ವಾರದೊಳಗೆ ಜಾಗೃತಿ ಉಸ್ತುವಾರಿ ಸಭೆ ನಡೆಸಿ

ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಸೂಚನೆ

37

Get real time updates directly on you device, subscribe now.


ತುಮಕೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಕುಂದು ಕೊರತೆಗಳ ಬಗ್ಗೆ ತಾಲೂಕು ಹಂತದಲ್ಲಿಯೇ ಬಗೆಹರಿಸುವ ನಿಟ್ಟಿನಲ್ಲಿ ಇನ್ನೊಂದು ವಾರದೊಳಗಾಗಿ ಜಿಲ್ಲೆಯ ಎಲ್ಲಾ ಉಪ ವಿಭಾಗ ಹಾಗೂ ತಾಲೂಕು ಮಟ್ಟದಲ್ಲಿ ಜಾಗೃತಿ ಉಸ್ತುವಾರಿ ಸಭೆ ನಡೆಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆ ನಡೆಸಿ ಮಾತನಾಡಿ, ಉಪ ವಿಭಾಗ ಹಾಗೂ ತಾಲೂಕು ಮಟ್ಟದಲ್ಲಿ ಕಡ್ಡಾಯವಾಗಿ ಸಭೆ ನಡೆಸಿ ಮುಂದಿನ ಸಭೆಯೊಳಗಾಗಿ ವರದಿ ಸಲ್ಲಿಸಬೇಕು ಎಂದು ಆಯಾ ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ಸಮಿತಿ ಸದಸ್ಯರಾದ ರಂಗಯ್ಯ ಹಾಗೂ ನರಸಿಂಹಮೂರ್ತಿ ಮಾತನಾಡಿ, 2018 ರಿಂದ 2024ರ ಜೂನ್ 30ರ ವರೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ 380 ಪ್ರಕರಣ ಇತ್ಯರ್ಥವಾಗದೆ ಬಾಕಿ ಇದ್ದು, ತ್ವರಿತ ವಿಲೇವಾರಿಗೆ ಮಾನವಿ ಮಾಡಿದಾಗ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಸುಮಾರು 6 ವರ್ಷಗಳಿಂದ ಬಾಕಿ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯಗಳ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ ವಹಿಸಬೇಕು, ಇಂತಹ ಪ್ರಕರಣಗಳನ್ನು ಆದಷ್ಟು ಕಡಿಮೆ ಕಾಲಾವಧಿಯಲ್ಲಿ ಇತ್ಯರ್ಥ ಪಡಿಸಬೇಕು, ವಿಶೇಷ ನ್ಯಾಯಾಲಯಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯಗಳ ಪ್ರಕರಣಗಳನ್ನು ಮಾತ್ರ ಇತ್ಯರ್ಥಪಡಿಸಬೇಕು, ಉಳಿದ ಪ್ರಕರಣಗಳನ್ನು ವಿಶೇಷ ನ್ಯಾಯಗಳಲ್ಲಿ ದಾಖಲಿಸಿಕೊಳ್ಳದಿರಲು ಕ್ರಮ ವಹಿಸಬೇಕೆಂದು ಸರ್ಕಾರಿ ಅಭಿಯೋಜಕ ಡಿ.ಎಸ್. ಜ್ಯೋತಿ ಅವರಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಮಂಜೂರಾಗಿರುವ ಸ್ಮಶಾನ ಭೂಮಿಗಳನ್ನು ಗುರುತಿಸಿ ಖುದ್ದು ಸ್ಥಳ ಪರಿಶೀಲನೆ ನಡೆಸಿ ಮೂಲಭೂತ ಸೌಲಭ್ಯ ಒದಗಿಸಿ ವರದಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ ಜಿಲ್ಲಾಡಳಿತದಿಂದ ಸುಮಾರು 2437 ಸ್ಮಶಾನ ಭೂಮಿ ಗುರುತಿಸಿದ್ದು, ಈ ಪೈಕಿ 600 ಸ್ಮಶಾನ ಭೂಮಿಗಳನ್ನು ಜಿಪಿಎಸ್ ಮಾಡಿ ಸಂಬಂಧಿಸಿದ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದೆ, ಹಸ್ತಾಂತರವಾಗಿರುವ ಸ್ಮಶಾನ ಭೂಮಿಯನ್ನು ಆಯಾ ಪಂಚಾಯಿತಿಗಳು ಸುತ್ತಲೂ ಬೇಲಿ ಹಾಕಿ ಸಾರ್ವಜನಿಕರ ಸ್ಮಶಾನ ಭೂಮಿಯೆಂದು ಫಲಕ ಅಳವಡಿಸಿ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ ಅವರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿಗಳಾದ ಗೌರವ್ ಕುಮಾರ್ ಶೆಟ್ಟಿ, ಸಪ್ತಶ್ರೀ ಹಾಗೂ ಗೋಟೂರು ಶಿವಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಅಬ್ದುಲ್ ಖಾದರ್, ವಿವಿಧ ತಾಲೂಕು ತಹಶೀಲ್ದಾರರು, ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿಗಳು, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!