ತುಮಕೂರು: ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ತುಮಕೂರು ತಾಲ್ಲೂಕಿನ ಹೆಗ್ಗೆರೆಯಲ್ಲಿ ಮತದಾರರಲ್ಲಿ ಮತದಾನ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಜಿ.ಪ್ರಭು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಜನರಿಗೆ ಮತದಾನ ಮತ್ತು ಚುನಾವಣೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಸುಮಾರು 300 ಬೈಕ್ ಗಳಿಂದ ಹೆಗ್ಗೆರೆಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಜಾಥಾ ನಡೆಸಲಾಗುತ್ತಿದೆ, ಪ್ರತಿಯೊಬ್ಬರೂ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬೇಕು, ಈ ಬಾರಿಯ ಚುನಾವಣೆಯಲ್ಲಿ 44 ಸಾವಿರ ಯುವ ಮತದಾರರು ತಮ್ಮ ಮತ ಚಲಾಯಿಸುತ್ತಿದ್ದು, ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಿಳಿಸಿದರು.
ಪ್ರತಿಯೊಂದು ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಈ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ಮಾಡುವ ಮೂಲಕ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಬೇಕೆಂದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಉಪ ನಿರ್ದೇಶಕ ಅಶೋಕ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗದಾಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.
Comments are closed.