ಸ್ಥಳೀಯವಾಗಿಯೇ ಸಮಸ್ಯೆ ಬಗೆಹರಿಸಿ: ಡೀಸಿ

ಸಮಸ್ಯೆ ಹೊತ್ತು ಜಿಲ್ಲಾ ಕೇಂದ್ರಕ್ಕೆ ಯಾರು ಬರಬಾರದು

37

Get real time updates directly on you device, subscribe now.


ಕೊರಟಗೆರೆ: ಜನ ಸಾಮಾನ್ಯರು ಸ್ಥಳೀಯ ಮಟ್ಟದಲ್ಲಿ ಬಗೆಹರಿಯದ ತಮ್ಮ ಸಮಸ್ಯೆ ಹೊತ್ತು ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಹಾಗೂ ಶೀಘ್ರಗತಿಯಲ್ಲಿ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಪ್ರತೀ ತಿಂಗಳು ಜನಸ್ಪಂದನ ಕಾರ್ಯಕ್ರಮ ಏರ್ಪಡಿಸಲಾಗುತ್ತಿದ್ದು, ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು.

ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲಾಡಳಿತದಿಂದ ಜನರಿದ್ದೆಡೆಯೇ ಸೇವೆ ಒದಗಿಸುವ ಸರ್ಕಾರದ ಮಹದಾಸೆಯಂತೆ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುತ್ತಿದೆ, ಜಿಲ್ಲೆ, ರಾಜ್ಯ ಮಟ್ಟದ ಸಮಸ್ಯೆಗಳಿದ್ದರೆ ಕಾಲಮಿತಿಯೊಳಗೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ಇತ್ತೀಚೆಗಷ್ಟೇ ಪಾವಗಡ, ಗುಬ್ಬಿ ತಾಲ್ಲೂಕಿನಲ್ಲಿ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಬೆಳೆ ಸಮೀಕ್ಷೆಗೆ ಸಂಬಂಧಿಸಿದಂತೆ ಹೆಚ್ಚಿನ ಅಹವಾಲು ಸ್ವೀಕೃತವಾಗಿವೆ, ಪ್ರತಿ ಗ್ರಾಮ ಪಂಚಾಯತಿಯಲ್ಲಿ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳುವ ಬಗ್ಗೆ ರೈತರಿಗೆ 2 ರಿಂದ 3 ಸುತ್ತಿನ ತರಬೇತಿ ನೀಡಬೇಕು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಬೆಳೆ ವಿಮೆಗೆ ನೋಂದಣಿ ಮಾಡಬೇಕೆಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಮಧುಗಿರಿ ತಾಲ್ಲೂಕು ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರಿನ ಸೇವನೆಯಿಂದ ಘಟಿಸಿದ ವಾಂತಿ, ಭೇದಿ ಪ್ರಕರಣ ನಮಗೆ ಎಚ್ಚರಿಕೆ ಪಾಠವಾಗಿದೆ, ಕುಡಿಯುವ ನೀರಿನ ಬಗ್ಗೆ ಸಂಶಯ ಬಂದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಸ್ಥಳೀಯರಲ್ಲಿ ಮನವಿ ಮಾಡಿದ ಅವರು ಯೋಗ್ಯವಲ್ಲದ ನೀರನ್ನು ಜನರಿಗೆ ಕುಡಿಯಲು ಪೂರೈಕೆ ಮಾಡಬಾರದು ಎಂದು ಅಧಿಕಾರಿಗಳು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ತಹಶೀಲ್ದಾರ್ ಕೆ.ಮಂಜುನಾಥ್, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಅಪೂರ್ವ ಸಿ. ಅನಂತರಾಮು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!