ತುಮಕೂರು: ಮುಂಗಾರು ಮಳೆಯಿಂದ ಸಂಭವಿಸಬಹುದಾದ ವಿವಿಧ ರೀತಿಯ ಪ್ರಾಕೃತಿಕ ವಿಕೋಪ ಪರಿಸ್ಥಿತಿ ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವ ಮೂಲಕ ಜಿಲ್ಲೆಯಲ್ಲಿ ಯಾವುದೇ ಜೀವ ಹಾನಿಯಾಗದ ರೀತಿಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಸನ್ನದ್ದರಾಗಿರುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ವೀಡಿಯೋ ಕಾನ್ಪೆರೆನ್ಸ್ ಸಭಾಂಗಣದಲ್ಲಿ ನಡೆದ ಮುಂಗಾರು- 2024 ಪೂರ್ವ ಸಿದ್ಧತೆ ಹಾಗೂ ಬರ ನಿರ್ವಹಣೆ ಮತ್ತು ಕಂದಾಯ ವಿಷಯಗಳಿಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾದ್ಯಂತ ಆಗಿರುವ ಮಳೆಯ ಪ್ರಮಾಣ, ಅದರಿಂದ ಆದ ಹಾನಿ, ಬರ ನಿರ್ವಹಣೆ, ಮೊದಲಾದ ವಿಷಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಗಾರು ಮಳೆ ಹಾಗೂ ಚಂಡಮಾರುತ ಪರಿಣಾಮ ತಗ್ಗಿಸಲು ಕ್ಯೆಗೊಳ್ಳಬಹುದಾದ ಕ್ರಮಗಳ ಕುರಿತು ನೀಡಿರುವ ಸಲಹೆ ಸೂಚನೆಗಳ ರೀತ್ಯ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು, ಜಿಲ್ಲೆಯಲ್ಲಿ ಈ ಹಿಂದಿನ ವರ್ಷಗಳಲ್ಲಿ ಉಂಟಾದ ಘಟನೆಗಳಿಗೆ ಅನುಗುಣವಾಗಿ ಸಮಸ್ಯೆಗೆ ಒಳಗಾದ ಸ್ಥಳ ಪರಿಶೀಲಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು, ಯಾವುದೇ ಸಿದ್ಧತೆ ಮಾಡಿಕೊಳ್ಳದೆ ನಿರ್ಲಕ್ಷ ವಹಿಸುವಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ತಿಪಟೂರು ತಾಲ್ಲೂಕಿನ ಹೆಚ್ ಭೈರಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 8 ಮಿ.ಮೀ ಮಳೆಯಾಗಿದ್ದು, ಹೆಚ್ ಭೈರಾಪುರ ರಸ್ತೆ, ಮೇಲ್ ಸೆತುವೆ ಮೇಲೆ ನೀರು ಹರಿದು ಸಾರ್ವಜನಿಕರಿಗೆ ತೊಂದರೆ ಆಗಿರುವ ಕುರಿತು ಪರಿಶೀಲಿಸಿದ ಜಿಲ್ಲಾಧಿಕಾರಿ, ಸ್ಥಳಕ್ಕೆ ಭೇಟಿ ನೀಡಿ ಮುಂದೆ ಇಂತಹ ಘಟನೆ ಸಂಭವಿಸದ ರೀತ್ಯ ಕ್ಯೆಗೊಳ್ಳಬಹುದಾದ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ತಾಲ್ಲೂಕು ತಹಶೀಲ್ದಾರ್ ಗೆ ಸೂಚಿಸಿದರು.
