ಅದ್ದೂರಿಯಾಗಿ ನಾಮಪತ್ರ ಸಲ್ಲಿಸಿದ ವಿ.ಸೋಮಣ್ಣ

ನಾಮಪತ್ರ ಸಲ್ಲಿಕೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ವೈ, ಹೆಚ್ ಡಿ ಕೆ ಸಾಥ್

27

Get real time updates directly on you device, subscribe now.


ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ವಿ.ಸೋಮಣ್ಣ ಬುಧವಾರ ನಗರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ ಸಹಸ್ರಾರು ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಹೆಚ್.ಡಿ.ಕುಮಾಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಜಿ.ಎಸ್.ಬಸವರಾಜು ಅವರ ಸಮ್ಮುಖದಲ್ಲಿ ಸೋಮಣ್ಣ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.
ನಗರದ ಬಿ.ಹೆಚ್.ರಸ್ತೆಯ ವಿನಾಯಕ ನಗರದ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ ಪೂಜೆ ಸಲ್ಲಿಸಿದ ಎನ್ಡಿಎ ಅಭ್ಯರ್ಥಿ ವಿ.ಸೋಮಣ್ಣ ಹಾಗೂ ಬಿಜೆಪಿ, ಜೆಡಿಎಸ್ ನಾಯಕರು ನಂತರ ಎರಡೂ ಪಕ್ಷಗಳ ಸಹಸ್ರಾರು ಸಂಖ್ಯೆಯ ಬೆಂಬಲಿಗರ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡರು, ಮೆರವಣಿಗೆ ಉದ್ದಕ್ಕೂ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ತಮ್ಮ ಪಕ್ಷಗಳ ಬಾವುಟ ಪ್ರದರ್ಶಿಸಿ ಸಂಭ್ರಮಿಸಿದರು, ಮೋದಿ, ಮೋದಿ ಮತ್ತೊಮ್ಮೆ ಮೋದಿ ಎಂಬ ಹರ್ಷೋದ್ಘಾರದೊಂದಿಗೆ ಮೆರವಣಿಗೆ ಸಾಗಿದರು, ಮೆರವಣಿಗೆ ಆರಂಭವಾದ ಗಣಪತಿ ದೇವಸ್ಥಾನದಿಂದ ಬಿ.ಹೆಚ್.ರಸ್ತೆ, ಎಂ.ಜಿ.ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿವರೆಗೂ ಎರಡೂ ಪಕ್ಷಗಳ ಬೆಂಬಲಿಗರ ಸಾಗರವೇ ಕಂಡುಬಂದಿತು.

ಸೋಮಣ್ಣ ಗೆಲುವಿಗೆ ಮುನ್ನುಡಿ: ಬಿಎಸ್ವೈ

ಮೆರವಣಿಗೆಯಲ್ಲಿ ಬಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಸೋಮಣ್ಣನವರ ನಾಮಪತ್ರ ಸಲ್ಲಿಕೆಗೆ ಎರಡೂ ಪಕ್ಷಗಳ ಇಷ್ಟೊಂದು ಜನ ಸೇರಿರುವುದು ದೊಡ್ಡ ದಾಖಲೆ, ಇದು ಸೋಮಣ್ಣ ಅವರ ಗೆಲುವಿನ ಮುನ್ಸೂಚನೆ, ಸೋಮಣ್ಣ ಎರಡು ಲಕ್ಷ ಮತಗಳ ಅಂತರದಿಂದ ಚುನಾವಣೆಯಲ್ಲಿ ಜಯಗಳಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ರೈತರಿಗೆ ನೀಡುವ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ನೀಡುವ ಆರು ಸಾವಿರ ರೂ. ಜೊತೆಗೆ ನಾವು ಮುಖ್ಯಮಂತ್ರಿಯಾಗಿದ್ದಾಗ ನಾಲ್ಕು ಸಾವಿರ ರೂ. ಸೇರಿಸಿ ಹತ್ತು ಸಾವಿರ ರೂ. ಗಳನ್ನು ರೈತರ ಬ್ಯಾಂಕ್ ಅಕೌಂಟಿಗೆ ಹಾಕುತ್ತಿದ್ದೆವು, ಈಗಿನ ಸಿದ್ದರಾಮಯ್ಯ ಸರ್ಕಾರ ಆ ಹಣ ನಿಲ್ಲಿಸಿ ರೈತರಿಗೆ ಅನ್ಯಾಯ ಮಾಡಿದೆ, ಬಿಜೆಪಿ ಸರ್ಕಾರವಿದ್ದಾಗ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮಿ ಯೋಜನೆಯಿಂದ ಕೋಟ್ಯಾಂತರ ಮಹಿಳೆಯರಿಗೆ ಅನುಕೂಲವಾಗುತ್ತಿತ್ತು, ಆ ಯೋಜನೆಯನ್ನು ಏಕೆ ಸ್ಥಗಿತಗೊಳಿಸಿದ್ದೀರಿ ಎಂದು ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನೆ ಮಾಡಿದರು.

