ತುಮಕೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಗುರುವಾರ ನಗರದ ಸ್ವಾತಂತ್ರ್ಯ ಚೌಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ರಸ್ತೆ ತಡೆದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದ ಅಶೋಕ ರಸ್ತೆಯಲ್ಲಿ ಕೆಲ ಕಾಲ ಸಂಚಾರ ಸ್ಥಗಿತಗೊಂಡಿತ್ತು, ರಸ್ತೆ ತಡೆ ಕೈಬಿಡುವಂತೆ ಕೇಳಿಕೊಂಡಾಗ ಪ್ರತಿಭಟನಾಕಾರರು ಒಪ್ಪದ ಕಾರಣ ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದು ವ್ಯಾನ್ ಗಳಲ್ಲಿ ಕೂರಿಸಿಕೊಂಡು ಕರೆದೊಯ್ದರು.
ಪ್ರತಿಭಟನೆ ವೇಳೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಜನ ವಿರೋಧಿ, ರೈತ ವಿರೋಧಿ ಸರ್ಕಾರ, ಬೆಲೆ ಏರಿಕೆ ಮಾಡಿ ಜನರಿಗೆ ಎಲ್ಲಾ ರೀತಿಯಲ್ಲೂ ಬರೆ ಎಳೆಯುವ ಕೆಲಸ ಮಾಡುತ್ತಿದೆ, ಪರಿಶಿಷ್ಟ ಜಾತಿ, ವರ್ಗ ಅಭಿವೃದ್ಧಿಗೆ ಬಳಸಬೇಕಾದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಿಸಿಕೊಂಡಿದೆ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ನಡೆದಿದೆ ಎಂದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸಾಮಾನ್ಯ ಜನರಿಗೆ ಹೊರೆಯಾಗಿದೆ, ತೈಲ ಬೆಲೆ ಏರಿಕೆಯಿಂದ ಇತರೆ ಪದಾರ್ಥಗಳ ಬೆಲೆಯೂ ಏರಿಕೆಯಾಗಿ ಎಲ್ಲಾ ಕ್ಷೇತ್ರಗಳಿಗೂ ಪರಿಣಾಮ ಬೀರಲಿದೆ, ಕೆ ಎಸ್ ಆರ್ ಟಿ ಸಿ ಪ್ರಯಾಣ ದರ ಏರಿಸುವ ಸುಳಿವನ್ನು ಸಚಿವರು ನೀಡಿದ್ದಾರೆ, ನೀರಿನ ದರ ಹೆಚ್ಚಿಸುವ ಪ್ರಯತ್ನ ನಡೆದಿದೆ, ಈಗಾಲೇ ಹೆಚ್ಚಾಗಿರುವ ಹಾಲಿನ ದರ ಮತ್ತಷ್ಟು ಹೆಚ್ಚು ಮಾಡಬಹುದು, ಜೆಲ್ಲಿ, ಮರಳಿನಿಂದ ಎಲ್ಲಾ ಪದಾರ್ಥಗಳ ಬೆಲೆ ಹೆಚ್ಚಾಗಿ ಜನಸಾಮಾನ್ಯರ ಮೇಲೆ ತೀವ್ರ ಪರಿಣಾಮ ಬೀರಲಿದೆ, ಸರ್ಕಾರ ಬಿಟ್ಟಿ ಭಾಗ್ಯಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಮಾಡಿ ಜನರು ವಿಷ ಕುಡಿಯುವ ಭಾಗ್ಯ ನೀಡಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಶಾಸಕ ಜ್ಯೋತಿಗಣೇಶ್, ರಾಜ್ಯ ಸರ್ಕಾರ ತನ್ನ ಕೆಟ್ಟ ನಿರ್ಧಾರಗಳನ್ನು ವಾಪಸ್ ಪಡೆದು ಜನಪರ ಕಾರ್ಯಕ್ರಮ ಕೊಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಅಭಿವೃದ್ಧಿ ಕಾರ್ಯ ಮರೆತು ಬೆಲೆ ಏರಿಕೆ ನಿರ್ಧಾರಗಳನ್ನು ಮಾಡುತ್ತಿರುವ ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ, ರಾಜ್ಯ ಸರ್ಕಾರದ ಬೆಲೆ ಏರಿಕೆ ನಿರ್ಧಾಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ರಾಜ್ಯಾದ್ಯಂತ ಹೋರಾಟ ನಡೆಸಿವೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ವಿಧಾನಸಭಾ ಕ್ಷೇತ್ರವಾರು ಎರಡೂ ಪಕ್ಷಗಳಿಂದ ರಸ್ತೆ ತಡೆದು ಹೋರಾಟ ಮಾಡಲಾಗುತ್ತಿದೆ ಎಂದರು.
ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್, ಮುಖಂಡ ದೊಡ್ಡಮನೆ ಗೋಪಾಲಗೌಡ, ಜೆಡಿಎಸ್ ಮುಖಂಡ ಶ್ರೀನಿವಾಸ್ಪ್ರಸಾದ್, ಜಿಲ್ಲಾ ಜೆಡಿಎಸ್ ಕಾಯಾಧ್ಯಕ್ಷ ಟಿ.ಆರ್.ನಾಗರಾಜು, ಬಿಜೆಪಿ ನಗರ ಅಧ್ಯಕ್ಷ ಹನುಮಂತರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಗೌಡ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನವಚೇತನ್ ಇತರರು ಹಾಜರಿದ್ದರು.
Comments are closed.