಂದು ಇಂಗ್ಲಿಷ್, ಮಾ.15ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ, ಮಾ.16ರಂದು ಅರ್ಥಶಾಸ್ತ್ರ, ಮಾ.18 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ, ಮಾ.20 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ ಹಾಗೂ ಗಣಕ ವಿಜ್ಞಾನ, ಮಾ.21ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಮಾ.22 ರಂದು ಹಿಂದಿ ಪರೀಕ್ಷೆ ನಡೆಯಲಿದೆ.
Comments are closed.