ಮಧುಗಿರಿ: ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಪೊಲೀಸರಿಗೆ ಸೂಚನೆ ನೀಡಿದರು.
ಮಧುಗಿರಿ ಪಟ್ಟಣ ಮತ್ತು ತಾಲೂಕಿನಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣ ಹಾಗೂ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿ ವರದಿಯಾಗುತ್ತಿವೆ ಎಂದು ಸಾರ್ವಜನಿಕ ವಲಯದಲ್ಲಿ ದೂರು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಪಟ್ಟಣದ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರೊಂದಿಗೆ ಚರ್ಚಿಸಿ ಮಾತನಾಡಿ, ತಾಲೂಕಿನಲ್ಲಿ ಕಳ್ಳತನ ಪ್ರಕರಣ ವರದಿಯಾಗದಂತೆ ಹೆಚ್ಚಿನ ನಿಗಾ ವಹಿಸಬೇಕು, ರಾತ್ರಿಯ ವೇಳೆಯಲ್ಲಿ ಪೊಲೀಸ್ ಸಿಬ್ಬಂದಿ ಗಸ್ತು ತಿರುಗುವುದನ್ನು ಹೆಚ್ಚಿಸಬೇಕು, ಪಟ್ಟಣದ ಎಲ್ಲಾ ಮುಖ್ಯ ರಸ್ತೆಗಳಿಗೆ ಈಗಾಗಲೇ ಸಿಸಿ ಕ್ಯಾಮರಾ ಅಳವಡಿಸಿದ್ದು, ಅಗತ್ಯವಿದ್ದಲ್ಲಿ ಮತ್ತಷ್ಟು ಕಡೆ ಸಿಸಿ ಕ್ಯಾಮರ ಅಳವಡಿಸಬೇಕು ಎಂದು ಸೂಚಿಸಿದರು.
ಪಟ್ಟಣದಲ್ಲಿ ಕೆಲ ಯುವಕರು ಗಾಂಜಾ ಸೇವನೆಯ ಚಟಕ್ಕೆ ಒಳಗಾಗಿದ್ದು, ಇದರ ಬಗ್ಗೆ ನಿಗಾ ವಹಿಸಬೇಕು, ಇದು ಯಾವ ಭಾಗದಿಂದ ಸರಬರಾಜಾಗುತ್ತಿದೆ ಎಂಬುದನ್ನು ಪತ್ತೆ ಹಚ್ಚಿ ಯಾವುದೇ ಮುಲಾಜಿಗೆ ಒಳಗಾಗದೇ ಕಠಿಣ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ನಂತರ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಕುಸಿದಿರುವ ಹಿನ್ನೆಲೆಯಲ್ಲಿ ಬಿಇಒ ಹನುಮಂತರಾಯಪ್ಪ ಬಳಿ ಮಧುಗಿರಿ ತಾಲೂಕಿನಲ್ಲಿ ಎಷ್ಟು ಜನ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ, ಫಲಿತಾಂಶ ಕುಸಿತಕ್ಕೆ ಕಾರಣಗಳೇನು ಎಂಬ ಬಗ್ಗೆ ರಾಜೇಂದ್ರ ಮಾಹಿತಿ ಪಡೆದರು.
ತಾಲೂಕಿನಲ್ಲಿ ಅನುತ್ತೀರ್ಣರಾಗಿರುವ ಅಷ್ಟೂ ವಿದ್ಯಾರ್ಥಿಗಳಿಗೂ ಮತ್ತೆ ಪರೀಕ್ಷೆ ಬರೆಯುವಂತೆ ಮನವೊಲಿಸಬೇಕು, ಅವರಿಗೆ ಪರಿಣಿತಿ ಹೊಂದಿದ ಶಿಕ್ಷಕರಿಂದ ತುರ್ತಾಗಿ ಮತ್ತೆ ಪಾಠ ಪ್ರವಚನ ಮಾಡಿಸಿ ಅವರನ್ನು ಪರೀಕ್ಷೆಗೆ ತರಬೇತಿ ನೀಡಬೇಕು, ಇದರ ಹೊಣೆಯನ್ನು ಆಯಾ ಶಾಲೆಯ ಮುಖ್ಯ ಶಿಕ್ಷಕರು ನಿರ್ವಹಿಸುವಂತೆ ಕ್ರಮ ಕೈಗೊಂಡು ಮುಂಬರುವ ಜೂನ್ ಮಾಹೆಯಲ್ಲಿ ನಡೆಯುವ ಎಸ್ ಎಸ್ಎಲ್ ಸಿ ಪರೀಕ್ಷೆಯಲ್ಲಿ ಅಷ್ಟೂ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ನೋಡಿಕೊಂಡು ಹೆಚ್ಚಿನ ವಿದ್ಯಾರ್ಥಿಗಳು ಪಾಸ್ ಆಗುವಂತೆ ಕ್ರಮ ಕೈಗೊಂಡು ಅವರ ಮುಂದಿನ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸಿಪಿಐ ರವಿ ಕುಮಾರ್, ಪಿಎಸ್ ಐ ಗಳಾದ ಮುತ್ತುರಾಜು, ರವಿ ಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಸದಸ್ಯರಾದ ಲಾಲಾಪೇಟೆ ಮಂಜುನಾಥ್, ಮಂಜುನಾಥ್ ಆಚಾರ್, ಮುಖಂಡರಾದ ಬಾಬಾ ಫಕ್ರುದ್ದೀನ್ ಇತರರಿದ್ದರು.
Comments are closed.