ಮುಂಗಾರು ಬಿತ್ತನೆಗೆ ಸಿದ್ಧತೆ ಕೈಗೊಳ್ಳಿ: ಡೀಸಿ

ಸಮರ್ಪಕವಾಗಿ ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಮಾಡಿ

22

Get real time updates directly on you device, subscribe now.


ತುಮಕೂರು: ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ರೈತರು ಮುಂಗಾರು ಬಿತ್ತನೆ ಕಾರ್ಯ ಕೈಗೊಳ್ಳಲು ಅನುವಾಗುವಂತೆ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಹಾಗೂ ವಿತರಣೆ ಸೇರಿದಂತೆ ಸಕಲ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ, ರಸಗೊಬ್ಬರ ಸರಬರಾಜು, ದಾಸ್ತಾನು, ವಿತರಣೆ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿ, ರೈತರಿಗೆ ಗುಣಮಟ್ಟದ ಬೀಜ ವಿತರಿಸಬೇಕು, ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ಹಾಗೂ ರಸಗೊಬ್ಬರ ದಾಸ್ತಾನು ವಿವರ, ಮಾರಾಟ ದರದ ವಿವರಗಳನ್ನು ಪ್ರದರ್ಶಿಸಬೇಕು, ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ಬಾರದಂತೆ ಕಾರ್ಯ ನಿರ್ವಹಿಸಬೇಕು, ರೈತರಿಗೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ ವಿತರಣೆಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರಿಕೆ ಮಾಡಲಾಗುವುದು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಮಳೆ ಪ್ರಾರಂಭವಾಗಿರುವುದರಿಂದ ಕೃಷಿ ಸಂಬಂಧಿತ ಸಮಸ್ಯೆ ಬಗೆಹರಿಸಲು ಕೃಷಿ, ತೋಟಗಾರಿಕೆ, ತಾಲ್ಲೂಕು ಪಂಚಾಯತಿ ಹಾಗೂ ಕಂದಾಯ ಅಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಲಭ್ಯವಿರಬೇಕು ಎಂದು ತಿಳಿಸಿದರಲ್ಲದೆ ವಿದ್ಯುತ್ ಸರಬರಾಜು ಮಾರ್ಗಗಳು ಸುಸ್ಥಿತಿಯಲ್ಲಿರಬೇಕು, ಮಳೆ- ಗಾಳಿಗೆ ವಿದ್ಯುತ್ ಕಂಬ, ತಂತಿ ಬಿದ್ದರೆ ತುರ್ತಾಗಿ ದುರಸ್ತಿ ಪಡಿಸಲು ಕ್ರಮ ಕೈಗೊಳ್ಳಬೇಕು, ಯಾವುದೇ ವಿದ್ಯುತ್ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಸೂಚಿಸಿದರು.
ಮಳೆಯಿಂದ ಮನೆ, ಬೆಳೆ ಹಾನಿ ಹಾಗೂ ಜನ, ಜಾನುವಾರುಗಳ ಜೀವ ಹಾನಿಯಾದಲ್ಲಿ ಕೂಡಲೇ ತಾಲ್ಲೂಕು ತಹಶೀಲ್ದಾರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು, ಪರಿಹಾರ ನೀಡಲು ವಿಳಂಬ ಮಾಡಬಾರದು ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಮಳೆಯಿಂದ ವಿಪತ್ತು ಉಂಟಾದಲ್ಲಿ ಸಂಬಂಧಿಸಿದ ತಹಶೀಲ್ದಾರರು ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ನೀಡಬೇಕು, ಸಿಡಿಲು ಬಡಿದು ಸಾವು ಸಂಭವಿಸಿದಲ್ಲಿ ವಿಳಂಬ ಮಾಡದೆ ತಕ್ಷಣವೇ ಪರಿಹಾರ ನೀಡುವ ಕಾರ್ಯವಾಗಬೇಕು ಎಂದರು.

ಜಿಲ್ಲೆಯ ಪ್ರತಿ ರೈತ ಸಂಪರ್ಕ ಕೇಂದ್ರಗಳಿಗೆ ಆಯಾ ಉಪ ವಿಭಾಗಾಧಿಕಾರಿಗಳು, ತಾಲುಕು ತಹಶೀಲ್ದಾರರು, ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು, ಬೀಜ, ರಸಗೊಬ್ಬರಕ್ಕಾಗಿ ರೈತರು ಭೇಟಿ ನೀಡುವುದರಿಂದ ರೈತ ಸಂಪರ್ಕ ಕೇಂದ್ರಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು, ರಸ ಗೊಬ್ಬರ ಮಾರಾಟ ಮಾಡುವ ಖಾಸಗಿ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಮಾರಾಟ ದರ ಹಾಗೂ ದಾಸ್ತಾನಿನ ಬಗ್ಗೆ ಪರಿಶೀಲಿಸಬೇಕು. ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ ಮಾಡುವ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ಕಳೆದ ವರ್ಷದ ಬರ ಪರಿಸ್ಥಿತಿಯಿಂದ ಕಂಗಾಲಾಗಿರುವ ರೈತರಿಗೆ ಅನ್ಯಾಯವಾಗದಂತೆ ಕೃಷಿ ಚಟುವಟಿಕೆ ಕೈಗೊಳ್ಳಲು ಪೂರಕ ವಾತಾವರಣ ಕಲ್ಪಿಸುವ ನಿಟ್ಟಿಿನಲ್ಲಿ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಮಾತನಾಡಿ, ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಉಂಟಾಗಿ ಸಂಭವಿಸಬಹುದಾದ ದುಷ್ಪರಿಣಾಮಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು. ಮಳೆ ಹಾನಿಗೆ ತುತ್ತಾಗುವಂತಹ ಪ್ರದೇಶಗಳನ್ನು ಗುರುತಿಸಿ ಸ್ಥಳೀಯರಿಗೆ ಅರಿವು ಮೂಡಿಸಬೇಕು ಎಂದರು.

ಜಂಟಿ ಕೃಷಿ ನಿರ್ದೇಶಕ ರಮೇಶ್, ಉಪ ವಿಭಾಗಾಧಿಕಾರಿ ಗೌರವ ಕುಮಾರ್ ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್, ತೋಟಗಾರಿಕೆ ಉಪ ನಿರ್ದೇಶಕ ಶಾರದಮ್ಮ, ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ.ಗಿರೀಶ್ ಬಾಬು ರೆಡ್ಡಿ, ಎಪಿಎಂಸಿ ಉಪ ನಿರ್ದೇಶಕ ರಾಜಣ್ಣ ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!