ಕಾನೂನು ಜಾಗೃತಿ ಪ್ರತಿಯೊಬ್ಬರಿಗೂ ಅವಶ್ಯಕ

23

Get real time updates directly on you device, subscribe now.


ತುಮಕೂರು: ಪ್ರತಿ ಪ್ರಜೆಗೂ ಹುಟ್ಟಿನಿಂದ ಸಾಯುವವರೆಗೂ ಕಾನೂನು ತಿಳುವಳಿಕೆ ಅಗತ್ಯತೆ ವಿದ್ದು, ಕಾನೂನುಗಳ ಅರಿವು ಹೊಂದಿದ ಮನುಷ್ಯ ಯಾವುದೇ ಅಡೆತಡೆಯಿಲ್ಲದೇ ನೆಮ್ಮದಿಯಿಂದ ಜೀವಿಸಬಹುದು, ಅದಕ್ಕಾಗಿ ಕಾನೂನು ಜಾಗೃತಿ ಪಡೆಯಬೇಕು ಎಂದು ರಾಜ್ಯ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನ್ಯಾ.ಕೆ.ಸೋಮಶೇಖರ್ ಕರೆ ನೀಡಿದರು.

ಶ್ರೀ ಸಿದ್ದಗಂಗಾ ಮಠದ ಆವರಣದಲ್ಲಿ ನಡೆದ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಬೆಂಗಳೂರು, ಶ್ರೀ ಸಿದ್ಧಗಂಗಾ ಮಠ ಹಾಗೂ ಜಿಲ್ಲಾ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮನುಷ್ಯನು ಸುಲಭವಾಗಿ ಜೀವಿಸಲು ಒಂದಲ್ಲ ಒಂದು ರೀತಿಯಲ್ಲಿ ಕಾನೂನು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾನೂನುಗಳ ಅರಿವು ಹೊಂದಿರಬೇಕು, ಕಾನೂನಿನ ಮುಂದೆ ಎಲ್ಲರೂ ಸಮಾನರಾಗಿದ್ದು, ಆ ಮೂಲಕ ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನತೆಯಿಂದ ಬಾಳಬಹುದು, ಸಮಸ್ತ ನಾಗರಿಕರಲ್ಲಿ ಕಾನೂನು ಅರಿವು ಉಂಟಾದಾಗ ಮಾತ್ರ ಅಪರಾಧಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿ ಸ್ವಾಸ್ಥ್ಯ ಸಮಾಜ ನಿರ್ಮಾಣದ ಮೂಲಕ ದೇಶದ ಅಭಿವೃದ್ಧಿಗೆ ನಾಂದಿಯಾಗುತ್ತದೆ ಎಂದು ತಿಳಿಸಿದ ಅವರು ನೆರೆದಿದ್ದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅಗತ್ಯ ಕಾನೂನು ಮಾಹಿತಿ ನೀಡಿದರು.

ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತ ಸಂವಿಧಾನದಲ್ಲಿ ಮಕ್ಕಳ ರಕ್ಷಣೆಗಾಗಿ ವಿಶೇಷ ಹಕ್ಕುಗಳನ್ನು ನೀಡಲಾಗಿದ್ದು, ಮಕ್ಕಳು ತಮಗೆ ದೊರಕಿರುವ ಶ್ರೀ ಮಠದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಕಾನೂನು ಅರಿವು ಪಡೆದು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವಂತೆ ಕರೆ ನೀಡಿ ವಿವಿಧ ಕಾನೂನುಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಸಿದ್ದಲಿಂಗ ಮಹಾ ಸ್ವಾಮೀಜಿ ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶ ಜೈಶಂಕರ್, ಜಿಲ್ಲೆಯ 7ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಟಿ.ಪಿ.ರಾಮಲಿಂಗಗೌಡ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ನೂರುನ್ನಿಸ, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಉಪ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಹಾಗೂ ಜಿಲ್ಲೆಯ ಎಲ್ಲಾ ನ್ಯಾಯಾಧೀಶರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!