ಮಧುಗಿರಿ ತಾಲ್ಲೂಕಲ್ಲಿ ಮತ್ತೊಂದು ಸೋಲಾರ್ ಪಾರ್ಕ್: ಜಾರ್ಜ್

28

Get real time updates directly on you device, subscribe now.


ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ರಾಜ್ಯದ ಮೊದಲ ಅತೀ ದೊಡ್ಡ ಸೋಲಾರ್ ಪಾರ್ಕ್ ನಿರ್ಮಾಣ ಮಾಡುವ ಮೂಲಕ ವಿದ್ಯುತ್ ಉತ್ಪಾದನೆಯಲ್ಲಿ ವಿಶ್ವದ ಗಮನ ಸೆಳೆಯಲಾಗಿತ್ತು, ಅದೇ ರೀತಿಯಾಗಿ ಜಿಲ್ಲೆಯಲ್ಲಿ ಮತ್ತೊಂದು ಸೋಲಾರ್ ಪಾರ್ಕ್ನ್ನು ಮಧುಗಿರಿ ತಾಲ್ಲೂಕಿನಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಧಾನ ಮಂತ್ರಿ ಕುಸುಮ್- ಸಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಸ್ಥಳೀಯವಾಗಿ ವಿದ್ಯುತ್ ಉತ್ಪಾದನೆ ಮಾಡಿ ಸ್ಥಳೀಯವಾಗಿ ವಿದ್ಯುತ್ ವಿತರಣೆ ಮಾಡುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ, ಪ್ರಧಾನ ಮಂತ್ರಿ ಕುಸುಮ್ -ಸಿ ಯೋಜನೆಯಡಿ ಜಿಲ್ಲೆಯಲ್ಲಿ 27 ಉಪ ಸ್ಥಾವರ ಸ್ಥಾಪಿಸಲಾಗುತ್ತದೆ, ಇದರಿಂದ 239 ಮೆಗಾ ವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಯೋಜನೆ ಅನುಷ್ಠಾನಗೊಳಿಸಲು 1195 ಎಕರೆ ಭೂಮಿ ಅಗತ್ಯತೆ ಇದ್ದು, ಸರ್ಕಾರಿ ಮತ್ತು ಖಾಸಗಿ ಭೂಮಿಯಲ್ಲೂ ಯೋಜನೆ ಅನುಷ್ಠಾನಗೊಳಿಸಲಾಗುವುದು, ಈಗಾಗಲೇ ಸರ್ಕಾರಿ ಜಾಗಗಳನ್ನು ಗುರುತಿಸಿ ಸರ್ವೇ ಕಾರ್ಯ ಮಾಡಲಾಗುತ್ತಿದ್ದು, ಬಾಡಿಗೆ ಆಧಾರದಲ್ಲಿ ಖಾಸಗಿ ಭೂಮಿ ಮಾಲೀಕರಿಂದ ಭೂಮಿ ಪಡೆಯಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಮಾತನಾಡಿ, ಜಿಲ್ಲೆಯ ಎಲ್ಲಾ ವಿದ್ಯುತ್ ಉಪ ಸ್ಥಾವರಗಳ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಿ, ಜಿಲ್ಲೆಯ ದೊಡ್ಡ ಅಗ್ರಹಾರ, ಮದಲೂರು, ಬರಗೂರು, ತಾಳಗುಂದ ಗ್ರಾಮಗಳಲ್ಲಿ ಹೊಸದಾಗಿ ನಿರ್ಮಾಣ ಮಾಡುತ್ತಿರುವ ಉಪಸ್ಥಾವರ ಕಾಮಗಾರಿಯನ್ನು ಜುಲೈ ಮಾಹೆಯ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ, ನವದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ತಿಪಟೂರು ಶಾಸಕ ಷಡಕ್ಷರಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿಗಳಾದ ಸಪ್ತಶ್ರೀ, ಗೋಟೂರು ಶಿವಪ್ಪ, ಇಂಧನ ಮತ್ತು ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವಗುಪ್ತ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ್ ಬೀಳಗಿ ಹಾಗೂ ಮುಖ್ಯ ಇಂಜಿನಿಯರ್ ಉಮೇಶ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!