ತುಮಕೂರು: ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪ್ರಭು.ಜಿ. ಚಾಲನೆ ನೀಡಿದರು.
ತುಮಕೂರು ನಗರದ ಎಸ್.ಎಸ್.ಪುರಂ, ಶೆಟ್ಟಿಹಳ್ಳಿ, ಜಯನಗರ, ಕುಣಿಗಲ್ ರಿಂಗ್ ರಸ್ತೆ, ಉಪ್ಪಾರಹಳ್ಳಿ, ಶಿವಕುಮಾರ ಸ್ವಾಮೀಜಿ ವೃತ್ತ, ಕೋತಿ ತೋಪು, ಹೊರಪೇಟೆ, ಬಾರ್ ಲೈನ್ ರಸ್ತೆ ಮಾರ್ಗವಾಗಿ ಸಂಚರಿಸಿದ ಜಾಥಾ ಕಾರ್ಯಕ್ರಮದಲ್ಲಿ ಸ್ವಚ್ಛತಾ ವಾಹನಗಳ ಮೂಲಕ ಜನರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು.
ನಂತರ ಮಾತನಾಡಿದ ಪ್ರಭು.ಜಿ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕೃಷಿ, ತೋಟಗಾರಿಕೆ, ಶಿಕ್ಷಣ, ಕಾರ್ಮಿಕ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳಿಂದ ಮತದಾನದ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸುವಂತಹ ವಿನೂತನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆಯಲ್ಲದೆ, ತಾಲ್ಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲೂ ಹಲವಾರು ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಶ್ರಮಿಸಲಾಗುತ್ತಿದೆ ಎಂದರು.
ಮತದಾನ ಜಾಗೃತಿ ಮೂಡಿಸುವ ಜವಾಬ್ದಾರಿ ಅಧಿಕಾರಿಗಳಿಗಷ್ಟೇ ಅಲ್ಲದೆ ಯುವಕರಿಗೂ ಇರಬೇಕು, ತಮ್ಮ ಕುಟುಂಬದ ಸದಸ್ಯರು, ನೆರೆ- ಹೊರೆಯವರು, ಬಂಧು- ಬಳಗದವರಿಗೆ ಏ.26 ರಂದು ತಪ್ಪದೇ ಮತ ಹಾಕು ಎಂಬ ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಕೃಷಿ ಇಲಾಖೆ ಉಪ ನಿರ್ದೇಶಕ ಅಶೋಕ್, ತುಮಕೂರು ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹರ್ಷಕುಮಾರ್.ಕೆ. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಸ್ವಚ್ಛತಾಗಾರರು ಜಾಥಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ತುಮಕೂರು, ಕೊರಟಗೆರೆ, ಶಿರಾ, ಮಧುಗಿರಿ, ಗುಬ್ಬಿ, ಕುಣಿಗಲ್ ತಾಲ್ಲೂಕುಗಳ 200ಕ್ಕೂ ಹೆಚ್ಚು ಸ್ವಚ್ಛತಾ ವಾಹನಗಳು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.
Comments are closed.