ಜೂನ್ 14 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2

ಅಕ್ರಮ ತಡೆಗೆ ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ: ಡೀಸಿ

16

Get real time updates directly on you device, subscribe now.


ತುಮಕೂರು: ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಜೂನ್ 14 ರಿಂದ 22ರ ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ- 2 ನಡೆಯಲಿದ್ದು, ಪರೀಕ್ಷಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಎಲ್ಲಾ ಕೊಠಡಿಗಳಿಗೂ ಸಿಸಿ ಕ್ಯಾಮೆರಾ ಅಳವಡಿಸಿ ಜಿಲ್ಲಾ ಹಾಗೂ ತಾಲುಕು ಮಟ್ಟದಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆ-1ನ್ನು ನಡೆಸಿದ ರೀತಿಯಲ್ಲಿಯೇ ಈ ಪರೀಕ್ಷೆ ಸಹ ಪಾರದರ್ಶಕವಾಗಿ ನಡೆಸಬೇಕು ಎಂದು ಸೂಚಿಸಿದರಲ್ಲದೆ ಪರೀಕ್ಷಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸಿಸಿ ಕ್ಯಾಮೆರಾ ಅಳವಡಿಕೆಯಿಂದ ಯಾವುದೇ ಆತಂಕ ಪಡುವುದು ಬೇಡ, ಧೈರ್ಯವಾಗಿ ಪರೀಕ್ಷೆ ಬರೆಯುವಂತೆ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಬೇಕೆಂದು ನಿರ್ದೇಶನ ನೀಡಿದರು.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ದೃಷ್ಟಿಯಲ್ಲಿ ಕಟ್ಟುನಿಟ್ಟಿನ ಪರೀಕ್ಷೆ ಅತ್ಯಗತ್ಯ, ಉನ್ನತ ವ್ಯಾಸಂಗಕ್ಕಾಗಿ ನಡೆಯುವ ಎಲ್ಲಾ ಪ್ರವೇಶ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳು ಸಿಸಿ ಟಿವಿ ಕಣ್ಗಾವಲಿನಲ್ಲಿಯೇ ನಡೆಯುವುದರಿಂದ ಸಿಸಿ ಕ್ಯಾಮೆರಾ ಅಳವಡಿಕೆಯು ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗಳ ಪರೀಕ್ಷೆ ಎದುರಿಸಲು ಸಹಕಾರವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಬೇಕು ಎಂದು ನಿರ್ದೇಶನ ನೀಡಿದರು.
ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 14 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 17 ಸೇರಿದಂತೆ ಒಟ್ಟು 31 ಕೇಂದ್ರಗಳಲ್ಲಿ ಜೂನ್ 14 ರಿಂದ 22ರ ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ- 2 ನಡೆಯಲಿದ್ದು, ಪರೀಕ್ಷಾ ಅಕ್ರಮ ತಡೆಗಟ್ಟಲು ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಮುಖ್ಯ ಅಧಿಕ್ಷಕರು, ಕಸ್ಟೋಡಿಯನ್, ಜಾಗೃತ ದಳ, ಮೊಬೈಲ್ ಸ್ವಾಧೀನಾಧಿಕಾರಿಗಳು, ಪೊಲೀಸ್ ಎಸ್ಕಾರ್ಟ್, ಕೊಠಡಿ ಮೇಲ್ವಿಚಾರಕರು ಹಾಗೂ ಡಿ ದರ್ಜೆ ನೌಕರರನ್ನು ನಿಯೋಜಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಸೌಲಭ್ಯ, ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಪ್ರತಿ ವಿದ್ಯಾರ್ಥಿಗೂ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಬೇಕು, ಪೊಲೀಸ್ ರಕ್ಷಣೆಯೊಂದಿಗೆ ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳ ಬಂಡಲ್ ಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಬೇಕು ಎಂದು ನಿರ್ದೇಶಿಸಿದರು.
ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುವಾಗುವಂತೆ ಕೊಠಡಿಗಳಲ್ಲಿ ಉತ್ತಮ ಗಾಳಿ, ಬೆಳಕಿನ ವ್ಯವಸ್ಥೆ ಇರಬೇಕು, ಯಾವುದೇ ಗೊಂದಲ, ಭಯ ಉಂಟಾಗದಂತೆ ಪರೀಕ್ಷಾ ಆತಂಕ ದೂರ ಮಾಡಬೇಕು, ಯಾವುದೇ ಲೋಪ ದೋಷವಿಲ್ಲದೆ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಬೇಕು ಎಂದು ಸೂಚನೆ ನೀಡಿದರು.

ಶಾಲಾ ಶಿಕ್ಷಣ ಇಲಾಖೆ ತುಮಕೂರು ಶೈಕ್ಷಣಿಕ ಜಿಲ್ಲೆಯ ಶಿಕ್ಷಣ ಅಧಿಕಾರಿ ಮಾಧವರೆಡ್ಡಿ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್ ಅವರು ಸಭೆಗೆ ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ- 2ಕ್ಕೆ 739 ವಿದ್ಯಾರ್ಥಿಗಳು ಫಲಿತಾಂಶ ಉತ್ತಮ ಗೊಳಿಸಲು, 9219 ಪುನರಾವರ್ತಿತ ಹಾಗೂ 252 ಖಾಸಗಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 10210 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯದೊಳಗಾಗಿ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲು 15 ಮಾರ್ಗ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಜಿಲ್ಲಾ ಖಜಾನಾಧಿಕಾರಿ ಉಮಾ, ಮಧುಗಿರಿ ಶಿಕ್ಷಣಾಧಿಕಾರಿ ಎನ್.ಶಾಂತಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!