ಬೃಹತ್ ತುಮಕೂರು ಆರೋಗ್ಯ ಅಭಿಯಾನ: ಸಿಇಒ

27

Get real time updates directly on you device, subscribe now.


ತುಮಕೂರು: ಜಿಲ್ಲೆಯಲ್ಲಿ ಜೂನ್ 7 ರಿಂದ ಮೂರು ತಿಂಗಳ ಕಾಲ ಬೃಹತ್ ತುಮಕೂರು ಆರೋಗ್ಯ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಏಕ ಕಾಲದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಭು.ಜಿ. ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಈ ಅಭಿಯಾನದಲ್ಲಿ 30 ವರ್ಷ ಮೇಲ್ಪಟ್ಟವರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುವುದು, ಗ್ರಾಮೀಣ ಪ್ರದೇಶದಲ್ಲಿ ಮನೆ- ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸಲಾಗುವುದು, ತಪಾಸಣೆ ವೇಳೆ ರೋಗ ಪತ್ತೆಯಾದಲ್ಲಿ ಸಂಬಂಧಿಸಿದ ರೋಗಕ್ಕೆ ಚಿಕಿತ್ಸೆ ನೀಡಲಾಗುವುದು ಎಂದರು.

ಅಭಿಯಾನದ ಬಗ್ಗೆ ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಪಂಚಾಯತಿ ವ್ಯಾಪ್ತಿಯಲ್ಲಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡು ಜನರಿಗೆ ಆರೋಗ್ಯ ತುಮಕೂರು ಅಭಿಯಾನದಡಿ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಬೇಕು ಎಂದರು.
ಜಿಲ್ಲೆಯಲ್ಲಿ 30 ವರ್ಷ ಮೇಲ್ಪಟ್ಟ ಸುಮಾರು 17 ಲಕ್ಷ ಜನರಿದ್ದು, ಎಲ್ಲರಿಗೂ ರಕ್ತದೊತ್ತಡ, ಮಧುಮೇಹ, ಟಿಬಿ, ರಕ್ತ ಹೀನತೆ ಸೇರಿದಂತೆ ಹಲವು ಖಾಯಿಲೆಗಳಿಗೆ ತಂಡಗಳನ್ನು ರಚಿಸಿಕೊಂಡು ಚಿಕಿತ್ಸೆ ನೀಡಲಾಗುವುದು ಎಂದರು.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ 5 ಲಕ್ಷ ರೂ. ವರೆಗೆ ಚಿಕಿತ್ಸಾ ಸೌಲಭ್ಯ ನೀಡಲಾಗಿದೆ, ಜನರ ಮಾಹಿತಿಗಾಗಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಬಗ್ಗೆ ಫಲಕಗಳನ್ನು ಅಳವಡಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುನಾಥ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!