ಕಲುಷಿತ ನೀರು ಸೇವಿಸಿ ವಾಂತಿ ಭೇದಿ

ರೋಗಿಗಳು ಗುಣಮುಖ ಆಗುವವರೆಗೆ ಚಿಕಿತ್ಸೆ ನೀಡಿ: ಪರಂ

19

Get real time updates directly on you device, subscribe now.


ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕು ಮಿಡಿಗೇಶಿ ಹೋಬಳಿ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ- ಭೇದಿಯಿಂದ ಅಸ್ವಸ್ಥರಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ರೋಗಿಗಳು ಸಂಪೂರ್ಣ ಗುಣಮುಖರಾಗುವ ವರೆಗೆ ಉತ್ತಮ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿನ್ನೇನಹಳ್ಳಿ ಗ್ರಾಮದ ಜನರು ಕಲುಷಿತ ನೀರು ಕುಡಿದು ವಾಂತಿ- ಭೇದಿಯಿಂದ ಅಸ್ವಸ್ಥರಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಭೇಟಿ ಮಾಡಿ ಅವರ ಆರೋಗ್ಯ ಸ್ಥಿತಿ ವಿಚಾರಿಸಿ ಧೈರ್ಯ ಹೇಳಿದರಲ್ಲದೆ ರೋಗಿಗಳ ಕುಟುಂಬದವರಿಂದಲೂ ಮಾಹಿತಿ ಪಡೆದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ವಾಂತಿ-ಭೇದಿ ಪ್ರಕರಣದ ಬಗ್ಗೆ ಮಾಹಿತಿ ಹಂಚಿಕೊಂಡು ಮಾತನಾಡಿ, ಚಿನ್ನೇನಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ಕಲುಷಿತ ನೀರು ಸೇವಿಸಿ ಸುಮಾರು 100ಕ್ಕೂ ಹೆಚ್ಚು ಜನರಲ್ಲಿ ವಾಂತಿ- ಭೇದಿ ಕಾಣಿಸಿಕೊಂಡ ಕಾರಣ ಕೆಲವರು ಮಧುಗಿರಿ, ಕೊರಟಗೆರೆ, ತುಮಕೂರಿನ ಖಾಸಗಿ ಆಸ್ಪತ್ರೆ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ವಿಷಯ ತಿಳಿದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಅಸ್ವಸ್ಥರಾಗಿದ್ದವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಂಡಿದ್ದಾರೆ.
ವಾಂತಿ- ಭೇದಿಯಿಂದ ಜಿಲ್ಲಾಸ್ಪತ್ರೆಗೆ ದಾಖಲಾದವರ ಪೈಕಿ 76 ವರ್ಷದ ಚಿಕ್ಕದಾಸಪ್ಪ ಹಾಗೂ 72 ವರ್ಷದ ಪೆದ್ದಣ್ಣ ಎಂಬುವರು ಮೃತಪಟ್ಟಿದ್ದಾರೆ, ಇವರಿಬ್ಬರೂ ವಯೋವೃದ್ಧರಾದ ಕಾರಣ ರೋಗದ ತೀವ್ರತೆ ತಡೆಯಲಾರದೆ ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಗ್ರಾಮದ ಓವರ್ ಹೆಡ್ ಟ್ಯಾಂಕ್ ನಿಂದ ಪೂರೈಕೆಯಾದ ಕಲುಷಿತ ನೀರಿನಿಂದಲೇ ಈ ಅವಘಡ ಸಂಭವಿಸಿದೆ, ಓವರ್ ಹೆಡ್ ಟ್ಯಾಂಕ್ ನೀರು ಹಾಗೂ ಆರ್ ಓ ಪ್ಲಾಂಟ್ ನೀರನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಿದ್ದು, ಓವರ್ ಹೆಡ್ ಟ್ಯಾಂಕ್ ನೀರು ಕುಡಿಯಲು ಯೋಗ್ಯವಿಲ್ಲವೆಂದು ವರದಿ ಬಂದಿದೆ, ಕಲುಷಿತ ನೀರು ಪೂರೈಕೆ ಮಾಡುವಲ್ಲಿ ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೆ ಕರ್ತವ್ಯ ನಿರ್ಲಕ್ಷತೆ ತೋರಿರುವ ಸ್ಥಳೀಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ನೀರು ಗಂಟಿಯನ್ನು ಅಮಾನತು ಮಾಡಲಾಗಿದೆ, ಅಲ್ಲದೆ ಗ್ರಾಮದ ಓವರ್ ಹೆಡ್ ಟ್ಯಾಂಕ್ ನ ನೀರು ಕುಡಿಯಲು ಬಳಸದಂತೆ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

ಕಲುಷಿತ ನೀರಿನಿಂದ ಚಿನ್ನೇನಹಳ್ಳಿ ವಾಂತಿ-ಭೇದಿ ಪ್ರಕರಣ ಜಿಲ್ಲೆಯಲ್ಲಿ ಮತ್ತೊಮ್ಮೆ ಮರುಕಳಿಸದಂತೆ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿಗಾ ವಹಿಸಬೇಕು, ವಿವಿಧ ಇಲಾಖೆಗಳು ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳುವಾಗ ಎಚ್ಚರಿಕೆ ವಹಿಸಬೇಕು, ಸಾರ್ವಜನಿಕರಿಗೆ ಸರಬರಾಜು ಮಾಡುವ ಓವರ್ ಹೆಡ್ ಟ್ಯಾಂಕುಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು ಹಾಗೂ ಆರ್ ಓ ಪ್ಲಾಂಟ್ ಗಳ ಕಾರ್ಯ
ನಿರ್ವಹಣೆ ಬಗ್ಗೆ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಶಸ್ತ್ರಚಿಕಿತ್ಸಕ ಅಸ್ಗರ್ ಬೇಗ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!