ದೇಶದ ಭವಿಷ್ಯದ ಚುನಾವಣೆ: ಹೆಚ್.ಡಿ.ಕೆ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ, ವಿ.ಸೋಮಣ್ಣ ಅವರಿಗೆ ತುಮಕೂರು ಕ್ಷೇತ್ರದ ಎರಡೂ ಪಕ್ಷದ ಜನ ಅಭೂತಪೂರ್ವವಾಗಿ ಬೆಂಬಲ ನೀಡಿದ್ದೀರಿ, ಇಷ್ಟು ಜನ ಸೇರಿರುವುದು ಐತಿಹಾಸಿಕ ದಾಖಲೆ, ರಾಜ್ಯದ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗೆ ಜನ ಬೇಸತ್ತಿದ್ದಾರೆ, ಕಾಂಗ್ರೆಸ್ ಸರ್ಕಾರದವರು ಪದೇ ಪದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿವುದು ಬಿಟ್ಟರೆ ಜನರ ಸಂಕಷ್ಟ ನಿವಾರಣೆಗೆ ಯಾವುದೇ ಪ್ರಯತ್ನ ಮಾಡುತ್ತಿಲ್ಲ, ಬರದಿಂದ ರೈತರು, ಜನ ತತ್ತರಿಸಿ ಹೋಗಿದ್ದಾರೆ, ಅವರ ನೆರವಿಗೆ ಸರ್ಕಾರ ಸ್ಪಂದಿಸಿಲ್ಲ, ನುಡಿದಂತೆ ನಡೆದಿದ್ದೇವೆ ಎಂದು ಪ್ರಚಾರ ಪಡೆಯುವ ಕಾಂಗ್ರೆಸ್ ನವರು ಪ್ರಚಾರದ ಜಾಹಿರಾತಿಗಾಗಿ ರಾಜ್ಯದ ಜನರ 300 ಕೋಟಿ ರೂ.ತೆರಿಗೆ ಹಣ ಖರ್ಚು ಮಾಡಿದ್ದಾರೆ, ಆದರೆ ಬರ ಪರಿಹಾರ ಕಾರ್ಯಗಳಿಗೆ ನೆರವಾಗಿಲ್ಲ, ಕಾಂಗ್ರೆಸ್ ನವರು ಗ್ಯಾರಂಟಿ ಯೋಜನೆಗಳಿಗೆ ಸಾಲ ಮಾಡಿದ ಹಣ, ಜನರ ತೆರಿಗೆ ಹಣ ನೀಡುತ್ತಿದ್ದಾರೆ, ಈ ಸಾಲವನ್ನು ಸಿದ್ದರಾಮಯ್ಯ ತೀರಿಸುವುದಿಲ್ಲ, ರಾಜ್ಯದ ಏಳು ಕೋಟಿ ಜನ ತೀರಿಸಬೇಕಾಗಿದೆ ಎಂದರು.

ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ರಾಜ್ಯದಲ್ಲಿ ಬರಗಾಲ ಬರುತ್ತದೆ, ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಮೊದಲ ಕ್ಯಾಬಿನೆಟ್ ಸಭೆ ನಡೆಸಿ ಹೊರಬರುತ್ತಿದ್ದಂತೆ ಮಳೆಯಾಯಿತು, ಕಾಂಗ್ರೆಸ್ ಬಂದರೆ ಬರ, ಬಿಜೆಪಿ ಅಧಿಕಾರಕ್ಕೆ ಮಳೆ ಎಂದರು.

ಎನ್ ಡಿಎ ಅಭ್ಯರ್ಥಿ ವಿ.ಸೋಮಣ್ಣ ಮಾತನಾಡಿ, ದೇಶದ ಇವತ್ತಿನ ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶ ಮುನ್ನಡೆಸಲು ಯೋಗ್ಯ ನಾಯಕ ಬೇಕು, ಭವಿಷ್ಯದ ಜನರಿಗೆ ಕನಸಿನ ಭಾರತ ನಿರ್ಮಾಣ ಮಾಡಬೇಕು ಎಂಬ ದೂರಾಲೋಚನೆಯಿಂದ ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಹಲವಾರು ನಾಯಕರು ಮೋದಿರವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಚಿಂತನೆ ಮಾಡಿ ಈ ಚುನಾವಣೆಗೆ ಸಜ್ಜಾಗಿದ್ದಾರೆ, ಇದೇ ಉದ್ದೇಶದಿಂದ ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದೇವೆ, ಈ ಚುನಾವಣೆಯ ಗೆಲುವಿನೊಂದಿಗೆ ರಾಜ್ಯದಲೂ ಹೊಸ ಶಕೆ ಆರಂಭವಾಗಲಿದೆ, ಇದೇ ಏಪ್ರಿಲ್ ತಿಂಗಳ 26ರಂದು ನಡೆಯುವ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಆಶೀರ್ವಾದ ಮಾಡಿ ತಮಗೆ ಮತ ನೀಡುವಂತೆ ಮನವಿ ಮಾಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ, ಸಂಸದ ಜಿ.ಎಸ್.ಬಸವರಾಜು, ರಾಜ್ಯಸಭಾ ಸದಸ್ಯ ಜಗ್ಗೇಶ್, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಸುರೇಶ್ ಗೌಡ, ಎಂ.ಟಿ.ಕೃಷ್ಣಪ್ಪ, ಸುರೇಶ್ ಬಾಬು, ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣ ಸ್ವಾಮಿ, ಚಿದಾನಂದಗೌಡ, ಮಾಜಿ ಸಚಿವರಾದ ಸೊಗಡು ಶಿವಣ್ಣ, ಬಿ.ಸಿ.ನಾಗೇಶ್, ಮಾಜಿ ಶಾಸಕರಾದ ಎಂ.ಡಿ.ಲಕ್ಷ್ಮೀನಾರಾಯಣ, ಸುಧಾಕರಲಾಲ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!