ತುಮಕೂರು: ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಅನೇಕ ಭಾಗಗಳಲ್ಲಿ ಮಳೆಯಿಂದಾಗಿ ಸಂಭವಿಸುತ್ತಿರುವಂತಹ ಹಾನಿಗಳಿಗೆ ಶೀಘ್ರ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ವೀಡಿಯೋ ಕಾನ್ಪೆರೆನ್ಸ್ ಸಭಾಂಗಣದಲ್ಲಿ ನಡೆದ ಮುಂಗಾರು ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿರಾ ತಾಲೂಕಿನಲ್ಲಿ ಸಿಡಿಲಿನ ಹೊಡೆತಕ್ಕೆ ಇಬ್ಬರು ವ್ಯಕ್ತಿಗಳು ಬಲಿಯಾಗಿದ್ದು, ಅವರ ಕುಟುಂಬಕ್ಕೆ ತಕ್ಷಣವೇ ಪರಿಹಾರ ಹಣ ನೀಡಬೇಕು ಎಂದು ಸೂಚಿಸಿದರಲ್ಲದೆ ಪ್ರಸಕ್ತ ವರ್ಷದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವುದರಿಂದ ಮಳೆ ಬಂದ ಸಂದರ್ಭದಲ್ಲಿ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಿ ಅವುಗಳ ನಿರ್ವಹಣೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಮಳೆಯಿಂದಾಗುವ ಹಾನಿ ಮತ್ತು ಪ್ರವಾಹದ ಸ್ಥಿತಿ ಎದುರಾದ ಸಂದರ್ಭದಲ್ಲಿ ಅವುಗಳ ನಿರ್ವಹಣೆಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಎಲ್ಲಾ ತಹಶೀಲ್ದಾರ್ ಗಳಿಗೂ ಸಮಗ್ರ ಯೋಜನಾ ವರದಿ ಸಲ್ಲಿಸುವಂತೆ ಸೂಚಿಸಿದರು.
ಬರ ನಿರ್ವಹಣೆಗಾಗಿ ಜಿಲ್ಲೆಯಲ್ಲಿ ತೆರೆಯಲಾಗಿದ್ದ 21 ಮೇವು ಬ್ಯಾಂಕುಗಳಲ್ಲಿ ಸಂಪೂರ್ಣವಾಗಿ ಮೇವಿನ ಬೇಡಿಕೆ ಕಡಿಮೆಯಾಗಿರುವುದರಿಂದ ಮೇವು ಬ್ಯಾಂಕುಗಳಿಗೆ ಸಂಬಂಧಿಸಿದ ಹಣ ಪಾವತಿಗಾಗಿ ಎರಡು ಮೂರು ದಿನದೊಳಗಾಗಿ ಬಿಲ್ಲುಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಸಲ್ಲಿಸುವಂತೆ ತಿಳಿಸಿದರು.
ಈಗಾಗಲೇ ಜಿಲ್ಲೆಯ ಕುಡಿಯುವ ನೀರಿನ ಮೂಲಗಳ ಪರೀಕ್ಷೆ ನಡೆಸಲಾಗಿದ್ದು, ಕುಡಿಯುವ ನೀರಿನ ಪರೀಕ್ಷೆಯಲ್ಲಿ ನೀರಿನ ಅಶುದ್ಧತೆ ಬಗ್ಗೆ ವರದಿ ಬಂದಿರುವ ಬೋರ್ ವೆಲ್ ಗಳಿಂದ ಪೂರೈಕೆ ಮಾಡಲಾಗುತ್ತಿರುವ ನೀರನ್ನು ತಕ್ಷಣವೇ ಸಾರ್ವಜನಿಕರಿಗೆ ನೀಡದಂತೆ ಸ್ಥಗಿತಗೊಳಿಸುವಂತೆ ಸೂಚಿಸಿದರಲ್ಲದೆ, ಪರ್ಯಾಯವಾಗಿ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು ತಿಪಟೂರು ತಾಲೂಕಿನ ಈಚನೂರು ಕೆರೆಗೆ ಸೇರುತ್ತಿದ್ದಂತಹ ಮಲೀನಯುಕ್ತ ನೀರನ್ನು ಬೇರೆ ಕಡೆ ಹರಿಯುವಂತೆ ಮಾಡಿರುವ ಬಗ್ಗೆ ಮಾಹಿತಿ ಪಡೆದು ಯಾವುದೇ ಕೆರೆಗಳಿಗೆ ಕಲುಷಿತ ನೀರು ಸೇರಿದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಜಿಲ್ಲೆಯಾದ್ಯಂತ 94 ಖಾಸಗಿ ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಮಳೆಯಿಂದ ಕೊಳವೆಬಾವಿಗಳಿಗೆ ಜಲ ಮರುಪೂರಣವಾಗಿ ಅಂತರ್ಜಲ ಮಟ್ಟ ಹೆಚ್ಚುತ್ತಿದೆ, ಈ ಬಗ್ಗೆ ಮರು ಪರಿಶೀಲನೆ ನಡೆಸಿ ಖಾಸಗಿ ಕೊಳವೆಬಾವಿಗಳ ಸಂಖ್ಯೆಯನ್ನು ಕಡಿಮೆ ಮಾಡಿ, ಅವುಗಳ ಹಣ ಪಾವತಿಯನ್ನು ಜೂನ್ 15 ರೊಳಗಾಗಿ ಪೂರ್ಣ ಗೊಳಿಸುವಂತೆ ತಿಳಿಸಿದರು.
ವಸತಿ ನಿಲಯಗಳ ಭೇಟಿ ನೀಡುವಂತೆ ಸೂಚನೆ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ನಗರದ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸಂಭವಿಸಿದ ಬೆಂಕಿ ಅವಘಡ ಮರುಕಳಿಸದಂತೆ ಎಲ್ಲಾ ವಿದ್ಯಾರ್ಥಿ ನಿಲಯಗಳಿಗೆ ಬೆಸ್ಕಾಂ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ವಿದ್ಯುತ್ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಶಾರದಮ್ಮ, ಜಿಲ್ಲೆಯ ಎಲ್ಲಾ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
Comments are closed.