ಮಕ್ಕಳ ಮನೋವಿಕಾಸ ಬೆಳವಣಿಗೆಗೆ ಶ್ರಮಿಸಿ

39

Get real time updates directly on you device, subscribe now.


ತುಮಕೂರು: ಮಕ್ಕಳು ಅವಕಾಶ ವಂಚಿತರಾಗದಂತೆ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ಅರ್ಹ ಮಕ್ಕಳಿಗೆ ನೀಡುವ ಮೂಲಕ ಮಕ್ಕಳ ಮನೋವಿಕಾಸ ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಟಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಿಷನ್ ವಾತ್ಸಲ್ಯ ಯೋಜನೆ, ಜಿಲ್ಲಾ ಮಟ್ಟದ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಶಾಲೆ ಬಿಡುತ್ತಿರುವ ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಮಕ್ಕಳು ಶಾಲೆ ಬಿಡಲು ಸೂಕ್ತ ಕಾರಣವೇನೆಂಬುದು ಪರಿಶೀಲಿಸಿ ಅವುಗಳಿಗೆ ಪರಿಹಾರ ಕಂಡು ಹಿಡಿಯುವಂತೆ ಸೂಚಿಸಿದರು.
ಯಾವುದೇ ಕಾರಣಕ್ಕೂ ಶಾಲೆಗಳಲ್ಲಿ ಮಕ್ಕಳಿಂದ ಊಟ ಬಡಿಸಬಾರದು, ಮಕ್ಕಳಿಗೆ ಕೂರಿಸಿ ಊಟ ಬಡಿಸಬೇಕು, ಓದುವುದರಲ್ಲಿ ಹಿಂದೆ ಉಳಿದ ಮಕ್ಕಳ ಬಗ್ಗೆ ಹೆಚ್ಚು ಗಮನವಹಿಸಿ ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಹೊಂದುವಂತೆ ಮಾಡಬೇಕು, ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಸ್ಥಾಪನೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಮಕ್ಕಳ ಹಕ್ಕುಗಳ ಸಹಾಯವಾಣಿ ಮತ್ತು ಮಕ್ಕಳ ಹಕ್ಕುಗಳ ಸೂಚನಾ ಫಲಕಗಳನ್ನು ಅಳವಡಿಸಬೇಕು, ಶಾಲೆಯಿಂದ ದೂರವಿರುವ ಪೊಲೀಸ್ ಠಾಣೆಯ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಶಾಲಾ ಮಕ್ಕಳಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕೆಂದು ತಿಳಿಸಿದರು.

ಜಿಲ್ಲೆಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಗರ್ಭಿಣಿಯರಾಗಿರುವ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್ ಅವರಿಂದ ಮಾಹಿತಿ ಪಡೆದ ಅವರು ಬೇಸರ ವ್ಯಕ್ತ ಪಡಿಸಿ ಸಾರ್ವಜನಿಕರಲ್ಲಿ ಈ ಬಗ್ಗೆ ಹೆಚ್ಚು ಅರಿವು ಮೂಡಿಸುವುದರ ಜೊತೆಗೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡಾಗ ಮಾತ್ರ ಇಂಥಹ ಪ್ರಕರಣ ಕಡಿಮೆಯಾಗಲಿವೆ ಎಂದು ತಿಳಿಸಿದರಲ್ಲದೆ, ಜಿಲ್ಲೆಯ ಭ್ರೂಣ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದು ಭ್ರೂಣ ಹತ್ಯೆ ನಡೆಸುತ್ತಿರುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿನೇಶ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 257 ಪ್ರಕರಣ ದಾಖಲಾಗಿದ್ದು, ಇಲ್ಲಿಯವರೆಗೆ 51 ಪ್ರಕರಣ ಇತ್ಯರ್ಥವಾಗಿವೆ, 206 ಪ್ರಕರಣ ಬಾಕಿ ಉಳಿದುಕೊಂಡಿವೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಅಬ್ದುಲ್ ಖಾದರ್ ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!