ಎಸ್ ಟಿ ನಿಗಮ ಹಗರಣ- ಸಚಿವ ನಾಗೇಂದ್ರ ರಾಜೀನಾಮೆ ನೀಡ್ಲಿ

23

Get real time updates directly on you device, subscribe now.


ತುಮಕೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಶನಿವಾರ ನಗರದ ಬಿಜಿಎಸ್ ವೃತ್ತದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.
ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಮುಖಂಡರು, ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯುವಂತೆ ಮುಖ್ಯಮಂತ್ರಿಸಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.
ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಮಾತನಾಡಿ, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಾದ 187 ಕೋಟಿ ರೂ. ಹಗರಣ ನಡೆದಿದೆ, ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಡೆತ್ ನೋಟ್ ನಲ್ಲೂ ಸಚಿವ ನಾಗೇಂದ್ರ ಅವರ ಹೆಸರು ಉಲ್ಲೇಖವಾಗಿದೆ, ಆದರೂ ಸರ್ಕಾರ ಸಚಿವರ ರಕ್ಷಣೆಗೆ ನಿಂತಿದೆ ಎಂದು ಆರೋಪಿಸಿದರು.

ತೆಲಂಗಾಣ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದರು, ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಬೇಕು ಎಂಬ ಉದ್ದೇಶದಿಂದ ಕರ್ನಾಟಕದ ಹಣವನ್ನು ಅಕ್ರಮವಾಗಿ ತೆಲಂಗಾಣ ಚುನಾವಣೆಗೆ ಬಳಕೆ ಮಾಡಿದ್ದಾರೆ, ಕಾಂಗ್ರೆಸ್ ನವರ ಭ್ರಷ್ಟಾಚಾರಕ್ಕೆ ತಾಜಾ ಉದಾಹರಣೆ ಎಂಬಂತೆ ಎಸ್ ಟಿ ಅಭಿವೃದ್ಧಿ ನಿಗಮದ ಹಣವನ್ನು ವಿವಿಧ ಅಕೌಂಟ್ ಗಳನ್ನು ತೆರೆದು ಅಕ್ರಮವಾಗಿ ಹೈದರಾಬಾದ್ ನ ಐಟಿ ಕಂಪನಿಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ, ಈ ಅಕ್ರಮಕ್ಕೆ ನೇರ ಹೊಣೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರವಿಕುಮಾರ್ ಆಗ್ರಹಿಸಿದರು.
ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈಶ್ವರಪ್ಪನವರ ಮೇಲೆ ಆರೋಪ ಬಂದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ ವಿರೋಧ ಪಕ್ಷದಲ್ಲಿದ್ದ ಇದೇ ಸಿದ್ದರಾಮಯ್ಯ ಒತ್ತಾಯಿಸಿದ್ದರು, ಆಗ ಈಶ್ವರಪ್ಪ ರಾಜೀನಾಮೆ ನೀಡಿದ್ದರು, ಅದೇ ರೀತಿ ಸಿದ್ದರಾಮಯ್ಯನವರೇ ನೀವೂ ರಾಜೀನಾಮೆ ನೀಡಿ, ನೈತಿಕತೆ ಪಾಠ ಹೇಳುವ ನಿಮಗೆ ನೈತಿಕತೆ ಇಲ್ಲವೆ? ಎಂದು ರವಿಕುಮಾರ್ ಪ್ರಶ್ನಿಸಿದರು.
ಮುಖಂಡ ಎಸ್.ಪಿ.ಚಿದಾನಂದ ಮಾತನಾಡಿ, ಪರಿಶಿಷ್ಟ ವರ್ಗಗಳಿಗೆ ಮೀಸಲಾಗಿದ್ದ ಹಣವನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಿಸಿಕೊಂಡು ಆ ಸಮುದಾಯಕ್ಕೆ ಅನ್ಯಾಯ ಮಾಡಿದೆ, ಈಗ ಪರಿಶಿಷ್ಟ ಪಂಗಡ ನಿಗಮದ 187 ಕೋಟಿ ರೂ. ಅವ್ಯವಹಾರ ಮಾಡಿ ಎಸ್ಟಿ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಟೀಕಿಸಿದರು.

ಮುಖಂಡರಾದ ಎಸ್.ಶಿವಪ್ರಸಾದ್, ವೈ.ಹೆಚ್.ಹುಚ್ಚಯ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನವಚೇತನ್, ಪ್ರಧಾನ ಕಾರ್ಯದರ್ಶಿ ಟಿ.ಕೆ.ಧನುಷ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಗೌಡ, ಗಂಗರಾಜು, ನಗರ ಬಿಜೆಪಿ ಅಧ್ಯಕ್ಷ ಹನುಮಂತರಾಜು, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ, ನಗರಪಾಲಿಕೆ ಮಾಜಿ ಸದಸ್ಯ ವಿಷ್ಣುವರ್ಧನ್, ಮುಖಂಡರಾದ ಹನುಮಂತರಾಯಪ್ಪ, ಅಂಜನ್ಮೂರ್ತಿ, ಮನೋಹರಗೌಡ, ಸತ್ಯಮಂಗಲ ಜಗದೀಶ್, ವಿರೂಪಾಕ್ಷಪ್ಪ, ವೆಂಕಟೇಶಾಚಾರ್, ನಿಟ್ಟೂರು ಪ್ರಕಾಶ್, ವಿಜಯಕುಮಾರ್ ಮೊದಲಾದವರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!