ತುಮಕೂರು: ಕುಡಿಯುವ ಉದ್ದೇಶಕ್ಕಾಗಿ ಕೆರೆಗಳನ್ನು ತುಂಬಿಸಲು ಹೇಮಾವತಿ ನಾಲೆ ನೀರನ್ನು ಜಿಲ್ಲೆಗೆ ಹರಿಸಿದ್ದು, ನಾಲೆ ನೀರನ್ನು ದುರ್ಬಳಕೆ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಬರ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ತುರ್ತು ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿ, ಹೇಮಾವತಿ ನಾಲೆ ನೀರನ್ನು ಅಕ್ರಮವಾಗಿ ಡೀಸೆಲ್ ಪಂಪ್ ನಿಂದ ಬಳಸಿಕೊಳ್ಳುತ್ತಿರುವ ಬಗ್ಗೆ ದೂರು ಬರುತ್ತಿದ್ದು, ಅಕ್ರಮವಾಗಿ ಬಳಸಿಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ತಹಶೀಲ್ದಾರ್ ಗೆ ನಿರ್ದೇಶನ ನೀಡಿದರು.
ಕುಡಿಯುವ ನೀರಿಗಾಗಿ ಮಾತ್ರ ನಾಲೆ ನೀರು ಬಳಸಿಕೊಳ್ಳಬೇಕು, ಕೃಷಿ ಮತ್ತಿತರ ಚಟುವಟಿಕೆಗಳಿಗೆ ಅಕ್ರಮವಾಗಿ ಬಳಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರಲ್ಲದೆ ನಾಲೆ ನೀರನ್ನು ಶುದ್ಧೀಕರಿಸಿದ ನಂತರ ಜನರಿಗೆ ಪೂರೈಕೆ ಮಾಡುವ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಿ ಕುಡಿಯಲು ಯೋಗ್ಯವಿದ್ದರೆ ಮಾತ್ರ ಪೂರೈಕೆ ಮಾಡಬೇಕೆಂದು ನಿರ್ದೇಶನ ನೀಡಿದರು.
ದಿನೇ ದಿನೇ ತಾಪಮಾನ ಹೆಚ್ಚಾಗುತ್ತಿರುವುದರಿಂದ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮಾನವೀಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು, ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆ ತೋರದಂತೆ ಕ್ರಮ ಕೈಗೊಳ್ಳಬೇಕು, ಚುನಾವಣಾ ಕರ್ತವ್ಯದೊಂದಿಗೆ ಬರ ಪರಿಸ್ಥಿತಿ ನಿರ್ವಹಿಸಬೇಕು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಆಯಾ ಉಪ ವಿಭಾಗಾಧಿಕಾರಿಗಳು ತಮ್ಮ ವ್ಯಾಪ್ತಿಯ ತಾಲ್ಲೂಕುಗಳಲ್ಲಿ ಕಡ್ಡಾಯವಾಗಿ ತಾಲ್ಲೂಕು ಮಟ್ಟದ ಕಾರ್ಯಪಡೆ ಸಭೆ ನಡೆಸಿ ಸಮಸ್ಯೆ ಬಗೆ ಹರಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಬೇಸಿಗೆ ಮುಗಿಯುವ ವರೆಗೂ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಅಂದಾಜು ಪಟ್ಟಿ ಸಿದ್ಧಪಡಿಸಬೇಕು, ತೀವ್ರತರ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಕೂಡಲೇ ಹೊಸ ಕೊಳವೆ ಬಾವಿ ಕೊರೆಸಲು ಮುಂದಾಗಬೇಕು, ಹೊಸದಾಗಿ ಕೊರೆದ ಕೊಳವೆ ಬಾವಿಗಳನ್ನು ಹಾಗೆ ಬಿಡದೆ ತಕ್ಷಣವೇ ವಿದ್ಯುದೀಕರಣಗೊಳಿಸಿ ಪಂಪು- ಮೋಟಾರು, ಪೈಪ್ ಲೈನ್ ಅಳವಡಿಸಬೇಕು, ಸಂಬಂಧಿಸಿದ ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಹಾಗೂ ಜಾನುವಾರು ಮೇವಿನ ಸಮಸ್ಯಾತ್ಮಕ ಗ್ರಾಮಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆ ಬಗೆಹರಿಸಬೇಕೆಂದು ಸೂಚನೆ ನೀಡಿದರು.
ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ವೀಕೃತ ಹಕ್ಕು ಮತ್ತು ಆಕ್ಷೇಪಣೆಗಳನ್ನು ಬಾಕಿ ಉಳಿಸಿಕೊಳ್ಳದೆ ಕೂಡಲೇ ವಿಲೇವಾರಿ ಮಾಡಬೇಕು, ಚೆಕ್ ಪೋಸ್ಟ್ಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಪತ್ತೆ ಕಾರ್ಯಾಚರಣೆ ಚುರುಕುಗೊಳಿಸಬೇಕು, ಚುನಾವಣಾ ಅಕ್ರಮ ತಡೆಯಲು ಸ್ಥಾಪಿಸಿರುವ ಚೆಕ್ ಪೋಸ್ಟ್ ಗಳಲ್ಲಿ ಕುಡಿಯುವ ನೀರು, ಬೆಳಕಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದರಲ್ಲದೆ ಲೋಕಸಭಾ ಕ್ಷೇತ್ರ ಚುನವಾಣೆಗೆ ಸಂಬಂಧಿಸಿದಂತೆ ಅಂಚೆ ಮತದಾನ ಮಾಡಲಿಚ್ಛಿಸುವ ಜಿಲ್ಲೆಯ 85+ ಹಾಗೂ ವಿಕಲಚೇತನರಿಗೆ ನಮೂನೆ 12 ಡಿಯನ್ನು ವಿತರಿಸುವ ಕಾರ್ಯ ಪ್ರಾರಂಭಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತಿ ಸಿಇಒ ಜಿ.ಪ್ರಭು ಅವರು ತಾಲ್ಲೂಕುವಾರು ಬರ ಪರಿಸ್ಥಿತಿ ಪರಿಶೀಲಿಸುತ್ತಾ, ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮ, ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿರುವ ಗ್ರಾಮ, ಬಾಡಿಗೆ ಆಧಾರದ ಮೇಲೆ ಕೊಳವೆ ಬಾವಿ ನೀರು ಪಡೆದು ಪೂರೈಕೆ ಮಾಡುತ್ತಿರುವ ಗ್ರಾಮಗಳು ಹಾಗು ಹೊಸದಾಗಿ ಕೊರೆದಿರುವ ಕೊಳವೆಬಾವಿಗಳ ಮಾಹಿತಿ ಪಡೆದರು.
ಚುನಾವಣೆ ಕರ್ತವ್ಯದ ನೆಪ ಹೇಳಿ ಬರ ನಿರ್ವಹಣೆ ಕಾರ್ಯದಿಂದ ತಪ್ಪಿಸಿಕೊಳ್ಳುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ವಹಿಸಲಾಗುವುದು, ಎರಡೂ ಕಾರ್ಯಗಳನ್ನು ಆದ್ಯತೆ ಮೇಲೆ ನಿರ್ವಹಿಸಬೇಕು, ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ತಹಶೀಲ್ದಾರರು ಸಮನ್ವಯತೆಯಿಂದ ಜನರಿಂದ ದೂರು ಬಾರದಂತೆ ಕುಡಿಯುವ ನೀರಿನ ಬವಣೆ ನಿವಾರಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಹೊಸದಾಗಿ ಕೊಳವೆ ಬಾವಿ ಕೊರೆಯುವ ಮುನ್ನ ಸಮಿತಿಯಿಂದ ಅನುಮೋದನೆ ಪಡೆಯಬೇಕು, ಅನುಮತಿಯಿಲ್ಲದೆ ಏಕಾಏಕಿ ಕೊರೆಸುವ ಕೊಳವೆ ಬಾವಿಗೆ ತಗಲುವ ವೆಚ್ಚದ ಬಿಲ್ಲಿನ ಪಾವತಿಗೆ ಅವಕಾಶ ನೀಡುವುದಿಲ್ಲ ಎಂದರಲ್ಲದೆ ಅನುಮೋದನೆ ಪಡೆಯದೆ ಕೊರೆದ ಬೋರ್ ವೆಲ್ ಗಳ ವೆಚ್ಚವನ್ನು ಅಧಿಕಾರಿಗಳ ವೇತನದಿಂದಲೇ ಕಟಾಯಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ತೀವ್ರತರ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕೊರೆಯಲಾಗಿರುವ ಹೊಸ ಕೊಳವೆ ಬಾವಿಗಳಿಗೆ ಬತ್ತಿ ಹೋಗಿರುವ ಕೊಳವೆ ಬಾವಿಗಳ ಪಂಪು ಮೋಟಾರ್ ಗಳನ್ನೇ ಬಳಸಬೇಕು, ಮತ್ತೊಮ್ಮೆ ಹೊಸ ಪಂಪು ಮೋಟಾರ್ ಅಳವಡಿಸಿದರೆ ಅಂಥವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದರು.
ಆಶ್ರಯ ವಸತಿ ಯೋಜನೆಯಡಿ ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಈಗಾಗಲೇ ಜಿಲ್ಲೆಯಲ್ಲಿ 1639- 26 ಎಕರೆ ಜಮೀನನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಂದ ಮಂಜೂರಾತಿ ಆದೇಶ ದೊರೆತಿದ್ದು, 951.14 ಎಕರೆ ಪ್ರದೇಶವನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗಿದೆ, ಹಸ್ತಾಂತರವಾದ ಜಮೀನನ್ನು ಬಡಾವಣೆಗಳನ್ನಾಗಿ ನಿರ್ಮಿಸಲು ಸಂಬಂಧಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನಗರ ಯೋಜನಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ನಿರ್ದೇಶನ ನೀಡಿದರು.
ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಕಾರ್ಯ ನಿರ್ವಾಹಕ ಇಂಜಿನಿಯರ್ ರವೀಶ್ ಮಾತನಾಡಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 121 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದ್ದು, ಈ ಪೈಕಿ 14 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಹಾಗೂ 31 ಗ್ರಾಮಗಳಲ್ಲಿ ಬಾಡಿಗೆ ಆಧಾರದ ಮೇಲೆ ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಕೆ ಮಾಡಲಾಗುತ್ತಿದೆ, ಕುಡಿಯುವ ನೀರಿನ ತೀವ್ರತರ ಸಮಸ್ಯೆ ಕಂಡು ಬಂದಿರುವ ಗ್ರಾಮಗಳಲ್ಲಿ ಹೊಸದಾಗಿ 60 ಕೊಳವೆ ಬಾವಿ ಕೊರೆಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜನಪ್ಪ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
Comments are closed.