ತ್ಯಾಜ್ಯ ತೆರವು: ಜಿಲ್ಲೆಯಲ್ಲಿರುವ ಕೆರೆಗಳ ಆವರಣವನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಸೋರಿಕೆ ಇದ್ದಲ್ಲಿ ಅದನ್ನು ತಡೆಗಟ್ಟಲು ಸಣ್ಣ ನೀರಾವರಿ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು, ಕೆರೆಗಳು, ಚರಂಡಿ, ಕಾಲುವೆಗಳಲ್ಲಿರುವ ತ್ಯಾಜ್ಯ ತೆರವುಗೊಳಿಸಿ ಮಳೆನೀರು ಸರಾಗವಾಗಿ ಹರಿದು ಹೋಗಲು ಕ್ರಮ ವಹಿಸಬೇಕು, ಯಾವುದೇ ದುರಸ್ಥಿ ಇದ್ದಲ್ಲಿ ಅವುಗಳನ್ನು ಸಕಾಲದಲ್ಲಿ ನಿರ್ವಹಿಸಬೇಕು ಎಂದು ತಿಳಿಸಿದರು.
ಕೂಡಲೇ ಘಟನಾ ಸ್ಥಳಕ್ಕೆ ತೆರಳಿ: ಪ್ರಾಕೃತಿಕ ವಿಕೋಪ ಸಂಭವಿಸಿದ ಘಟನಾ ಸ್ಥಳಕ್ಕೆ ಕೂಡಲೇ ತಾಲೂಕು ಮಟ್ಟದ ಅಧಿಕಾರಿಗಳು ತೆರಳಿ, ಸಾರ್ವಜನಿಕ ಜೀವ, ಆಸ್ತಿ ಹಾನಿಯಾಗದಂತೆ ಅಗತ್ಯ ಕ್ರಮ ವಹಿಸಬೇಕು, ರಸ್ತೆ, ಸೇತುವೆಗಳು ಹಾನಿಯಾದಲ್ಲಿ, ಕೂಡಲೆ ರಸ್ತೆ ಸಂಪರ್ಕ ಪುನರ್ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು, ತುರ್ತು ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಲು ಅಗತ್ಯ ಸುರಕ್ಷಾ ಉಪಕರಣ ಗಳೊಂದಿಗೆ ಸಂಬಂಧಿಸಿದ ಇಲಾಖಾ ನೌಕರರು ಸನ್ನದ್ದರಾಗಿದ್ದು, ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಕಂದಾಯ, ಅರಣ್ಯ, ಬೆಸ್ಕಾಂ, ಲೋಕೋಪಯೋಗಿ, ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜ ಬಿ.ವಿ.ಮಾತನಾಡಿ, ತುಮಕೂರು ನಗರದ ಶಾಂತಿನಗರ, ಎಸ್ ಮಾಲ್ ಮೊದಲಾದ ಸ್ಥಳಗಳಲ್ಲಿ ಮಳೆ ಬಂದಂಥ ಸಂದರ್ಭದಲ್ಲಿ ಸಮಸ್ಯೆ ಉಂಟಾಗಿದ್ದು, ತಕ್ಷಣ ಬಗೆಹರಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ಡಿ ಡಿ ಎಲ್ ಆರ್ ನಿರಂಜನ್.ಎಂ.ಎನ್, ಜಿಲ್ಲೆಯ ಎಲ್ಲಾ ಉಪ ವಿಭಾಗಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಸಹಾಯವಾಣಿಗೆ ಕರೆ ಮಾಡಿ
ಮಳೆಯಿಂದ ಸಂಭವಿಸುವ ಹಾನಿ ಹಾಗೂ ಪ್ರಾಕೃತಿಕ ವಿಕೋಪದ ಕುರಿತು ಮಾಹಿತಿ ಪಡೆಯಲು ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು, ತುಮಕೂರು ಜಿಲ್ಲೆ 0816- 2213400, 7304975519, ಉಚಿತ ಸಹಾಯವಾಣಿ 155304 ಕ್ಕೆ ಸಂರ್ಪಕಿಸಿ ತಮಗಾಗುತ್ತಿರುವ ಸಮಸ್ಯೆ ಬಗ್ಗೆ ತಿಳಿಸಿ.
-ಶುಭಾ ಕಲ್ಯಾಣ್, ಜಿಲ್ಲಾಧಿಕಾರಿ
Comments are closed.