ತುಮಕೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಡೆಂಗ್ಯೂ ರೋಗ ನಿಯಂತ್ರಣದ ಬಗ್ಗೆ ಮನೆ- ಮನೆಗೂ ಭೇಟಿ ನೀಡಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್. ಮಂಜುನಾಥ್ ಅವರಿಗೆ ಸೂಚನೆ ನೀಡಿದರು.
ಬೆಂಗಳೂರಿನ ವಿಕಾಸಸೌಧದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ನಂತರ ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸ್ವ- ಸಹಾಯ ಗುಂಪು, ಸ್ವಯಂ ಸೇವಾ ಸಂಘಗಳನ್ನು ತೊಡಗಿಸಿಕೊಂಡು ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೂ ಭೇಟಿ ನೀಡಿ ಡೆಂಗ್ಯೂ ರೋಗ ಲಕ್ಷಣ ಹಾಗೂ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜನಜಾಗೃತಿ ಮೂಡಿಸಬೇಕೆಂದು ನಿರ್ದೇಶನ ನೀಡಿದರು.
ಡೆಂಗ್ಯೂ ರೋಗದ ಪ್ರಕರಣಗಳ ಸಂಖ್ಯೆ ಆಗಸ್ಟ್- ಸೆಪ್ಟೆಂಬರ್ ಮಾಹೆಯಲ್ಲಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಶಾಲೆಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಜನವಸತಿ ಪ್ರದೇಶಗಳಲ್ಲಿ ವಾರಕ್ಕೆರಡು ಬಾರಿ ಕಡ್ಡಾಯವಾಗಿ ಫಾಗಿಂಗ್ ಮಾಡಬೇಕು ಹಾಗೂ ಪ್ರತಿ ಶುಕ್ರವಾರ ಲಾರ್ವಾ ಸಮೀಕ್ಷೆ ನಡೆಸಬೇಕು, ಡೆಂಗ್ಯೂ ದೃಢಪಟ್ಟ ಪ್ರಕರಣಗಳಲ್ಲಿ ಯಾವುದೇ ಸಾವು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಮನೆ- ಮನೆ ಭೇಟಿ ಸಂದರ್ಭದಲ್ಲಿ ಜ್ವರದ ಲಕ್ಷಣ ಕಂಡು ಬಂದರೆ ವೈದ್ಯರ ಬಳಿ ಚಿಕಿತ್ಸೆ ಪಡೆಯುವ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು, ಡೆಂಗ್ಯೂ ಜ್ವರಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗಳಲ್ಲಿ ರಕ್ತಪರೀಕ್ಷೆಗೆ ರೋಗಿಗಳಿಂದ ಸರ್ಕಾರ ನಿಗದಿಪಡಿಸಿರುವ ದರವನ್ನಷ್ಟೇ ಪಡೆಯಬೇಕು ಎಂದು ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ 52 ಡೆಂಗ್ಯೂ ಪ್ರಕರಣ ವರದಿಯಾಗಿದೆ, ಜಿಲ್ಲೆಯ ಇತರೆ ತಾಲ್ಲೂಕುಗಳಿಗೆ ಹೋಲಿಸಿದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚಿನ ಡೆಂಗ್ಯೂ ಪ್ರಕರಣ ದೃಢಪಟ್ಟಿರುವುದರಿಂದ ಎಲ್ಲಾ ವಾರ್ಡ್ಗಳಲ್ಲಿ ಪ್ರತಿ ದಿನ ಫಾಗಿಂಗ್ ಮಾಡಬೇಕು, ಚರಂಡಿಗಳಲ್ಲಿ ನೀರು ನಿಲ್ಲದಂತೆ ನೈರ್ಮಲ್ಯತೆ ಕಾಪಾಡಬೇಕೆಂದು ಪಾಲಿಕೆ ಆರೋಗ್ಯ ಅಧಿಕಾರಿ ಡಾ.ವೀರೇಶ್ ಕಲ್ಮಟ್ ಅವರಿಗೆ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್. ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ ಡೆಂಗ್ಯೂ ರೋಗದಿಂದ ಯಾವುದೇ ಸಾವು- ನೋವು ಸಂಭವಿಸಿಲ್ಲ, ಡೆಂಗ್ಯೂ ರೋಗ ದೃಢಪಟ್ಟು ಜಿಲ್ಲಾಸ್ಪತ್ರೆಯಲ್ಲಿ 3 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ, ಈವರೆಗೆ 3082 ಶಂಕಿತ ಡೆಂಗ್ಯೂ ರೋಗಿಗಳ ಪೈಕಿ 1542 ರೋಗಿಗಳಿಂದ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದ್ದು, 170 ರೋಗಿಗಳಲ್ಲಿ ಡೆಂಗ್ಯೂ ದೃಢಪಟ್ಟಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ಪಂಚಾಯತಿ ಸಿಇಒ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
Comments are closed.