ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಆಕ್ರೋಶ

ಜಟಕಾ ಗಾಡಿಗೆ ದ್ವಿಚಕ್ರ ವಾಹನ ಕಟ್ಟಿ ಬಿಜೆಪಿ ಪ್ರತಿಭಟನೆ

20

Get real time updates directly on you device, subscribe now.


ತುಮಕೂರು: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಸೋಮವಾರ ಜಿಲ್ಲಾ ಬಿಜೆಪಿ ಮುಖಂಡರು ಜಟಕಾ ಗಾಡಿಗೆ ದ್ವಿಚಕ್ರ ವಾಹನ ಕಟ್ಟಿ, ಸೈಕಲ್ ಸವಾರಿ ಮಾಡಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಭದ್ರಮ್ಮ ವೃತ್ತದ ಜಿಲ್ಲಾ ಬಿಜೆಪಿ ಕಚೇರಿಯಿಂದ ಬಿಜಿಎಸ್ ವೃತ್ತದ ವರೆಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ ಅವರು ಸೈಕಲ್ ಸವಾರಿ ಮಾಡಿದರೆ, ಕೆಲವು ಮುಖಂಡರು ಜಟಕಾ ಗಾಡಿಯಲ್ಲಿ ಕುಳಿತು, ಜಟಕಾಗೆ ಬೈಕ್ ಗಳನ್ನು ಕಟ್ಟಿಕೊಂಡು, ಕೆಲವರು ಪಾದಯಾತ್ರೆ ನಡೆಸಿ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದರು.
ಬಿಜಿಎಸ್ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು, ಈ ವೇಳೆ ಮಾತನಾಡಿದ ಶಾಸಕ ಬಿ.ಬಿ.ಜ್ಯೋತಿಗಣೇಶ್, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲೂ ಸಂಪೂರ್ಣ ವಿಫಲವಾಗಿದೆ, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ರಾಜ್ಯದ ಜನರಿಗೆ ಮಕ್ಮಲ್ ಟೋಪಿ ಹಾಕುತ್ತಿದೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ದಿನಬಳಕೆ ಪದಾರ್ಥಗಳ ಬೆಲೆ, ಬಸ್, ಆಟೋಗಳ ಪ್ರಯಾಣ ದರ ಹೆಚ್ಚಾಗಿ ಜನ ಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗುತ್ತದೆ ಎಂದರು.

ಕಾಂಗ್ರೆಸ್ ಸರ್ಕಾರದಲ್ಲಿ ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ, ಒಂದು ಅಡಿ ರಸ್ತೆ ಮಾಡಲೂ ಅನುದಾನವಿಲ್ಲ, ನಮ್ಮ ಬಿಜೆಪಿ ಸರ್ಕಾರದಲ್ಲಿ ನೀಡಿದ್ದ ಹಣದಲ್ಲಿ ರಸ್ತೆ ಗುಂಡಿಗಳಿಗೆ ತೇಪೆ ಹಾಕುವಂತಹ ಪರಿಸ್ಥಿತಿ ಬಂದಿದೆ, ತಮ್ಮ ವೈಫಲ್ಯ ಮರೆಮಾಚಲು ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಚಪಲ ಬೆಳೆಸಿಕೊಂಡಿದ್ದಾರೆ ಎಂದು ಟೀಕಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಮಾತನಾಡಿ, ಇದು ಕೇವಲ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾತ್ರವಿಲ್ಲ, ಈ ಏರಿಕೆಯಿಂದ ಎಲ್ಲಾ ಪದಾರ್ಥಗಳ ಬೆಚ್ಚಳವಾಗುತ್ತದೆ, ಸಂಕಷ್ಟದಲ್ಲಿರುವ ಜನ ಸಾಮಾನ್ಯರ ಮೇಲೆ ಸರ್ಕಾರ ಮತ್ತಷ್ಟು ಹೊರೆ ಹೊರಿಸಿ ಗಾಯದ ಮೇಲೆ ಬರೆ ಎಳೆಯುತ್ತಿದೆ ಎಂದರು.

ರಾಜ್ಯ ರೈತ ಮೋರ್ಚಾ ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಕ್ಕೆ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಜನರ ಮೇಲೆ ಹಗೆ ತೀರಿಸಿಕೊಳ್ಳುವ ಹೀನಕೃತ್ಯಕ್ಕೆ ಇಳಿದಿದೆ ಎಂದು ಆರೋಪಿಸಿದರು.

ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ರಾಜ್ಯ ಬಿಜೆಪಿ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಿ.ಹೆಚ್.ಸಿದ್ದರಾಮಯ್ಯ ಜಿ.ಅರಿವೇಸಂದ್ರ, ನಗರ ಬಿಜೆಪಿ ಅಧ್ಯಕ್ಷ ಹನುಮಂತರಾಜು, ಜಿಲ್ಲಾ ಉಪಾಧ್ಯಕ್ಷ ರವೀಶಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಗೌಡ, ಗಂಗರಾಜು, ಹಾಲೇಗೌಡ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನವಚೇತನ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!