ತುಮಕೂರು: ಕರ್ನಾಟಕ ವಿಧಾನ ಪರಿಷತ್ತಿನ ರಾಜ್ಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮೇ 6 ಕಡೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ನಡೆಸಿದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿ, ಕರ್ನಾಟಕ ಆಗ್ನೆಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ 2023ರ ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಿಚ್ಛಿಸುವ ಶಿಕ್ಷಕ ಮತದಾರರು ಭಾರತದ ಪ್ರಜೆಯಾಗಿದ್ದು, ಆಗ್ನೇಯ ಶಿಕ್ಷಕರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರಬೇಕು ಹಾಗೂ 2023ರ ನವೆಂಬರ್ 1ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ ಕನಿಷ್ಠ ಒಟ್ಟು 3 ವರ್ಷಗಳಷ್ಟು ಪ್ರೌಢಶಾಲೆಗಿಂತ ಕಡಿಮೆಯಲ್ಲದ ದರ್ಜೆಯಲ್ಲಿ ನಿರ್ಧಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರಬೇಕು, ಖಾಯಂ ಶಿಕ್ಷಕರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಅರೆಕಾಲಿಕ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ ಎಂದು ತಿಳಿಸಿದರು.
ಈವರೆಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಲು ಅರ್ಜಿ ಸಲ್ಲಿಸದೇ ಇರುವ ಮತ್ತು ಮೇಲ್ಕಂಡ ಅರ್ಹತೆ ಹೊಂದಿರುವ ಶಿಕ್ಷಕ ವೃಂದದ ಮತದಾರರು ಮೇ 6 ರಂದು ಸಂಜೆ 5.30 ಗಂಟೆಯೊಳಗಾಗಿ ನಿಗದಿತ ನಮೂನೆ- 19 ನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪ ತಾಲ್ಲೂಕುಗಳ ನಿಯೋಜಿತ ಅಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು.
ಬಳಿಕ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡೀಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಭಾರತ ಚುನಾವಣಾ ಆಯೋಗವು ರಾಜ್ಯದಲ್ಲಿ ವಿಧಾನ ಪರಿಷತ್ತಿಗೆ ಅವಧಿ ಮುಕ್ತಾಯವಾಗುವ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ದ್ವೈವಾರ್ಷಿಕ ಚುನಾವಣೆ ಘೋಷಿಸಿದ್ದು, ಈಗಾಗಲೇ ಜಾರಿಯಲ್ಲಿರುವ ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆಯ ಎಲ್ಲಾ ನಿಬಂಧನೆ ಈ ಚುನಾವಣೆಗೂ ಅನ್ವಯವಾಗುತ್ತದೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಬೇಕು, ಆಯೋಗದ ಮಾರ್ಗಸೂಚಿಗಳಂತೆ ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವೇಳಾಪಟ್ಟಿ ಪ್ರಕಟ: ಚುನಾವಣಾ ಆಯೋಗವು ರಾಜ್ಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ವೇಳಾಪಟ್ಟಿಯನ್ವಯ ಮೇ 9 ರಂದು ಅಧಿಸೂಚನೆ ಹೊರಡಿಸಲಾಗುವುದು, ಚುನಾವಣಾ ನಾಮಪತ್ರ ಸಲ್ಲಿಸಲು ಮೇ 16 ಕಡೆಯ ದಿನವಾಗಿದ್ದು, ಮೇ 17 ರಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲಿಸಲಾಗುವುದು, ನಾಮಪತ್ರ ಹಿಂಪಡೆಯಲು ಮೇ 20 ರಂದು ಕಡೆಯ ದಿನವಾಗಿದ್ದು, ಜೂನ್ 3 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ, ಜೂನ್ 6 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ತಹಶೀಲ್ದಾರ್ ಸಿದ್ದೇಶ್, ಚುನಾವಣಾ ತಹಶೀಲ್ದಾರ್ ರೇಷ್ಮ, ಪಾಲಿಕೆ ಚುನಾವಣಾ ಶಾಖೆ ಮುಖ್ಯಸ್ಥ ನಾಗಭೂಷಣ್ ಇತರರು ಇದ್ದರು.
Comments are closed.