ತುಮಕೂರು: ಸ್ಥಳೀಯ ಸಾರ್ವಜನಿಕರು ಸಂಘ-ಸಂಸ್ಥೆಗಳ ಅಭಿಪ್ರಾಯದಂತೆ ಸರ್ಕಾರದ ವತಿಯಿಂದ ಶ್ರೀಸಿದ್ಧಿ ವಿನಾಯಕ ಮಾರುಕಟ್ಟೆ ಪ್ರದೇಶದಲ್ಲಿ ಕೈಗೊಳ್ಳುತ್ತಿರುವ ಮಲ್ಟಿ ಯುಟಿಲಿಟಿ ಮಾಲ್ ವಿತ್ ಕಾರ್ ಪಾರ್ಕಿಂಗ್ ಯೋಜನೆ ಕೈಬಿಡುವಂತೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಒತ್ತಾಯಿಸಿದ್ದಾರೆ.
ಶ್ರೀ ಸಿದ್ಧಿವಿನಾಯಕ ಮಾರುಕಟ್ಟೆ ಪ್ರದೇಶದಲ್ಲಿ ಪಿಪಿಪಿ ಮಾದರಿಯಲ್ಲಿ ಮಲ್ಟಿ ಯುಟಿಲಿಟಿ ಮಾಲ್ ವಿತ್ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಯೋಜನೆ ಕೈ ಬಿಡುವಂತೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಸರ್ಕಾರವನ್ನು ಒತ್ತಾಯಿಸಿದರು.
ಈ ಪ್ರದೇಶದಲ್ಲಿ ಪಿಪಿಪಿ ಮಾದರಿಯಲ್ಲಿ ಮಲ್ಟಿ ಯುಟಿಲಿಟಿ ಮಾಲ್ ವಿತ್ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಯೋಜನೆಗೆ ನಗರದ ನಾಗರಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ, ಈ ಯೋಜನೆ ಅನುಷ್ಠಾನಗೊಳಿಸಲು ಈ ಪ್ರದೇಶದಲ್ಲಿರುವ ಶ್ರೀಸಿದ್ಧಿವಿನಾಯಕ ದೇವಸ್ಥಾನ ನೆಲ-ಸಮ ಮಾಡಲಾಯಿತು, ಅಂದಿನಿಂದ ಇಂದಿನವರೆಗೂ ಈ ಯೋಜನೆ ಅನುಷ್ಠಾನಗೊಳಿಸಲು ತುಮಕೂರು ನಗರದ ನಾಗರಿಕರು, ಸಂಘ- ಸಂಸ್ಥೆಗಳು, ವಿರೋಧ ವ್ಯಕ್ತಪಡಿಸಿದ ಕಾರಣ ಈ ಯೋಜನೆ ಸ್ಥಗಿತಗೊಳಿಸಲಾಗಿತ್ತು, ಆದರೆ ಏಕಾಏಕಿ ಮತ್ತೊಮ್ಮೆ ಯೋಜನೆ ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದ್ದು, ಖಾಸಗಿ ಒಡತನಕ್ಕೆ ಸರ್ಕಾರದ ಜಾಗ ನೀಡಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಈ ಯೋಜನೆ ಸ್ಥಗಿತಗೊಳಿಸುವಂತೆ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷರು, ಮಾಜಿ ಮಹಾ ನಗರಪಾಲಿಕೆ ಸದಸ್ಯರು ಹಾಗೂ ಮುಖಂಡರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಭೇಟಿ ಮಾಡಿ ಈ ಯೋಜನೆ ಕೈಬಿಡುವಂತೆ ಒತ್ತಾಯಿಸಲಾಯಿತು.
ನಗರದ ಹೃದಯ ಭಾಗದಲ್ಲಿ ಹಲವು ವರ್ಷಗಳಿಂದ ಸಿದ್ಧಿ ವಿನಾಯಕ ಮಾರುಕಟ್ಟೆ ಸಾರ್ವಜನಿಕರಿಗೆ ಅನುಕೂಲಕರವಾಗಿತ್ತು, ಸ್ಥಳೀಯ ತರಕಾರಿ, ಹೂವು, ಹಣ್ಣು ಮಾರುವ ಸಣ್ಣ ವ್ಯಾಪಾರಸ್ಥರು ವ್ಯಾಪಾರ ಚಟುವಟಿಕೆಯಲ್ಲಿ ತೊಡಗಿದ್ದು, ಇವರೆಲ್ಲರಿಗೂ ತುಂಬಾ ತೊಂದರೆಯುಂಟಾಗುತ್ತದೆ, ಇವೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಮಲ್ಟಿ ಯುಟಿಲಿಟಿ ಮಾಲ್ ವಿತ್ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಯೋಜನೆ ರದ್ದುಗೊಳಿಸುವಂತೆ ಈ ಹಿಂದೆಯೇ ಮನವಿ ಸಲ್ಲಿಸಲಾಗಿತ್ತು, ಆದರೆ ಈ ಯೋಜನೆ ಮತ್ತೊಮ್ಮೆ ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿರುವುದು ಯಾವುದೇ ರೀತಿಯಲ್ಲಿ ಸರಿಯಾದ ಕ್ರಮವಲ್ಲ, ಸ್ಥಳೀಯ ಸಾರ್ವಜನಿಕರು, ಸಂಘ- ಸಂಸ್ಥೆಗಳ ಅಭಿಪ್ರಾಯದಂತೆ ಈ ಯೋಜನೆ ಕೈ ಬಿಡುವಂತೆ ಕೋರಿದರು.
ಬಿಜೆಪಿ ರಾಜ್ಯ ರೈತ ಮೋರ್ಚಾ ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್, ನಗರಪಾಲಿಕೆ ಮಾಜಿ ಮೇಯರ್ ಬಿ.ಜಿ.ಕೃಷ್ಣಪ್ಪ, ಟೂಡಾ ಮಾಜಿ ಅಧ್ಯಕ್ಷ ಬಿ.ಎಸ್.ನಾಗೇಶ್, ನಗರ ಬಿಜೆಪಿ ಅಧ್ಯಕ್ಷ ಟಿ.ಹೆಚ್.ಹನುಮಂತರಾಜು, ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ, ಮಹಾನಗರಪಾಲಿಕೆ ಮಾಜಿ ಸದಸ್ಯರಾದ ಸಿ.ಎನ್.ರಮೇಶ್, ಮಂಜುನಾಥ್, ಇಂದ್ರಕುಮಾರ್, ಮಲ್ಲಿಕಾರ್ಜುನ್ ಇತರರು ಇದ್ದರು.
Comments are closed.